ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಚಂಡ ಜಯಗಳಿಸಿದ್ದು, ಭಾರತೀಯ ಜನತಾ ಪಕ್ಷ 65ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದ್ದು, ಮತ್ತೊಂದೆಡೆ ಸಿದ್ದರಾಮಯ್ಯ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:Viral: ದೆಹಲಿ ಮೆಟ್ರೋದಲ್ಲಿ ಯುವ ಜೋಡಿಯ ವಿಡಿಯೋ ಹಂಚಿಕೊಂಡು ಪೇಚಿಗೆ ಸಿಲುಕಿದ ವ್ಯಕ್ತಿ
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಹುದ್ದೆ ಯಾರಿಗೆ ಎಂಬ ಚರ್ಚೆ ನಡೆದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್, ಎಂಬಿ ಪಾಟೀಲ್ ಸಿಎಂ ಹುದ್ದೆಯ ಆಕಾಂಕ್ಷಿಗಳಾಗಿರುವುದಾಗಿ ಬಹಿರಂಗವಾಗಿ ಹೇಳಿಕೊಂಡಿದ್ದರು.
ಇದೀಗ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದ್ದು, ಸಿದ್ದರಾಮಯ್ಯನವರೇ ಮುಂದಿನ ಸಿಎಂ ಎಂದು ಹೇಳಲಾಗುತ್ತಿದೆ. ಆದರೆ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಡಿಕೆ ಶಿವಕುಮಾರ್ ಅವರ ಶ್ರಮ ಅಪಾರವಾದದ್ದು ಎಂದು ಮೂಲಗಳು ಹೇಳಿವೆ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೂ ಅಧಿಕಾರ ಹಂಚಿಕೆ ಮಾಡುವ ಸೂತ್ರಕ್ಕೆ ಶರಣಾಗಿದೆ ಎನ್ನಲಾಗಿದೆ. ಆರಂಭದಲ್ಲಿ ಡಿಕೆಶಿಗೆ ಸರ್ಕಾರದಲ್ಲಿ ಪ್ರಬಲ ಖಾತೆಯನ್ನು ನೀಡಿ, ನಂತರ ಮುಖ್ಯಮಂತ್ರಿ ಹುದ್ದೆ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ಸ್ಪಷ್ಟ ಬಹುಮತ ಪಡೆದಿದ್ದು, ಭಾರತೀಯ ಜನತಾ ಪಕ್ಷ 65 ಸ್ಥಾನಗಳಲ್ಲಿ ಹಾಗೂ ಜೆಡಿಎಸ್ 19, ಪಕ್ಷೇತರರು ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ಅತೀ ದೊಡ್ಡ ಸವಾಲಿನ ಕೆಲಸವಾಗಿದ್ದು, ರಾಜಸ್ಥಾನ, ಮಧ್ಯಪ್ರದೇಶದಲ್ಲಿಯೂ ಸಿಎಂ ಆಯ್ಕೆ ಸಂದರ್ಭದಲ್ಲಿ ಕಗ್ಗಂಟು ಎದುರಾಗಿತ್ತು. ಆದರೆ ಕರ್ನಾಟಕದಲ್ಲಿನ ಪರಿಸ್ಥಿತಿ ಭಿನ್ನವಾಗಿದೆ.
ಕರ್ನಾಟಕದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಗಳಾಗಿದ್ದರೂ ಕೂಡಾ, ಇಬ್ಬರು ಮುಖಂಡರುಗಳಲ್ಲಿ ಯಾವುದೇ ಭಿನ್ನಾಭಿಪ್ರಾಯ, ಅಸಮಾಧಾನ ಹೊಂದಿಲ್ಲ. ಶಿವಕುಮಾರ್ ಪಕ್ಷ ಸಂಘಟನೆಯಲ್ಲಿ ಪ್ರಭಾವಿಯಾಗಿದ್ದು, ಸಿದ್ದರಾಮಯ್ಯ ಪಕ್ಷದ ಜನಪ್ರಿಯ ನಾಯಕರಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸಿಎಂ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಾವ ತಂತ್ರಗಾರಿಕೆ ಉಪಯೋಗಿಸಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.