Advertisement

ಕೈ ಮೀರಿದ ಬಿಜೆಪಿ ಆಪರೇಷನ್‌

06:00 AM Sep 15, 2018 | Team Udayavani |

ಬೆಂಗಳೂರು:ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವ ಬಿಜೆಪಿ ಕಾರ್ಯತಂತ್ರ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಆಪರೇಷನ್‌ ಕಮಲಕ್ಕೆ ಒಳಗಾಗಬಹುದಾದ ಶಾಸಕರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಉಪಮುಖ್ಯಮಂತ್ರಿ ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಶತ ಪ್ರಯತ್ನ ನಡೆಸಿದ್ದು, ಶಾಸಕರು ಅವರ ನಿಯಂತ್ರಣಕ್ಕೆ ಸಿಗುತ್ತಿಲ್ಲ ಎನ್ನಲಾಗಿದೆ.

Advertisement

ಇದರ ಬೆನ್ನಿಗೆ, ಇದುವರೆಗೆ ಸರ್ಕಾರಕ್ಕೆ ಪ್ರಮುಖ ಆಸರೆಯಾಗಿರುವ ಡಿ.ಕೆ. ಶಿವಕುಮಾರ್‌ ಮತ್ತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್‌ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಮತ್ತೆ ನೆಚ್ಚಿಕೊಳ್ಳುವ  ಪರಿಸ್ಥಿತಿ ನಿರ್ಮಾಣವಾಗಿದೆ. ಇದುವರೆಗೆ ತಮ್ಮ ಕೆಲ ನಾಯಕರಿಂದಲೇ ಉಪೇಕ್ಷೆಗೆ ಒಳಗಾಗಿದ್ದ ಸಿದ್ದರಾಮಯ್ಯ ಅವರನ್ನು ಸರ್ಕಾರ ಉಳಿಸುವ ಕಸರತ್ತಿಗಾಗಿ ಅವಲಂಬಿಸಬೇಕಾದ ಸ್ಥಿತಿ ಕಾಂಗ್ರೆಸ್‌ ನಾಯಕರಿಗೆ ಉಂಟಾಗಿದೆ.

ಬಿಜೆಪಿ ನಾಯಕರು ಸುಮಾರು 26 ಕ್ಕೂ ಹೆಚ್ಚು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರೊಂದಿಗೆ ಮಾತುಕತೆ ನಡೆಸಿದ್ದು, ಈಗಾಗಲೇ ಎಲ್ಲರೊಂದಿಗೂ ಹಲವಾರು ಸುತ್ತಿನ ಮಾತುಕತೆಗಳು ನಡೆದು ಅಂತಿಮ ಹಂತದ ಆಪರೇಷನ್‌ ಮಾಡಲು ಬಿಜೆಪಿ ನಾಯಕರು ಸಿದ್ದತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಬೆಳಗಾವಿ, ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಹಾವೇರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಸೇರಿರುವ ಇಪ್ಪತ್ತಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ಅವರನ್ನು ತಡೆಯಲು ರಾಜ್ಯ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಶುಕ್ರವಾರ ಬೆಳಿಗ್ಗೆಯಿಂದಲೇ ಕಾರ್ಯ ಪ್ರವೃತ್ತರಾಗಿದ್ದು, ಶಾಸಕರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಹಲವಾರು ರೀತಿಯ ಪ್ರಯತ್ನ ನಡೆಸಿದ್ದಾರೆ .

Advertisement

ಈಗಿರುವ ಪರಿಸ್ಥಿತಿಯಲ್ಲಿ ಬಿಜೆಪಿ ಸಂಪರ್ಕದಲ್ಲಿರುವ ಶಾಸಕರು ತಮ್ಮ ನಾಯಕರ ಭರವಸೆಗಳಿಗೆ ಸೊಪ್ಪು ಹಾಕುತ್ತಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಭಾನುವಾರ ವಿದೇಶ ಪ್ರವಾಸದಿಂದ ವಾಪಸ್‌ ಬಂದ ನಂತರ ಅವರ ಮೂಲಕ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ವಿಶ್ವಾಸದಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರಿದ್ದಾರೆ ಎನ್ನಲಾಗುತ್ತಿದೆ.

ಡಿಕೆಶಿ ಮನೆಯಲ್ಲಿ ಸಮಾಲೋಚನೆ: ಆಪರೇಷನ್‌ ಕಮಲದ ತೀವ್ರತೆ ಅರಿತ ಉಪ ಮುಖ್ಯಮಂತ್ರಿ ಪರಮೇಶ್ವರ್‌ ಶುಕ್ರವಾರ ಬೆಳಿಗ್ಗೆಯೇ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಆಗಮಿಸಿ ಸುಮಾರು ಒಂದು ಗಂಟೆಗಳ ಕಾಲ ಕಾರ್ಯತಂತ್ರಗಳ ಕುರಿತು ಗಂಭೀರ ಚರ್ಚೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಕೂಡ ಸಭೆಯಲ್ಲಿ ಪಾಲ್ಗೊಂಡು ಪಕ್ಷದಲ್ಲಿ ಶಾಸಕರನ್ನು ಉಳಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದರು.

ಅದಾದ ನಂತರ ಉಪ ಮುಖ್ಯಮಂತ್ರಿ ಪರಮೇಶ್ವರ್‌ ಸುಮಾರು ನಾಲ್ಕು ಗಂಟೆಗಳ ಕಾಲ ಬೆಂಗಾವಲು ಪಡೆಯನ್ನು ಬಿಟ್ಟು ಪ್ರತ್ಯೇಕವಾಗಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ಕೆಪಿಸಿಸಿ ಅಧ್ಯಕ್ಷ  ದಿನೇಶ್‌ ಗುಂಡೂರಾವ್‌ ಕೂಡ ಕೆಪಿಸಿಸಿ ಕಚೇರಿಗೆ ಆಗಮಿಸಿ, ಬಿಜೆಪಿ ಆಪರೇಷನ್‌ ಕಮಲ ಮಾಡುವ ಬಗ್ಗೆ  ಆದಾಯ ತೆರಿಗೆ ಇಲಾಖೆಗೆ ದೂರು ನೀಡಲು ನಿರ್ಧರಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ನೇತೃತ್ವದಲ್ಲಿ ಬಿಜೆಪಿ ಕಾಂಗ್ರೆಸ್‌ ಶಾಸಕರಿಗೆ ಕೋಟ್ಯಂತರ ರೂಪಾಯಿ ಆಮಿಷ ಒಡ್ಡಿ ಆಪರೇಷನ್‌ ಕಮಲ ಮಾಡುತ್ತಿದೆ ಎಂದು ಆರೋಪಿಸಿ ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದರು.

– ಶಂಕರ ಪಾಗೋಜಿ

Advertisement

Udayavani is now on Telegram. Click here to join our channel and stay updated with the latest news.

Next