Advertisement

ಬೊಮ್ಮಾಯಿಯವರು ಕಣ್ಣು ಬಿಡಲು ಇನ್ನೆಷ್ಟು ಶಿಕ್ಷಕರ ಹೆಣ ಬೀಳಬೇಕು?: ಸಿದ್ದರಾಮಯ್ಯ ಪ್ರಶ್ನೆ

11:27 AM Feb 25, 2023 | Team Udayavani |

ಬೆಂಗಳೂರು: ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರಿಲ್ಲ. ಶಿಕ್ಷಕರು ಕೇಳುತ್ತಿರುವುದು ತಮ್ಮ ಹಕ್ಕಿನ ಪಿಂಚಣಿಯನ್ನು ಎಂಬ ಕನಿಷ್ಠ ಜ್ಞಾನವಾದರೂ ರಾಜ್ಯ ಸರ್ಕಾರಕ್ಕೆ ಬೇಡವೇ? ಬೊಮ್ಮಾಯಿ ಅವರು ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಅನುದಾನಿತ ಶಾಲಾ ಶಿಕ್ಷಕರು ಪ್ರತಿಭಟನೆ ಆರಂಭಿಸಿ 141 ದಿನಗಳು ಕಳೆದರೂ ಇನ್ನು ಈ ವಿಚಾರ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರ ಇಷ್ಟು ದಿನ ಕೋಮಾದಲ್ಲಿತ್ತು ಎಂಬುದನ್ನು ಸ್ವತಃ ಒಪ್ಪಿಕೊಂಡಿದೆ. ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಯ್ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ. ಕೋಮುಗಲಭೆ ನಡೆದು ಕೊಲೆಯಾದರೆ ಗಂಟೆಯೊಳಗೆ ಹೆಣದ ಸುತ್ತ ನೊಣದಂತೆ ಹೋಗಿ ಕೂರುವ ಬಿಜೆಪಿ ಸರ್ಕಾರಕ್ಕೆ, ಸಾವಿರಾರು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವಗಳು ಅಮೂಲ್ಯ ಅನ್ನಿಸುವುದಿಲ್ಲವೇ ಎಂದಿದ್ದಾರೆ.

ಇದನ್ನೂ ಓದಿ:ಪಾಕ್‌ ನ ಮೊದಲ ತೃತೀಯ ಲಿಂಗಿ ಸುದ್ದಿ ವಾಚಕಿ ಮೇಲೆ ಗುಂಡಿನ ದಾಳಿ

ಇನ್ನಷ್ಟು ಜೀವಗಳು ಬಲಿಯಾಗುವ ಮುನ್ನ ಮುಷ್ಕರದಲ್ಲಿ ತೊಡಗಿರುವ ಅನುದಾನಿತ ಶಾಲಾ ಶಿಕ್ಷಕರನ್ನು ಕರೆದು ರಾಜ್ಯ ಸರ್ಕಾರ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ಕೆಲಸ ಮಾಡಬೇಕು ಮತ್ತು ಈಗಾಗಲೇ ಪ್ರಾಣ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next