ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಸರಿಯಾಗಿ ಸ್ಪಂದಿಸದಿರುವುದರಿಂದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಜನರನ್ನು ಸಂಘಟಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
ಪ್ರವಾಹ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿದ್ದು, ಇದರಿಂದ ಪ್ರವಾಹ ಪೀಡಿತ ಜಿಲ್ಲೆಗಳ ಜನರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಅಸಮಾಧಾನ ಗೊಂಡಿದ್ದಾರೆ. ಅವರ ಅಸಮಾಧಾನವನ್ನೇ ಅಸ್ತ್ರವನ್ನಾಗಿ ಬಳಸಿ ಕೊಂಡು ಹೋರಾಟ ಮಾಡಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಬೆಳಗಾವಿ ಪ್ರತಿಭಟನೆ ಫಲ: ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಇತ್ತೀಚೆಗೆ ಕಾಂಗ್ರೆಸ್ ವತಿಯಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದು ಯಶಸ್ವಿಯಾಗಿರುವುದರಿಂದ ಉತ್ಸಾಹಗೊಂಡಿರುವ ಸಿದ್ದರಾಮಯ್ಯ, ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲು ಕಾರ್ಯಕ್ರಮ ರೂಪಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷರಿಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.
ಸಕ್ರಿಯರಾದ ಸಿದ್ದರಾಮಯ್ಯ: ಸಿದ್ದರಾಮಯ್ಯ ಬೆಳಗಾವಿಯಲ್ಲಿ ನಡೆದ ಪ್ರತಿಭಟನೆಯಿಂದ ಉತ್ಸುಕರಾಗಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕ್ರಮ ರೂಪಿಸುವಂತೆ ಸೂಚಿಸಿದ್ದು, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಪಾದಯಾತ್ರೆ ಮೂಲಕ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಿದ್ದಾರೆಂದು ತಿಳಿದು ಬಂದಿದೆ.
ಉಪ ಚುನಾವಣೆ ಅನುಕೂಲ: ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಯಾವುದೇ ರೀತಿಯ ಪರಿಹಾರ ದೊರೆಯದಿರುವುದರಿಂದ ಉ.ಕ. ಭಾಗದ ಏಳು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮೇಲೆ ಪರಿಣಾಮ ಬೀರಲಿದ್ದು, ಹೊಸಪೇಟೆ, ಗೋಕಾಕ್, ಅಥಣಿ, ಕಾಗವಾಡ, ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಅಲೆ ಸೃಷ್ಠಿಸಲು ಪ್ರವಾಹ ಪರಿಹಾರಕ್ಕಾಗಿ ಪಾದಯಾತ್ರೆ ಪ್ರತಿಭಟನೆ ಅನುಕೂಲವಾಗಲಿದೆ ಎನ್ನುವ ಲೆಕ್ಕಾಚಾರ ಸಿದ್ದರಾಮಯ್ಯ ಅವರದ್ದಾಗಿದೆ ಎಂದು ಹೇಳಲಾಗುತ್ತಿದೆ.
ಪಕ್ಷದಲ್ಲಿ ಗೊಂದಲ?: ಆದರೆ, ದಸರಾ ಹಬ್ಬ, ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯತಂತ್ರ ರೂಪಿಸಿ ಕಾರ್ಯಕ್ರಮ ಆಯೋಜನೆ ಮಾಡಲು ಸಮಯ ಬೇಕಾಗಿರುವುದರಿಂದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪಾದಯಾತ್ರೆಯ ಪ್ರತಿಭಟನಾ ರ್ಯಾಲಿ ನಡೆಸಲು ಸಾಧ್ಯವಾಗುತ್ತದೆಯಾ ಎಂದು ಕೆಲವು ನಾಯಕರು ಪಾದಯಾತ್ರೆಯ ಬಗ್ಗೆ ಅಪಸ್ವರ ಎತ್ತಿದ್ದಾರೆ ಎನ್ನಲಾಗುತ್ತಿದೆ.