ಹನೂರು: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ 2ನೇ ಅವಧಿಗೆ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಪ್ರಥಮ ಬಾರಿಗೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದವತಿಯಿಂದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ಈ ವಿವಾಹ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳೂ, ಪ್ರಾಧಿಕಾರದ ಅಧ್ಯಕ್ಷರೂ ಆದ ಸಿದ್ದರಾಮಯ್ಯನವರು ಭಾಗವಹಿಸಲಿದ್ದಾರೆ.
ಸೆ.26, 27 ರಂದು ಆಗಮನ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೆ.26ರ ಮಂಗಳವಾರ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಂಗಳವಾರ ಸಂಜೆ 7 ಗಂಟೆಯ ವೇಳೆಗೆ ಹನೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾಜಿ ಶಾಸಕ ನರೇಂದ್ರ, ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಮ್ಮಿಕೊಂಡಿರುವ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸನ್ಮಾನ ಸ್ವೀಕರಿಸಿದ ಬಳಿಕ ರಸ್ತೆ ಮಾರ್ಗವಾಗಿ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ರಾತ್ರಿ ಶ್ರೀ ಕ್ಷೇತ್ರದ ರಾಷ್ಟ್ರಪತಿ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೆ.27ರ ಬುಧವಾರ ಬೆಳ್ಳಂ ಬೆಳಗ್ಗೆಯೇ ಮಲೆ ಮಹದೇಶ್ವರನ ದರ್ಶನ ಪಡೆಯಲಿದ್ದಾರೆ. ಬಳಿಕ 9:50 ರಿಂದ 10:20ರವರೆಗಿನ ಶುಭ ವೃಶ್ಚಿಕ ಲಗ್ನದಲ್ಲಿ ಜರುಗಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಿ ಸಭೆ ಉಕ್ತಾವಾದ ಬಳಿಕ ಶ್ರೀ ಕ್ಷೇತ್ರದಿಂದ ನಿರ್ಗಮಿಸಲಿದ್ದಾರೆ. ಬಳಿಕ ಜಿಲ್ಲಾ ಕೇಂದ್ರ ಚಆಮರಾಜನಗರದಲ್ಲಿ ಕನಕ ಭವನದ ಮೊದಲ ಅಂತಸ್ತಿನ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಬಳಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಯಾರ್ಯಾರು ಭಾಗವಹಿಸಲಿದ್ದಾರೆ: ಶ್ರೀ ಕ್ಷೇತ್ರದಲ್ಲಿ ಜರುಗುತ್ತಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮೈಸೂರಿನ ಸುತ್ತುರು ವೀರ ಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸಾಲೂರು ಬೃಹನ್ಮಠದಹಿರಿಯ ಶ್ರೀಗಳಾದ ಪಟ್ಟದ ಗುರುಸ್ವಾಮಿಗಳು, ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಶಾಂತಮಲ್ಲಿಕಾರ್ಜುನ ಶ್ರೀಗಳು ಭಾಗವಹಿಸಲಿದ್ದಾರೆ. ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಪಶುಸಂಗೋಪನೆ ಮತ್ತು ರೇಷ್ಮೆಖಾತೆ ಸಚಿವರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಹಾಗೂ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಕೆ.ವೆಂಕಟೇಶ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ವಧುಗಳಿಗೆ ಮಾಂಗಲ್ಯ ವಿತರಣೆ ಮಾಡಲಿದ್ದಾರೆ. ಸಾರಿಗೆ, ಮುಜರಾಯಿ ಹಾಗೂ ಪ್ರಾಧಿಕಾರದ ಉಪಾಧ್ಯಕ್ಷರು ಆದ ರಾಮಲಿಂಗಾರೆಡ್ಡಿ ಅವರು ಭಾಗವಹಿಸಿ ವಧು-ವರರಿಗೆ ವಸ್ತ್ರಗಳನ್ನು ವಿತರಿಸಲಿದ್ದಾರೆ.
ಸಮಾಜ ಕಲ್ಯಾಣ ಹಾಗೂ ಮೈಸೂರು ಉಸ್ತುವಾರಿ ಸಚಿವ ಎಚ್. ಸಿ.ಮಹದೇವಪ್ಪ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುತ್ತಿದ್ದು, ಸಂಸದ ಶ್ರೀನಿವಾಸ್ ಪ್ರಸಾದ್ ಅವರು ನೆನಪಿನ ಕಾಣಿಕೆ ವಿತರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ .ಆರ್.ಮಂಜುನಾಥ್‍ವಹಿಸಲಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ, ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಗುಂಡ್ಲುಪೇಟೆ ಶಾಸಕ ಎಚ್.ಎಸ್.ಮಹದೇವ ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಡಾ|ತಿಮ್ಮಯ್ಯ, ಮಧು.ಜಿ.ಮಾದೇಗೌಡ, ಸಿ.ಎನ್.ಮಂಜೇಗೌಡ ಹಾಗೂ ಮಹದೇಶ್ವರ ಬೆಟ್ಟ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಅರ್ಚನ ಪ್ರಕಾಶ್ ಅವರು ಭಾಗವಹಿಸಲಿದ್ದಾರೆ.