ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸ ಬೇಕು ಎಂಬ ಒತ್ತಡದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರವಿವಾರ ಕೋಲಾರ ಪ್ರವೇಶಿಸಲಿದ್ದಾರೆ.
ಸಿದ್ದರಾಮಯ್ಯ ಆಗಮನ ಹಿನ್ನೆಲೆಯಲ್ಲಿ ಭರ್ಜರಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿ ಭೇಟಿ ಸಂದರ್ಭದಲ್ಲಿ ನಗರದ ಶಕ್ತಿ ದೇವತೆ ಕೋಲಾರಮ್ಮ ದೇವಾಲಯದಲ್ಲಿ ಪೂಜೆ, ಚರ್ಚ್ ಮತ್ತು ಮಸೀದಿಗೆ ಭೇಟಿ, ಮಹಾತ್ಮಾ ಗಾಂಧಿ, ಸಂವಿಧಾನಶಿಲ್ಪಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್, ವಾಲ್ಮೀಕಿ, ಕನಕದಾಸ, ಯೋಗಿ ನಾರಾಯಣ ಯತೀಂದ್ರರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಲ್ಲದೆ ಸೀತಿ ಬೆಟ್ಟದ ಭೈರವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿದೆ. ದಿ| ಬೈರೇಗೌಡರ ಸಮಾಧಿ ಸ್ಥಳಕ್ಕೆ ಭೇಟಿ ಕಾರ್ಯಕ್ರಮ ನಿಗದಿಯಾಗಿದೆ. ಅನಂತರ ಮಾಜಿ ಸಚಿವ ಕೃಷ್ಣ ಬೈರೇಗೌಡರ ತೋಟದ ಮನೆಯಲ್ಲಿ ಪ್ರಮುಖ ಮುಖಂಡರ ಸಭೆ ನಡೆಸಲಿದ್ದಾರೆ.
ರಾಜಕೀಯ ವಲಯದಲ್ಲಿ ಸಿದ್ದರಾಮಯ್ಯ ಅವರ ಕೋಲಾರ ಭೇಟಿ ಸಂಚಲನ ಮೂಡಿಸಿದ್ದು, ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಮುನ್ಸೂಚನೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಕೋಲಾರಕ್ಕೆ ಭೇಟಿ ನೀಡುವ ಮುನ್ನ ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಜತೆಗೂ ದೂರವಾಣಿ ಮೂಲಕ ಮಾತನಾಡಿ ಒಪ್ಪಿಗೆ ಪಡೆದಿದ್ದಾರೆ ಎನ್ನಲಾಗಿದೆ.
ಆದರೆ ರವಿವಾರ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಗುಜರಾತ್ ಪ್ರವಾಸದಲ್ಲಿ ಇರಲಿದ್ದಾರೆ. ಹೀಗಾಗಿ ಅವರು ಸಿದ್ದರಾಮಯ್ಯ ಜತೆಗೆ ಇರುವುದಿಲ್ಲ. ಇದು ನಾನಾ ರೀತಿಯ ವ್ಯಾಖ್ಯಾನಗಳಿಗೆ ಎಡೆಮಾಡಿಕೊಟ್ಟಿದೆ.
Related Articles
ರವಿವಾರದ ಕಾರ್ಯಕ್ರಮದಲ್ಲಿ ಕೆ.ಎಚ್. ಮುನಿಯಪ್ಪ ಬೆಂಬಲಿಗರು ಎಷ್ಟರ ಮಟ್ಟಿಗೆ ಭಾಗಿಯಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಬಂಗಾರಪೇಟೆ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇಲ್ಲಿ ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಅವರ ಬೆಂಬಲಿಗರಾದ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದ ಸಿದ್ದರಾಮಯ್ಯರನ್ನು ಅದ್ದೂರಿಯಾಗಿ ಸ್ವಾಗತಿಸಿ, ವಿವಿಧ ದಲಿತ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಮಾಲಾರ್ಪಣೆ ಮಾಡಲಾಗುವುದು ಎನ್ನಲಾಗಿದೆ.
ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ನಸೀರ್ ಅಹ್ಮದ್, ವಿಧಾನಪರಿಷತ್ ಸದಸ್ಯ ಅನಿಲ್‌ಕುಮಾರ್, ಶಾಸಕರಾದ ಶ್ರೀನಿವಾಸಗೌಡ, ನಂಜೇಗೌಡ, ಎಸ್.ಎನ್. ನಾರಾಯಣಸ್ವಾಮಿ, ಚಿಂತಾಮಣಿಯ ಮಾಜಿ ಶಾಸಕ ಡಾ| ಸುಧಾಕರ್, ಮುಳಬಾಗಿಲಿನ ಕೊತ್ತೂರು ಮಂಜುನಾಥ್, ಮನೋಹರ್ ಅವರು ಸಿದ್ದರಾಮಯ್ಯ ಮೇಲೆ ಒತ್ತಡ ತಂದು ಕೋಲಾರಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಮಾಜಿ ಸಚಿವ ಕೃಷ್ಣ ಬೈರೇಗೌಡರು ಸಾರಥ್ಯ ವಹಿಸಿದ್ದಾರೆ.
ಚಿಕ್ಕಬಳ್ಳಾಪುರಕ್ಕೆ ಸಮರ್ಥ ಅಭ್ಯರ್ಥಿ ಕೊಡಿ
ಸಿದ್ದರಾಮಯ್ಯ ನಿವಾಸದಲ್ಲಿ ಶನಿವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಮುಖಂಡರ ಸಭೆ ನಡೆದು ಚಿಕ್ಕಬಳ್ಳಾಪುರಕ್ಕೆ ಸಮರ್ಥ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಚರ್ಚಿಸಲಾಯಿತು. ಮಾಜಿ ಸಚಿವ ಎಂ.ಆರ್. ಸೀತಾರಾಂ ಅವರ ಪುತ್ರ ರಕ್ಷಾ ರಾಮಯ್ಯ ಅವರ ಹೆಸರು ಪ್ರಸ್ತಾವವಾಯಿತು. ಜತೆಗೆ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಮೊಮ್ಮಗ ಸೇರಿ ಹಲವರ ಹೆಸರುಗಳ ಬಗ್ಗೆ ಚರ್ಚಿಸಲಾಯಿತು. ಎಲ್ಲರೂ ಸೇರಿ ಒಮ್ಮತದ ಅಭ್ಯರ್ಥಿಯ ಹೆಸರು ಕೊಡಿ ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.