ವಿಧಾನಪರಿಷತ್: ಸತತ ಮೂರನೇ ದಿನವೂ ವಿಧಾನ ಪರಿಷತ್ ಕಲಾಪ ಆರಂಭದಲ್ಲೇ ಗದ್ದಲದ ನಡುವೆ ಮುಂದೂಡಲ್ಪಟ್ಟಿತು. ಶುಕ್ರವಾರ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷದ ಸದಸ್ಯರು ಬಾವಿಗಿಳಿದು ಬಹುಮತ ಕಳೆದುಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದರು.
ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಸದಸ್ಯರು ರಾಜ್ಯದ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಮಾತಿನ ಚಕಮಕಿ ತಾರಕಕ್ಕೇರಿದ ಪರಿಣಾಮ ಸಭಾಪತಿ ಸ್ಥಾನದಲ್ಲಿದ್ದ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಸಭೆಯನ್ನು 3.30ಕ್ಕೆ ಮುಂದೂಡಿದರು.
ಇದಕ್ಕೂ ಮುನ್ನ ಮಾತನಾಡಿದ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ” ಹಿಂದೆ ಸಾಕಷ್ಟು ಬಾರಿ ಒಂದೇ ದಿನದಲ್ಲಿ ವಿಶ್ವಾಸಮತ ಸಾಬೀತುಪಡಿಸಲಾಗಿದೆ. ಆದರೆ ಈಗ ಕುಮಾರಸ್ವಾಮಿ ಅವರು ಅನಗತ್ಯ ವಿಳಂಬ ಮಾಡುತ್ತಿದ್ದಾರೆ. ಬಹುಮತ ಇಲ್ಲ ಎನ್ನುವ ಕಾರಣಕ್ಕೇ ಹೀಗೆ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.
ಇದಕ್ಕೆ ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ವಾಗ್ವಾದ ನಡೆದು, ಗೊಂದಲದ ವಾತಾವರಣ ನಿರ್ಮಾಣವಾಯಿತು. ಅಂತಿಮವಾಗಿ ಸದನದ ಕಲಾಪವನ್ನು ಮುಂದೂಡಲಾಯಿತು.
ಈ ಮಧ್ಯೆ ಕಲಾಪದಲ್ಲಿ “ಬಹುಮತ ಕಳೆದುಕೊಂಡರೂ ರಾಜೀನಾಮೆ ನೀಡದ ಮುಖ್ಯಮಂತ್ರಿಗೆ ಧಿಕ್ಕಾರ’ ಎಂದು ಪ್ರತಿಪಕ್ಷದ ಸದಸ್ಯರು ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದರೆ, ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಸದಸ್ಯರು, “ಬಿಜೆಪಿಯ ರಾಜ್ಯಪಾಲರಿಗೆ ಧಿಕ್ಕಾರ…’ ಎಂದು ಭಿತ್ತಿಪತ್ರಗಳನ್ನು ಪ್ರದರ್ಶಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.