Advertisement

“ಸಿದ್ದರಾಮಯ್ಯ ಎಂಬ ಹೆಸರಿನ ನಾನು..” 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ

01:11 PM May 20, 2023 | Team Udayavani |

ಬೆಂಗಳೂರು: “ಸಿದ್ದರಾಮಯ್ಯ ಎಂಬ ಹೆಸರಿನ ನಾನು…… “ ಸಿದ್ದರಾಮನಹುಂಡಿಯ ಬಡ ರೈತ ಕುಟುಂಬದಿಂದ ಬಂದು ರಾಜ್ಯ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

Advertisement

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ ಸಾವಿರಾರು ಜನರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ನಿತೀಶ್ ಕುಮಾರ್ ಸೇರಿದಂತೆ ರಾಷ್ಟ್ರೀಯ ನಾಯಕರು ಈ ಸಮಾರಂಭಕ್ಕೆ ಸಾಕ್ಷಿಯಾದರು.

ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕೆಪಿಸಿಸಿ ಅಧ್ಯಕ್ಷ, ಕನಕಪುರ ಕ್ಷೇತ್ರದ ಶಾಸಕ ಡಿಕೆ ಶಿವಕುಮಾರ್ ಅವರು ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

Advertisement

ಮಾಜಿ ಉಪ ಮುಖ್ಯಮಂತ್ರಿ, ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ ಪರಮೇಶ್ವರ್ ಅವರು ಮೊದಲ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ, ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸುತ್ತಿರುವ, ದೇವನಹಳ್ಳಿ ಕ್ಷೇತ್ರದ ಶಾಸಕ ಕೆ.ಎಚ್ ಮುನಿಯಪ್ಪ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಹಿರಿಯ ರಾಜಕಾರಣಿ ಸರ್ವಜ್ಞ ನಗರ ಕ್ಷೇತ್ರದ ಶಾಸಕ ಕೆ.ಜೆ ಜಾರ್ಜ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕಾಂಗ್ರೆಸ್ ನ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಬಬಲೇಶ್ವರ ಕ್ಷೇತ್ರದ ಶಾಸಕ, ಎಂ.ಬಿ ಪಾಟೀಲ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿ ಅವರು ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ, ಚಿತ್ತಾಪುರ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಹಿರಿಯ ರಾಜಕಾರಣಿ, ಕೆಪಿಸಿಸಿ ಕಾರ್ಯಾಧ್ಯಕ್ಷ, ಬಿ.ಟಿ.ಎಂ ಲೇಔಟ್ ಕ್ಷೇತ್ರದ ಶಾಸಕ ರಾಮಲಿಂಗಾ ರೆಡ್ಡಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಖಾನ್ ಅವರು ಅಲ್ಲಾಹ್ ಮತ್ತು ತನ್ನ ತಾಯಿಯ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ಇಂಗ್ಲೀಶ್ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next