Advertisement

ಸಿದ್ರಾಮುಲ್ಲಾ ಖಾನ್ ಎಂದು ಕರೆದರೆ ಖುಷಿ ಪಡುವೆ: ಸಿದ್ದರಾಮಯ್ಯ

01:11 PM Dec 07, 2022 | Team Udayavani |

ಬೆಂಗಳೂರು : ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಬಹಳಷ್ಟು ಜನ ನನ್ನನ್ನು ‘ಅನ್ನರಾಮಯ್ಯ’, ರೈತರಾಮಯ್ಯ, ಕನ್ನಡ ರಾಮಯ್ಯ, ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಮ್ ಸಮುದಾಯಕ್ಕೆ ನಾನು ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ‘ಸಿದ್ರಮುಲ್ಲಾ ಖಾನ್’ಎಂದು ಕರೆದರೆ ಅದಕ್ಕೂ ಖುಷಿಪಡುವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ತಮ್ಮ ಬಗ್ಗೆ ಸಿದ್ರಾಮುಲ್ಲಾ ಖಾನ್ ಎಂದು ಬಿಜೆಪಿ ಮಾಡಿರುವ ಟೀಕೆಗೆ ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟನೆ ನೀಡಿರುವ ಅವರು, ಸಿದ್ರಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ. ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಗೋವಿಂದ ಭಟ್ಟರ ಶಿಷ್ಯನಾಗಿ ಈಗಲೂ  ನಮ್ಮ ಆತ್ಮಸಾಕ್ಷಿಯನ್ನು ಎಚ್ಚರಿಸುತ್ತಲೇ ಇರುವ ಸಂತ ಶಿಶುನಾಳ ಷರೀಪರ ಪರಂಪರೆ ನಮ್ಮದು. ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಸಂತ ರಮಾನಂದರ ಶಿಷ್ಯತ್ವವನ್ನು ಒಪ್ಪಿಕೊಂಡು ಜಗಮೆಚ್ಚಿದ ಸೂಫಿ ಕವಿ ಕಬೀರನೂ ನಮ್ಮದೇ ಪರಂಪರೆಯವರು. ಆದ್ದರಿಂದ ಮುಸ್ಲಿಮ್ ಹೆಸರನ್ನು ನನ್ನ ಹೆಸರಿಗೆ ಜೋಡಿಸುವ ಮೂಲಕ  ಜಾತ್ಯತೀತತೆಯ ಮೇಲಿನ ನನ್ನ ನಂಬಿಕೆಯನ್ನು ಅವರು ಪುರಸ್ಕರಿಸಿದ್ದಾರೆಂದು ಎಂದು ತಿಳಿದುಕೊಳ್ಳುವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಜ.8 ರಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್‌ನಿಂದ ದಲಿತ ಸಮುದಾಯದ ಐಕ್ಯತಾ ಸಮಾವೇಶ

ಸುಳ್ಳು, ಅಪಪ್ರಚಾರ ಮತ್ತು ಚಾರಿತ್ರ್ಯಹನನವನ್ನೇ ರಾಜಕೀಯ ಪ್ರಚಾರದ ಸರಕನ್ನಾಗಿ ಮಾಡಿಕೊಂಡ ಭಾರತೀಯ ಜನತಾ ಪಕ್ಷ ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿ ನಡೆಸುತ್ತಿರುವ ಅಪ ಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ.ಇಂತಹ ಅಪ ಪ್ರಚಾರವಲ್ಲದೆ ಅವರಾದರೂ ಬೇರೆ ಏನು ಮಾಡಲು ಸಾಧ್ಯ? ಶೂನ್ಯ ಸಾಧನೆ, ಭ್ರಷ್ಟಾಚಾರ, ಅನಾಚಾರಗಳನ ಮಸಿ ಬಳಿದುಕೊಂಡ ಮುಖವನ್ನು ತೋರಿಸಿ ಮತಯಾಚನೆ ಮಾಡಲಿಕ್ಕಾಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ಮೈತುಂಬ ಕಪ್ಪು ಬಳಿದುಕೊಂಡ ದುಷ್ಟರಿಗೆ ಬಿಳಿ ಬಟ್ಟೆ ನೋಡಿದಾಕ್ಷಣ ಕಪ್ಪು ಬಳಿಯೋಣ ಎಂದು ಮನಸ್ಸಾಗುವುದು ಸಹಜ ಗುಣ ಎಂದಿದ್ದಾರೆ.

Advertisement

ಇದು ಅವರ ಸೋಲು, ಹತಾಶೆ ಮತ್ತು ಅಸಹಾಯಕತೆಯನ್ನು ಸೂಚಿಸುತ್ತದೆ. ಒಂದು ಕಾಲದಲ್ಲಿ ಒಂದಷ್ಟು ಸಭ್ಯಸ್ಥರು ಇದ್ದ ಪಕ್ಷ ಇಂತಹ ನೈತಿಕ  ರ್ಧಃ ಪತನಕ್ಕೆ ಬಿದ್ದಿರುವುದರ ಬಗ್ಗೆ ನಾವೆಲ್ಲ ಸಾಮೂಹಿಕವಾಗಿ ಸಂತಾಪ ಸೂಚಿಸೋಣ ಎಂದು ವ್ಯಂಗ್ಯವಾಡಿದರು.

ಹಿಂದೂ ಕೋಮುವಾದದಷ್ಟೇ ಸ್ಪಷ್ಟತೆ ಮತ್ತು ಬದ್ದತೆಯಿಂದ ನಾನು ಮುಸ್ಲಿಮ್ ಮತ್ತಿತರ ಧರ್ಮಗಳ ಕೋಮುವಾದವನ್ನೂ ವಿರೋಧಿಸುತ್ತಾ ಬಂದಿದ್ದೇನೆ.  ಭಾರತೀಯ ಜನತಾ ಪಕ್ಷದ ರೀತಿಯಲ್ಲಿ ರಾಜಕೀಯ ಕಾರಣಕ್ಕಾಗಿ ಒಳ್ಳೆಯವರು-ಕೆಟ್ಟವರು ಎಂಬ ಭೇದವಿಲ್ಲದೆ ಸಾರಾಸಗಟಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡ ಕೋಮುವಾದದ ರಾಜಕೀಯವನ್ನು ನಾನು ಮಾಡಿದವನಲ್ಲ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next