Advertisement

Politics; ಹಾಗೆ ಹೇಳಬಾರದಿತ್ತು….: ಸಿಎಂ ಸಿದ್ದರಾಮಯ್ಯ ಬಳಿ ಕ್ಷಮೆ ಕೇಳಿದ ಬಿಜೆಪಿ ನಾಯಕ

05:29 PM Sep 03, 2024 | Team Udayavani |

ಬೆಂಗಳೂರು: ರಾಜಕೀಯದಲ್ಲಿ ಸದಾ ನಾಯಕರುಗಳು ಆರೋಪ – ಪ್ರತ್ಯಾರೋಪಗಳನ್ನು ಮಾಡುತ್ತಲೇ ಇರುತ್ತಾರೆ. ಮಾತಿನ ಪೆಟ್ಟು, ಅಸ್ತ್ರಗಳನ್ನು ಪ್ರಯೋಗಿಸುತ್ತಾ ಎದುರಾಳಿಯನ್ನು ಕಟ್ಟಿ ಹಾಕಲು ನೋಡುತ್ತಿರುತ್ತಾರೆ. ಕೆಲವೊಮ್ಮೆ ಈ ಮಾತಿನ ವರಸೆ ಸಭ್ಯತೆಯ ಗಡಿ ದಾಟಿ ಹೋಗವುದನ್ನು ಈ ರಾಜ್ಯದ ಜನತೆ ಕಂಡಿದೆ. ಆದರೆ ಇದೀಗ ಮಾತಿನ ಭರದಲ್ಲಿ ತಪ್ಪಿ ಆಡಿದ ಮಾತಿಗೆ ಬಿಜೆಪಿ ನಾಯಕರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಲ್ಲಿ ಕ್ಷಮೆ ಕೇಳಿದ್ದಾರೆ.

Advertisement

ವಿರೋಧ ಪಕ್ಷದ ಉಪನಾಯಕ, ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್‌ (Arvind Bellad) ಅವರು ತಪ್ಪಿ ಆಡಿದ ಮಾತಿಗಾಗಿ ಸಿಎಂ ಸಿದ್ದರಾಮಯ್ಯ ಅವರ ಬಳಿ ಕ್ಷಮೆ ಕೇಳಿ ಪತ್ರ ಬರೆದಿದ್ದಾರೆ.

ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ಅರವಿಂದ ಬೆಲ್ಲದ್‌ ಅವರು “ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ʼಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾʼ” ಎಂದು ಹೇಳಿದ್ದರು. ಇದೀಗ ಈ ಪದ ಬಳಕೆಯ ಬಗ್ಗೆ ಅರವಿಂದ ಬೆಲ್ಲದ್‌ ಅವರು ಬೇಸರ ವ್ಯಕ್ತಿ ಪಡಿಸಿ ಪತ್ರದ ಮುಖಾಂತರ ಕ್ಷಮೆಯಾಚಿಸಿದ್ದಾರೆ.

ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿ ಅವರಿಂದ ಬೆಲ್ಲದ್‌ ಅವರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲಿ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸ ಬಯಸುತ್ತೇನೆ ಎಂದಿದ್ದಾರೆ.

ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ. ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿ ಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next