ಬೆಂಗಳೂರು: ರಾಜ್ಯದಲ್ಲಿ ಉಂಟಾಗಿದ್ದ ಅತಿವೃಷ್ಟಿಯಿಂದ ಹಲವರು ಮನೆ ಮಠ ಕಳೆದುಕೊಂಡಿದ್ದು, ಅವರಿಗೆ ಯಾವುದೇ ರೀತಿಯ ಪರಿಹಾರ ದೊರಕಿಸಿ ಕೊಡುವಲ್ಲಿ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ.
ನೆರೆಯಿಂದ ಆಸ್ತಿಪಾಸ್ತಿ ಕಲೆದುಕೊಂಡಿದ್ದ ಚಿಕ್ಕಮಗಳೂರಿನ ರೈತನೊಬ್ಬ ಸರಿಯಾದ ಪರಿಹಾರ ಸಿಗದ ಕಾರಣ ಆತ್ಮಹತ್ಯೆಗೈದ ಪ್ರಕರನವನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದ್ದೂ ಸತ್ತಂತಿವೆ ಎಂದು ಟೀಕಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿರುವ ಸಿದ್ದರಾಮಯ್ಯನವರು, ದಿನಕ್ಕೊಂದು ದೇಶ ಸುತ್ತುವ, ಗಳಿಗೆಗೊಂದು ವೇಷ ಬದಲಿಸುವ ಈಗಿನ ಪ್ರಧಾನಿಗಳಿಗೆ ಒಂದು ಘಳಿಗೆ ಬಂದು ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ ಎಂದಿದ್ದಾರೆ.
ನೆರೆಪರಿಹಾರಕ್ಕಾಗಿ ಕೇಂದ್ರವನ್ನು ಕೇಳುವ ಧೈರ್ಯ ರಾಜ್ಯ ಸರಕಾರಕ್ಕಿಲ್ಲ ಎಂದಿರುವ ಮಾಜಿ ಸಿಎಂ, 2009ರಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ ಅತಿವೃಷ್ಟಿಯ ಸಂದರ್ಭದಲ್ಲಿ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಧಾವಿಸಿ ಬಂದು ಸಮೀಕ್ಷೆ ನಡೆಸಿ ತಕ್ಷಣ ರೂ.1500 ಕೋಟಿ ಪರಿಹಾರ ಘೋಷಿಸಿದ್ದರು. ಈಗಿನ ಪ್ರಧಾನಿ ಎಲ್ಲಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ಚಂದ್ರಯಾನ 2ರ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯಯ್ಯ, ನಮ್ಮ ಪ್ರತಿಭಾವಂತ ವಿಜ್ಞಾನಿಗಳು ಹಗಲಿರುಳು ಶ್ರಮಿಸಿ ನಡೆಸಿದ ಚಂದ್ರಯಾನ-2 ಪ್ರಯೋಗ, ನರೇಂದ್ರ ಮೋದಿ ಹಾಜರು ಹಾಕಿದರೂ ವಿಫಲವಾಯಿತು. ಪ್ರಧಾನಿಗಳು ಅಷ್ಟೇ ಸಮಯವನ್ನು ಅತಿವೃಷ್ಟಿ ಪೀಡಿತ ಪ್ರದೇಶದ ಭೇಟಿಗೂ ನೀಡಿದ್ದರೆ ಪ್ರಾಯಶ್ಚಿತ ಮಾಡಿಕೊಂಡಂತಾಗುತ್ತಿತ್ತು ಎಂದರು.
ಮತ್ತೊಂದು ಟ್ವೀಟ್ ನಲ್ಲಿ, ಕಾಲ್ಗುಣದಂತಹ ಮೌಢ್ಯದಲ್ಲಿ ನನಗೆ ನಂಬಿಕೆ ಇಲ್ಲ. ಆದರೆ 2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗಲೇ ಅತಿವೃಷ್ಟಿ ಬಂದೆರಗಿತು. ನಮ್ಮ ಕಾಲದಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿದಾಗ ನಮ್ಮ ಸರ್ಕಾರ ಕೃಷಿಭಾಗ್ಯ, ಅನ್ನಭಾಗ್ಯ, ಕ್ಷೀರಧಾರೆಯಂತ ಯೋಜನೆಗಳ ಮೂಲಕ ನೆರವಾಗಿ ಆತ್ಮಹತ್ಯೆಯ ಸರಣಿಯನ್ನು ತಡೆದಿದ್ದೆವು ಎಂದಿದ್ದಾರೆ.
ಅತಿವೃಷ್ಠಿ ಪೀಡಿತ ಪ್ರದೇಶಕ್ಕೆ ಪರಿಹಾರಕ್ಕಾಗಿ ಒತ್ತಾಯಿಸಿದಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಕೇಂದ್ರ ಸರ್ಕಾರ ದಿವಾಳಿಯಾಗಿ ಹೋಗಿರುವ ಸೂಚನೆ ಇದು. ಇದು ನಿಜವಲ್ಲದೆ ಇದ್ದರೆ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹ ಪಡಿಸಿದರು.