Advertisement

ಈ ಬಿಕ್ಕಟ್ಟಿಗೆ ಸಿಎಂ ಯಡಿಯೂರಪ್ಪ, ಸಚಿವ ಸುರೇಶ್ ಕುಮಾರ್ ಹೊಣೆ: ಸಿದ್ದರಾಮಯ್ಯ

12:39 PM Dec 20, 2020 | keerthan |

ಬೆಂಗಳೂರು: ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿನ ಈಗಿನ ಬಿಕ್ಕಟ್ಟಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ನೇರ ಹೊಣೆಗಾರರು. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಜಗಳ ತಂದು ಹಾಕಿ ಇವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರದ ಎಡಬಿಡಂಗಿ ನಿಲುವುಗಳಿಂದಾಗಿ ರಾಜ್ಯದ ವಿದ್ಯಾರ್ಥಿಗಳು, ಪೋಷಕರು ಮತ್ತು ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಎಲ್ಲರೂ ಬೀದಿಗಿಳಿಯುವಂತಾಗಿದೆ. ಈ ಗೊಂದಲದಿಂದಾಗಿ ಬಹಳ ಮುಖ್ಯವಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಸ್ಪಷ್ಟನಿರ್ಧಾರ ಕೈಗೊಂಡು ಈ ಬಿಕ್ಕಟ್ಟನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ಯಾವ ನಿಯಂತ್ರಣವೂ ಇಲ್ಲ. ತರಗತಿಗಳು ನಡೆಯದೆ ಇದ್ದರೂ ಖಾಸಗಿ ಶಾಲೆಗಳು ಪೋಷಕರಿಂದ ನಿಗದಿತ ಪೂರ್ಣಶುಲ್ಕ ಪಾವತಿಸಲು ಒತ್ತಡ ಹೇರುತ್ತಿದ್ದಾರೆ. ಈಗಾಗಲೇ ಖಾಸಗಿ ಶಾಲೆಗಳು ಆನ್ ಲೈನ್ ತರಗತಿಗಳನ್ನು ಕೂಡಾ ಸ್ಥಗಿತಗೊಳಿಸಿ ಪೋಷಕರನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಶಿಕ್ಷಣ ಸಚಿವರು ಕಣ್ಣುಮುಚ್ಚಿಕೊಂಡು ಕೂತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:ಪಕ್ಷ ಬಯಸಿದ ಜವಾಬ್ದಾರಿ ಹೊರಲು ರಾಹುಲ್ ಗಾಂಧಿ ರೆಡಿ: ಕಾಂಗ್ರೆಸ್

ಶಾಲೆಗಳಲ್ಲಿ ತರಗತಿಗಳು ನಡೆಯದೆ ಇದ್ದರೂ ಬೋಧನಾ ಶುಲ್ಕದ ಜೊತೆಯಲ್ಲಿ ಪ್ರಯೋಗಶಾಲೆ, ಲೈಬ್ರೆರಿ ಮತ್ತು ಪಠ್ಯೇತರ ಶುಲ್ಕ ವಸೂಲಿ ಮಾಡಲು ಹೊರಟಿರುವ ಖಾಸಗಿ ಶಾಲೆಗಳು ಸರ್ಕಾರದ ಪೊಳ್ಳು ಬೆದರಿಕೆಗೆ ಜಗ್ಗುತ್ತಿಲ್ಲ. ಸರ್ಕಾರ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಜೊತೆ ಶಾಮೀಲಾಗಿರುವಂತಿದೆ ಎಂದು ಆರೋಪಿಸಿದ್ದಾರೆ.

Advertisement

ಶಾಲೆಗಳ ಪುನರಾರಂಭದ ಬಗ್ಗೆ ಸಭೆಗಳ ಮೇಲೆ ಸಭೆಗಳು ನಡೆಯುತ್ತಿವೆ, ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳು ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಪೋಷಕರನ್ನು ಗೊಂದಲಕ್ಕೆ ನೂಕಿದ್ದಾರೆ. ತಕ್ಷಣ ಶಿಕ್ಷಣ ಸಚಿವರು ಖಾಸಗಿ ಶಾಲೆಗಳ ಮಾಲೀಕರು ಮತ್ತು ಪೋಷಕರ ಸಭೆ ಕರೆದು ಪಾರದರ್ಶಕವಾಗಿ ಸಮಸ್ಯೆಯನ್ನು ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next