ಬೆಂಗಳೂರು: ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ 2003ರ ಏ. 1ರಿಂದ 2013ರ ಮಾ. 31ರ ಅವಧಿಯಲ್ಲಿ
ಬಳಸದೆ ಉಳಿಕೆಯಾದ 406 ಕೋಟಿ ರೂ. ಪೈಕಿ 405 ಕೋಟಿ ರೂ.ನಲ್ಲಿ “ಸಿದ್ದು ಸರ್ಕಾರದ ನಡೆ-ಸೇವೆಯ ಕಡೆ’ ಎಂಬ ಯೋಜನೆ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.
ಒಟ್ಟು 405 ಕೋಟಿ ಪೈಕಿ ಶಿಕ್ಷಣ ಇಲಾಖೆಯಲ್ಲಿ 2719 ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 243 ಕೋಟಿ ರೂ., ಆರೋಗ್ಯ ಇಲಾಖೆಯಲ್ಲಿ 309 ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಕ್ಕೆ 122 ಕೋಟಿ ರೂ. ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸರ್ಕಾರಿ ಜಾಗ ಲಭ್ಯವಿರುವ ಕಡೆ 346 ಹೊಸ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ 40 ಕೋಟಿ ರೂ. ನೀಡಲಾಗುತ್ತಿದೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದ ಯೋಜನಾ ಸಚಿವ ಎಂ.ಆರ್. ಸೀತಾರಾಂ, “ಸಿದ್ದು ಸರ್ಕಾರದ ನಡೆ-ಸೇವೆಯ ಕಡೆ’ ಎಂಬ ಹೊಸ ಯೋಜನೆ ರೂಪಿಸಿ ಈ ಕಾರ್ಯಕ್ರಮಳನ್ನು ಜಾರಿಗೊಳಿಸಲಾಗುವುದು. ಸೇವಾ ಕ್ಷೇತ್ರದಲ್ಲಿ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ಕಾಮಗಾರಿಗಳನ್ನು ತುರ್ತಾಗಿ ಮುಗಿಸಬೇಕಾಗಿರುವುದರಿಂದ ಅಲ್ಪಾವಧಿ ಟೆಂಡರ್ ಕರೆದು ಮುಂದಿನ ಆರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಆರೋಗ್ಯ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಆ ಇಲಾಖೆಯ ಎಂಜಿನಿಯರಿಂಗ್ ವಿಭಾಗ, ಶಿಕ್ಷಣ ಇಲಾಖೆ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾಮಗಾರಿಗಳನ್ನು ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗಕ್ಕೆ ವಹಿಸಲಾಗುತ್ತದೆ ಎಂದರು.
ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಮೂರೂ ಇಲಾಖೆಗಳ ಸಂಬಂಧಿಸಿದ ಅಧಿಕಾರಿಗಳ ಮೂಲಕ ಯೋಜನೆ ಜಾರಿಗೊಳಿಸಲಾಗುವುದು.
ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕಾದ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ಸಂಬಂಧಿಸಿದ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ಪ್ರಗತಿ ವರದಿ ನೀಡಬೇಕು ಎಂದು ತಿಳಿಸಿದರು.