ಮೈಸೂರು: ಇದೇ ನನ್ನ ಕೊನೆ ಚುನಾವಣೆ, ಇದೇ ಕೊನೆ ಚುನಾವಣೆ . ಈ ಚುನಾವಣೆ ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಿದ್ದೇನೆ
. ಹುಟ್ಟೂರಿನ ಕ್ಷೇತ್ರದಿಂದಲೇ ಸ್ಪರ್ಧಿಸಿ ನಿವೃತ್ತಿಯಾಗಬೇಕೆಂಬುದು ನನ್ನ ಬಯಕೆ. ಹೀಗಾಗಿ ನಾನು ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದೇನೆ. ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ನನಗೆ ಸ್ವಲ್ಪ ಅನುಮಾನ ಇತ್ತು. ಹೀಗಾಗಿ ಬಾದಾಮಿ ಕ್ಷೇತ್ರದಲ್ಲೂ ಸ್ಪರ್ಧೆ ಮಾಡಿದೆ. ಈ ಬಾರಿ ನನಗೆ ಯಾವ ಅನುಮಾನಗಳು ಇಲ್ಲ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದೇನೆ. ಆದರೆ ಕೋಲಾರದ ಜನ ಒತ್ತಾಯದಿಂದ ಕರೆಯುತ್ತಿರುವ ಕಾರಣ ಅಲ್ಲೂ ನಿಲ್ಲಲು ಟಿಕೆಟ್ ಕೊಡಿ ಎಂದು ಕೇಳಿದ್ದೇನೆ. ಅಂತಿಮ ತೀರ್ಮಾನ ಹೈ ಕಮಾಂಡ್ ಗೆ ಬಿಟ್ಟದ್ದು. ನನಗೆ ಕ್ಷೇತ್ರ ಇಲ್ಲ ಎನ್ನುವುದೆಲ್ಲಾ ಅರ್ಥ ಇಲ್ಲದ ಮಾತು. ನನಗೆ 25 ಕ್ಷೇತ್ರದಲ್ಲೂ ಗೆಲ್ಲುವ ಅವಕಾಶ ಇರುವ ಕಾರಣ ನನಗೆ ಆಹ್ವಾನಿಸುತ್ತಿದ್ದಾರೆ ಎಂದು ಹೇಳಿದರು.
ಜೆಡಿಎಸ್ ಬಿಜೆಪಿ ಕಳೆದ ಬಾರಿಯಂತೆ ಈ ಬಾರಿಯೂ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುವ ಸೂಚನೆ ಇದೆ. ಹಳೇ ಮೈಸೂರು ಹೊಸ ಮೈಸೂರು ಎಂದೇನಿಲ್ಲ. ಅವರು ಎಲ್ಲ ಕಡೆಯೂ ಫಿಕ್ಸಿಂಗ್ ಮಾಡಿಕೊಳ್ಳಬಹುದು. ನನ್ನ ವಿರುದ್ಧ ಯಾರೇ ಸ್ಪರ್ಧೆ ಮಾಡಿದರೂ ನಾನು ಅದಕ್ಕೆ ಹೆದರುವುದಿಲ್ಲ ಎನ್ನುವ ಮೂಲಕ ವರುಣದಿಂದ ವಿಜಯೇಂದ್ರ ಕಣಕ್ಕಿಳಿಯುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.
ಯಾರೇ ನಿಂತರೂ ನಾನು ಗೆದ್ದೆ ಗೆಲ್ಲುತ್ತೇನೆ.ಕಳೆದ ಚುನಾವಣೆಯಲ್ಲಿ ಸೋತ ಮೇಲೆ ನಾನು ರಾಹು ಕೇತುಗಳು ಒಂದಾದವು ಎಂದು ಹೇಳಿದ್ದೆ. ಈಗ ನಾನು ಆ ಪದ ಬಳಸುವುದಿಲ್ಲ. ಬಳಸಿದರೆ ಅವರು ಈಗ ಸಿಟ್ಟಾಗುತ್ತಾರೆ. ನಾನು ಈ ಬಾರಿ ಗೆಲ್ಲುತ್ತೇನೆ. ಈಗ ಅದನ್ನು ಉಲ್ಲೇಖಿಸುವ ಅಗತ್ಯ ಇಲ್ಲ. ಜನ ನನ್ನ ಪರವಾಗಿ ಇದ್ದಾರೆ ಎಂದರು.
ರಾಜ್ಯದಲ್ಲಿ ಆಡಳಿತ ಪಕ್ಷ ಭಾರಿ ಚುನಾವಣಾ ಅಕ್ರಮದಲ್ಲಿ ತೊಡಗುವ ಸಾಧ್ಯತೆ ಇದೆ. ಚುನಾವಣಾ ಆಯೋಗ ನಿಷ್ಪಕ್ಷ ಪಾತ ಚುನಾವಣೆ ನಡೆಸಲು ಮುಂದಾಗಬೇಕು. ಆಡಳಿತ ಪಕ್ಷ ಇರಲಿ ಯಾವುದೇ ಪಕ್ಷ ಇರಲಿ ಅಕ್ರಮ ಮಾಡಿದರೆ ಕ್ರಮ ಕೈಗೊಳ್ಳಬೇಕು. ಆಡಳಿತ ಪಕ್ಷಕ್ಕೊಂದು ವಿರೋಧ ಪಕ್ಷಗಳಿಗೊಂದು ನ್ಯಾಯ ಮಾಡಬಾರದು. ಕಾಂಗ್ರೆಸ್ ಎರಡನೇ ಪಟ್ಟಿ ಒಂದೆರೆಡು ದಿನದಲ್ಲಿ ಬಿಡುಗಡೆಯಾಗುತ್ತದೆ. ಇವತ್ತು ಸ್ಕ್ರೀನಿಂಗ್ ಕಮಿಟಿ ಸಭೆ ಇದೆ. ಸಭೆ ಮುಗಿಸಿ ಅದನ್ನು ಹೈ ಕಮಾಂಡ್ ಗೆ ಕಳುಹಿಸುತ್ತೇವೆ. ಆ ನಂತರ ಪಟ್ಟಿ ಬಿಡುಗಡೆಯಾಗುತ್ತೆದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಗಾಳಿ ಬೀಸುತ್ತಿದೆ. ಹೀಗಾಗಿ ಟಿಕೆಟ್ ಗಾಗಿ ಸಾಕಷ್ಟು ಜನರು ಪೈಪೋಟಿ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಬಹಳ ದೊಡ್ಡ ಮಟ್ಟದಲ್ಲಿ ಇರುವುದು ಸತ್ಯ ಎಂದು ಹೇಳಿದರು.