ಬೆಂಗಳೂರು: ‘ರಾಜ್ಯದಲ್ಲಿ ಹೆಚ್ಚುತ್ತಿರುವ ವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರು ಕಟ್ಟೆಚ್ಚರ ವಹಿಸಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಚರ್ಚಿಸಿದರು. ಬೆಂಗಳೂರು ನಗರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ನಿಗಾ ವಹಿಸಬೇಕು. ವಿಶ್ವಮಟ್ಟದ ತಂತ್ರಜ್ಞಾನ ಬಳಸಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ರಾತ್ರಿ 8 ರಿಂದ ಬೆಳಗ್ಗೆ 6 ಗಂಟೆಯವರೆಗೆ ಗಸ್ತು ತಿರುಗುವಂತೆ ಮುಖ್ಯಮಂತ್ರಿಗಳು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರಿನಲ್ಲಿ ಭಯೋತ್ಪಾದಕರು ಆಶ್ರಯ ಪಡೆದಿರುವ ಬಗ್ಗೆ ಎಚ್ಚರ ವಹಿಸುವಂತೆ ತಿಳಿಸಿದ ಅವರು, ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ಕೋಮುಗಲಭೆ ಸಂಭವಿಸದಂತೆ ಎಚ್ಚರ ವಹಿಸಬೇಕು. ಕೋಮು ಗಲಭೆಗಳಿಗೆ ಪ್ರಚೋದನೆ ನೀಡುವವರು ಯಾರೇ ಇರಲಿ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದರು.
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 25,174 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ ಮುಖ್ಯಮಂತ್ರಿಗಳು ನಿರ್ಮಾಣ ಹಂತದಲ್ಲಿರುವ ಪೊಲೀಸರ ವಸತಿಗೃಹಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದೆಂದರು.
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುವುದು. ಪೊಲೀಸ್ ಇಲಾಖೆಯ ವಿವಿಧ ಕಾರ್ಯಕ್ರಮಗಳಿಗೆ ಅಗತ್ಯವಿರುವ ಅನುದಾನವನ್ನು ಹಣಕಾಸಿನ ಸ್ಥಿತಿಗತಿ ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು.
ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೀ ನಾರಾಯಣ, ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್. ರಾಜು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.