ಬೆಂಗಳೂರು:ಶತಾಯುಷಿ ಸಿದ್ದಗಂಗಾ ಮಠಾಧೀಶರಾದ ಡಾ. ಶಿವಕುಮಾರ ಸ್ವಾಮೀಜಿ ಅವರು ಬುಧವಾರ ರಾತ್ರಿಯಿಂದ ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರಿನ ಕೆಂಗೇರಿ ಸಮೀಪದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
110ವರ್ಷದ ಶ್ರೀಗಳಿಗೆ ಬೆಳಗ್ಗೆ ವಯೋಸಹಜವಾಗಿ ಬಳಲಿಕೆ ಕಾಣಿಸಿಕೊಂಡಿದ್ದು , ಅವರ ಆರೋಗ್ಯ ಸ್ಥಿರವಾಗಿದ್ದು ಎಂದಿನಂತೆ ಲವಲವಿಕೆಯಿಂದ ಇದ್ದಾರೆ. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುತ್ತಿರುವುದಾಗಿ ಮಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಮಠದ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ದಾಖಲಾತಿಗಾಗಿ ಬರುತ್ತಿದ್ದಾರಾ.ಫಲಿತಾಂಶ ಹೇಗಿದೆ ಎನ್ನುವ ಕುರಿತಾಗಿ ಶ್ರೀಗಳು ವಿಚಾರಿಸಿದ್ದಾರೆ. ಯರೋಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸೋಮಣ್ಣ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಶ್ರೀಗಳಿಗೆ ಮಠದಲ್ಲೇ 5 ಮಂದಿ ತಜ್ಞ ವೈದ್ಯರು ಚಿಕಿತ್ಸೆ ನೀಡಿದ್ದು ,ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಜಿಲ್ಲೆಯಲ್ಲಿ ಬಿಸಿಲಿನ ಝಳ ತೀವ್ರವಾಗಿರುವ ಹಿನ್ನೆಲೆಯಲ್ಲಿ ಶ್ರೀಗಳಿಗೆ ಜ್ವರ ಹಾಗೂ ನಿಶ್ಯಕ್ತಿ ಕಾಣಿಸಿಕೊಂಡಿತ್ತು.
ಶ್ರೀಗಳ ರಕ್ತದ ಮಾದರಿಯನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ರಕ್ತಪರೀಕ್ಷೆ ವರದಿ ಬಂದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ವ್ಯತ್ಯಾಸ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿದ್ದಂತೆ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಠದಲ್ಲಿ ಪೊಲೀಸ್ ಭದ್ರತೆ ನೀಡಲಾಗಿದೆ.