ಧಾರವಾಡ: ಕೋವಿಡ್ ಮಹಾಮಾರಿ ನಿಯಂತ್ರಣ ಕ್ರಮಗಳು, ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಮಳೆ ಪ್ರಮಾಣ, ನೀರಾವರಿ ಯೋಜನೆಗಳ ಕುರಿತಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಪ್ರಮುಖ ವಿಚಾರಗಳು ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪನವರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಕೈಗೊಂಡ ವಿಡಿಯೋ ಸಂವಾದದಲ್ಲಿ ಪ್ರಸ್ತಾಪವಾದವು.
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಜಿಲ್ಲೆಯ ಕೋವಿಡ್ ನಿಯಂತ್ರಣ ಕ್ರಮಗಳು, ಮಳೆ ಪ್ರಮಾಣ, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು, ನೀರಾವರಿ ಸೌಕರ್ಯಗಳ ಕುರಿತು ಮಾಹಿತಿ ನೀಡಿದರು. ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳು ಧಾರವಾಡ ಸೇರಿದಂತೆ ವಿವಿಧ 11 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಧಿಕಾರಿಗಳೊಂದಿಗೆ ಚರ್ಚಿಸಿದರು.
ಸಚಿವ ಜಗದೀಶ ಶೆಟ್ಟರ ಮಾತನಾಡಿ, ನೆರೆ ಹೊರೆಯ ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗಾಗಿ ಕಿಮ್ಸ್‌ಗೆ ಬರುವುದು ಸಾಮಾನ್ಯ. ಜಿಲ್ಲೆಯಲ್ಲಿ ಇದುವರೆಗೆ 33ಜನ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಇದರಲ್ಲಿ ಶೇ.30 ಜನ ಬೇರೆ ಜಿಲ್ಲೆಯವರೇ ಆಗಿದ್ದಾರೆ. ಸೋಂಕು ತೀವ್ರತರವಾಗಿ ಏರಿಕೆಯಾಗುತ್ತಿರುವುದರಿಂದ ವಾಣಿಜ್ಯೋದ್ಯಮ ಸಂಸ್ಥೆ, ವ್ಯಾಪಾರಸ್ಥರ ಸಂಘಟನೆಗಳು ಮುಂಬರುವ 10 ದಿನಗಳ ಕಾಲ ಲಾಕ್‌ಡೌನ್ ಮಾಡುವುದು ಒಳಿತು ಎಂಬ ಅಭಿಪ್ರಾಯವನ್ನು ಸಾರ್ವಜನಿಕ ವಲಯದಲ್ಲಿ ವ್ಯಕ್ತಪಡಿಸುತ್ತಿದ್ದಾರೆಂದು ವಿವರಿಸಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಸೋಂಕು ದೃಢಪಟ್ಟು ಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ 1,135 ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ. ಲಕ್ಷಣ ರಹಿತ ರೋಗಿಗಳಿಗೆ 9,000 ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಕಳೆದ ಏಪ್ರಿಲ್‌ನಿಂದ ಪ್ರಸಕ್ತ ಜುಲೈ ತಿಂಗಳಿನವರೆಗೆ ಮುಂಗಾರು ಮಳೆ ಸರಾಸರಿಗಿಂತ ಅಧಿಕವಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮತ್ತು ವಿತರಣೆ ಸಮರ್ಪಕವಾಗಿದೆ ಎಂದರು.
ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್, ಎಸ್ಪಿ ವರ್ತಿಕಾ ಕಟಿಯಾರ್, ಜಿಪಂ ಸಿಇ ಒ ಡಾಣಬಿ.ಸಿ. ಸತೀಶ್, ಮಹಾನಗರ ಪಾಲಿಕೆ ಆಯುಕ್ತ ಡಾಣಸುರೇಶ ಇಟ್ನಾಳ ಸೇರಿದಂತೆ ಕಿಮ್ಸ್, ಎಸ್‌ಡಿಎಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೃಷಿ, ನೀರಾವರಿ ಮತ್ತಿತರರ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.