ಹುಬ್ಬಳ್ಳಿ: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ವಿಚಾರವನ್ನು ಕಾಂಗ್ರೆಸ್ ಪಕ್ಷದವರೇ ಸೃಷ್ಟಿಸಿದ್ದಾರೆ. ಡಿಸಿಎಂ ಸ್ಥಾನ ಸೃಷ್ಠಿ ವಿಚಾರದಲ್ಲಿ ಸಿಎಂ ಸಿದ್ಧರಾಮಯ್ಯ ಅವರದ್ದೇ ಕೈವಾಡವಿದೆ. ಈ ಕುರಿತು ಡಿ.ಕೆ.ಶಿವಕುಮಾರ ಉತ್ತರಿಸಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಮಾತನಾಡುತ್ತಿಲ್ಲ. ಇದು ಎರಡು ಬಣಗಳ ನಡುವಿನ ಗುದ್ದಾಟವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಡಿಸಿಎಂ ಬಗ್ಗೆ ಡಿ.ಕೆ.ಶಿವಕುಮಾರ ಪ್ರತಿಕ್ರಿಯಿಸಿದ್ದಾರೆ. ಆದರೆ ಸಿಎಂ ಬದಲಾವಣೆ ಕುರಿತು ಸಿದ್ದರಾಮಯ್ಯ ಅವರು ಉತ್ತರಿಸಿಲ್ಲ. ಡಿಸಿಎಂ ಹೇಳಿಕೆ ವಿಚಾರವಾಗಿ ಒಂದು ಕಡೆ ಡಿ.ಕೆ.ಶಿವಕುಮಾರ್ ನೋಟಿಸ್ ನೀಡುವುದಾಗಿ ಹೇಳುವ ಮೂಲಕ ಇದು ಸಿದ್ದರಾಮಯ್ಯ ಅವರ ಬಣಕ್ಕೆ ಸವಾಲು ಹಾಕುತ್ತಾರೆ.
ಕರ್ನಾಟಕದ ಅಭಿವೃದ್ದಿ ಸೇರಿದಂತೆ ಎಲ್ಲ ರಾಜ್ಯಗಳ ಹಿತಾಸಕ್ತಿ ಕಾಪಾಡುವುದಕ್ಕೆ ಕೇಂದ್ರ ಸರ್ಕಾರ ಸದಾ ಸಿದ್ಧವಿದೆ. ಕರ್ನಾಟಕದಿಂದ ಯಾವುದೇ ಅಧಿಕಾರಿಗಳು ಬಂದರೂ ಅವರಿಗೆ ನಾವು ಸ್ಪಂದನೆ ನೀಡುತ್ತೇವೆ. ಆದರೆ ರಾಜ್ಯ ಸರ್ಕಾರ ತಮ್ಮ ವೈಫಲ್ಯ ಮುಚ್ಚಿಹಾಕುವ ಉದ್ದೇಶದಿಂದ ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಹಲವಾರು ನ್ಯೂನತೆಗಳಿವೆ. ತಮ್ಮ ನ್ಯೂನತೆಗಳನ್ನು ಕೇಂದ್ರ ಸರಕಾರದ ಮೇಲೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ತಮ್ಮ ತಪ್ಪುಗಳಿಂದ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದರು.
ಧಾರವಾಡ ಜಿಲ್ಲೆಯಲ್ಲೇ ಕೆಲವೊಂದಿಷ್ಟು ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಕರ್ನಾಟಕ ರಾಜ್ಯದ ನೆಲ, ಜಲ, ಸಂಸ್ಕೃತಿ ಹಾಗೂ ಭಾಷೆಯ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ. ಸುಳ್ಳು ಹೇಳಿ ರಾಜಕೀಯ ಮಾಡುವುದೇ ರಾಜ್ಯ ಸರ್ಕಾರದ ಉದ್ದೇಶವಾಗಿದ್ದರೆ ಅದಕ್ಕೆ ನಮ್ಮಲ್ಲಿ ಉತ್ತರವಿಲ್ಲ. ರಾಜ್ಯ ಸರ್ಕಾರ ರಾಜ್ಯದ ಸಮಗ್ರ ಅಭಿವೃದ್ದಿ ಬಗ್ಗೆ ಯೋಚನೆ ಮಾಡಲಿ ಎಂದರು.