ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಮುದಾಯಗಳಿಗೆ ಪ್ರಾತಿನಿದ್ಯ ನೀಡುವ ವಿಚಾರದಲ್ಲಿ
“ರಾಜಕಾರಣ’ ನಡೆಯುತ್ತಿದೆ.
ಜೆಡಿಎಸ್ ಅಧಿಕಾರಕ್ಕೆ ಬಂದರೆ ದಲಿತ ಹಾಗೂ ಮುಸ್ಲಿಂರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗುವುದು ಎಂದು ಘೋಷಿಸಿದ್ದ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವೆ ಜಟಾಪಟಿಗೆ ಕಾರಣವಾಗಿದೆ.
ಜೆಡಿಎಸ್ ಅಧಿಕಾರಕ್ಕೆ ಬರುವುದೇ ಇಲ್ಲ. ಹೀಗಾಗಿ, ಅವರು ದಲಿತ ಹಾಗೂ ಮುಸ್ಲಿಂ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ಕೊಡುವುದು ಎಲ್ಲಿಂದ ಬಂತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಲೇವಡಿ ಮಾಡಿದ್ದರು. ಇದಕ್ಕೆ ಬೆಂಗಳೂರಿನಲ್ಲಿ ಶನಿವಾರ ತಿರುಗೇಟು ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಲಿತರನ್ನು ಮುಖ್ಯಮಂತ್ರಿ ಮಾಡ್ತೇವೆ ಎಂದು ಸಿದ್ದರಾಮಯ್ಯ ಹೇಳಲಿ ಎಂದು ಸವಾಲು ಹಾಕಿದ್ದಾರೆ.
ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗುತ್ತಿರುವ ಸಿದ್ದರಾಮಯ್ಯ ಅವರಿಗೆ ದಲಿತರು ಹಾಗೂ ಮುಸ್ಲಿಂ ಸಮುದಾಯದ ಮೇಲೆ ಪ್ರೀತಿ ಇದ್ದರೆ ಮುಖ್ಯಮಂತ್ರಿ ಸ್ಥಾನ ಆ ಸಮುದಾಯಕ್ಕೆ ಕೊಡಲಾಗುವುದು ಎಂದು ಹೇಳಲಿ ಎಂದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ದಲಿತರು -ಮುಸಲ್ಮಾನರ ಬಗ್ಗೆ ಕಾಳಜಿ ಯಿಲ್ಲ. ಆ ಎರಡೂ ಸಮುದಾಯಗಳನ್ನು ಓಟ್ ಬ್ಯಾಂಕ್‌ನಂತೆ ಪರಿಗಣಿಸಿ ಅಭಿವೃದ್ಧಿ ಕಡೆಗಣಿಸಿದೆ ಎಂದು ದೂರಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್, ದಲಿತರು ಹಾಗೂ ಅಲ್ಪಸಂಖ್ಯಾಕರ ಬಗ್ಗೆ ಕಾಂಗ್ರೆಸ್ ಪಕ್ಷಕ್ಕಿರುವ ಕಾಳಜಿ ಬಗ್ಗೆ ಕುಮಾರಸ್ವಾಮಿ ಸರ್ಟಿಫಿಕೇಟ್ ಬೇಕಿಲ್ಲ ಎಂದು ಹೇಳಿದ್ದಾರೆ.