Advertisement
ಇತ್ತೀಚೆಗೆ ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿದ್ದ ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಝಾದ್ ಪಕ್ಷದ ಕೆಲವು ಹಿರಿಯ ನಾಯಕರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಅವರ ವಿರೋಧ ಕಡೆಗಣಿಸಿ ಅಧ್ಯಕ್ಷರ ನೇಮಕ ಮಾಡುವ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದು, ಅಲ್ಲದೇ ಅವರ ವಿರೋಧ ಕಟ್ಟಿಕೊಂಡು ಪಕ್ಷ ಯಾವುದೇ ನಿರ್ಧಾರ ಕೈಗೊಳ್ಳುವುದು ಕಷ್ಟ ಎಂಬ ಮಾಹಿತಿ ನೀಡಿದ್ದಾರೆಂದು ತಿಳಿದು ಬಂದಿದೆ.
Related Articles
Advertisement
ಈ ಬಗ್ಗೆ ಹಿರಿಯ ನಾಯಕ ರಮೇಶ್ ಕುಮಾರ್ ಇತ್ತೀಚೆಗೆ ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿಯೂ ಆಕ್ರೋಶ ವ್ಯಕ್ತಪಡಿಸಿದ್ದರು ಎಂದು ಹೇಳಲಾಗುತ್ತಿದೆ. ಸಿಎಎ ಹಾಗೂ ಎನ್‌ಆರ್‌ಸಿ ವಿಷಯದಲ್ಲಿ ರಾಜ್ಯ ಕಾಂಗ್ರೆಸ್‌ನಿಂದ ಯಾವುದೇ ಪ್ರತಿಭಟನೆಗಳು ನಡೆಯದಿರುವ ಬಗ್ಗೆ ಅಲ್ಪ ಸಂಖ್ಯಾತ ವರ್ಗದವರೂ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದ್ದು, ಪಕ್ಷದ ವೇದಿಕೆಗಳಲ್ಲಿ ಚರ್ಚಿಸಲು ಯಾರೂ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ ಎಂಬ ಅಸಹಾಯಕತೆಯನ್ನು ಅಲ್ಪ ಸಂಖ್ಯಾತ ನಾಯಕರು ವ್ಯಕ್ತಪಡಿಸುತ್ತಿದ್ದಾರೆಂದು ತಿಳಿದು ಬಂದಿದೆ.
ದಿನೇಶ್ ಗುಂಡೂರಾವ್ ಮುಂದುವರಿಕೆ ಗೊಂದಲ: ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ವಿಳಂಬವಾಗುತ್ತಿರುವುದರಿಂದ ಸಕ್ರಿಯರಾಗಿ ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ರಾಜೀನಾಮೆ ಸಲ್ಲಿಸಿರುವ ದಿನೇಶ್ ಗುಂಡೂರಾವ್ ಅವರಿಗೆ ಹೈಕಮಾಂಡ್ ಸೂಚಿಸಿತ್ತು ಎನ್ನಲಾಗಿದೆ. ಆದರೆ, ಪಕ್ಷದ ನಾಯಕರ ನಡವಳಿಕೆಯಿಂದ ಬೇಸತ್ತಿರುವ ದಿನೇಶ್ ಗುಂಡೂರಾವ್, ಅರ್ಥವಿಲ್ಲದೇ ಹುದ್ದೆಯಲ್ಲಿ ಮುಂದುವರಿಯುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಸಕ್ರಿಯ ಚಟುವಟಿಕೆಯಿಂದ ಅಂತರ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ.
ಈ ಬೆಳವಣಿಗೆ ಬಗ್ಗೆಯೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದ ದಿನೇಶ್ ಗುಂಡೂರಾವ್‌ಗೆ ತಾತ್ಕಾಲಿಕವಾಗಿ ಅಧ್ಯಕ್ಷರಾಗಿ ಮುಂದುವರಿಯುವಂತೆ ಹೈಕಮಾಂಡ್ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಆದರೆ, ಪಕ್ಷದ ಪದಾಧಿಕಾರಿಗಳಿಲ್ಲದೇ ಪಕ್ಷದ ಚಟುವಟಿಕೆ ನಡೆಸುವುದು ಕಷ್ಟ ಎಂದು ದಿನೇಶ್ ಗುಂಡೂರಾವ್ ಹೈಕಮಾಂಡ್ ಎದುರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ.
* ಶಂಕರ ಪಾಗೋಜಿ