Advertisement
ರಾಜ್ಯದಲ್ಲಿ ಇತ್ತೀಚೆಗೆ ನಡೆದ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಪಕ್ಷ ನಿರೀಕ್ಷಿಸಿದಷ್ಟು ಸ್ಥಾನ ಗೆಲ್ಲಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ರಾಜ್ಯದ ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಲು ದೆಹಲಿಯಿಂದ ಆಗಮಿಸಿದ್ದ ಮಧುಸೂಧನ ಮಿಸ್ತ್ರಿ ನೇರವಾಗಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಮೊದಲು ಅವರ ರಾಜೀನಾಮೆಯನ್ನು ಹಿಂಪಡೆಯುವಂತೆ ಮನವೊಲಿಸುವ ಯತ್ನ ಮಾಡಿದ್ದರು. ಆದರೆ, ಸಿದ್ದರಾಮಯ್ಯ ರಾಜ್ಯದಲ್ಲಿ ಪಕ್ಷದ ಹಿರಿಯ ನಾಯಕರ ಅಸಹಕಾರ ತೋರುತ್ತಿರುವುದರಿಂದ ಪಕ್ಷ ಸಂಘಟನೆ ಮಾಡುವುದು ಕಷ್ಟ ಎಂದು ಬೇಸರ ವ್ಯಕ್ತಪಡಿಸಿ, ಬೇರೆಯವರಿಗೆ ಜವಾಬ್ದಾರಿ ವಹಿಸಿದರೂ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಮಿಸ್ತ್ರಿ ಅವರಿಗೆ ಸಿದ್ದರಾಮಯ್ಯ ಹೇಳಿದ್ದರು ಎಂದು ತಿಳಿದು ಬಂದಿದೆ.
Related Articles
Advertisement
ಹೀಗಾಗಿ ಶುಕ್ರವಾರ ಮಾಜಿ ಸ್ಪೀಕರ್ ರಮೇಶ್‌ಕುಮಾರ್, ಕೃಷ್ಣ ಬೈರೇಗೌಡ, ಎಂ.ಬಿ.ಪಾಟೀಲ್, ಎಸ್.ಆರ್.ಪಾಟೀಲ್, ಈಶ್ವರ್ ಖಂಡ್ರೆ, ವಿ.ಎಸ್.ಉಗ್ರಪ್ಪ, ಎಚ್.ಎಂ.ರೇವಣ್ಣ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಹಾಲಿ ಹಾಗೂ ಮಾಜಿ ಶಾಸಕರು ಮತ್ತು ಸಂಸದರು ಶುಕ್ರವಾರ ತಡ ರಾತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದ್ದು, ಸಿದ್ದರಾಮಯ್ಯ ಅವರ ಒತ್ತಡಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದರೆ, ಈ ಕುರಿತು ಒಂದು ವಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿ ಅಧಿಕೃತವಾಗಿ ತಿಳಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಅವರು ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಸಹಮತ ವ್ಯಕ್ತಪಡಿದ್ದಾರೆ ಎನ್ನುವ ಸಂದೇಶವನ್ನು ಮಧುಸೂಧನ ಮಿಸ್ತ್ರಿ ಮೂಲಕ ಹೈಕಮಾಂಡ್‌ಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸುವಂತೆ ಹಾಗೂ ಅವರಿಗೆ ಪ್ರತಿಪಕ್ಷದ ನಾಯಕನ ಒಂದು ಹುದ್ದೆಯಲ್ಲಿ ಮುಂದುವರೆಸಿ, ಶಾಸಕಾಂಗ ಪಕ್ಷದ ನಾಯಕನ ಹುದ್ದೆಯನ್ನು ಬೇರೆಯವರಿಗೆ ನೀಡಬೇಕೆಂದು ಮನವಿ ಮಾಡಿರುವ ಹಿರಿಯ ನಾಯಕರ ಅಭಿಪ್ರಾಯವನ್ನೂ ಹೈಕಮಾಂಡ್ ಪರಿಶೀಲಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ನಾಯಕರನ್ನು ದೆಹಲಿಗೆ ಕರೆಯಿಸಿಕೊಂಡು ಚರ್ಚಿಸಿ ಅಧಿಕೃತ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.
ಸಂಕ್ರಾಂತಿಗೆ ನೂತನ ಅಧ್ಯಕ್ಷ ?ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತಂತೆಯೂ ಮಧುಸೂಧನ ಮಿಸ್ತ್ರಿ ಎಲ್ಲ ನಾಯಕರ ಅಭಿಪ್ರಾಯ ಪಡೆದಿದ್ದು, ಬಹುತೇಕ ನೂತನ ಅಧ್ಯಕ್ಷರ ನೇಮಕಕ್ಕೆ ರಾಜ್ಯ ನಾಯಕರು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್, ಎಂ.ಬಿ. ಪಾಟೀಲ್ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದ್ದು, ಡಿ.ಕೆ.ಶಿವಕುಮಾರ್‌ಗೆ ಅಧ್ಯಕ್ಷ ಸ್ಥಾನ ದೊರೆತರೆ ಈಶ್ವರ್ ಖಂಡ್ರೆ ಕಾರ್ಯಾಧ್ಯಕ್ಷರಾಗಿಯೇ ಮುಂದುವರೆಯುವ ಸಾಧ್ಯತೆ ಇದೆ. ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಎರಡೂ ಹುದ್ದೆಯಲ್ಲಿ ಮುಂದುವರೆಸುವ ಬಗ್ಗೆ ನಿರ್ಧರಿಸಿದರೆ, ನಂತರ ಎಚ್.ಕೆ.ಪಾಟೀಲ್, ಡಾ.ಜಿ. ಪರಮೇಶ್ವರ್ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ಪರ್ಯಾಯ ಹುದ್ದೆಗಳನ್ನು ನೀಡುವ ಬಗ್ಗೆಯೂ ತೀರ್ಮಾನ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಸಂಕ್ರಾಂತಿ ಹೊತ್ತಿಗೆ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕದ ಜೊತೆಗೆ ರಾಜ್ಯದ ಹಿರಿಯ ನಾಯಕರಿಗೆ ಎಐಸಿಸಿಯಲ್ಲಿ ಜವಾಬ್ದಾರಿ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.