Advertisement

ರೈತರ ಪರವಾಗಿ ಪ್ರಧಾನಿಗೆ ಸುದೀರ್ಘ ಪತ್ರ ಬರೆದ ಸಿದ್ದರಾಮಯ್ಯ

05:00 PM Feb 20, 2022 | Team Udayavani |

ಬೆಂಗಳೂರು : ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ರಾಜ್ಯದ ರೈತರ ಸಮಸ್ಯೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದು ಗಮನ ಸೆಳೆದಿದ್ದಾರೆ.

Advertisement

ಒಂದೆಡೆ ವಿಧಾನಸಭಾ ಕಲಾಪದಲ್ಲಿ ಸಚಿವ ಈಶ್ವರಪ್ಪ ಅವರ ಹೇಳಿಕೆ ವಿರೋಧಿಸಿ ಸುಗಮ ಕಲಾಪಕ್ಕೆ ಅವಕಾಶ ಮಾಡಿ ಕೊಡದೆ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಪತ್ರದ ಮೂಲಕ ರೈತ ಸಮುದಾಯದ ಪರ ಕಾಳಜಿ ತೋರಿಸುವ ಯತ್ನ ಮಾಡಿದೆ.

ಪತ್ರದಲ್ಲೇನಿದೆ ?

ಮಾನ್ಯ ಪ್ರಧಾನ ಮಂತ್ರಿಗಳೆ, ಇಡೀ ವರ್ಷ ಪದೇ ಪದೇ ಸುರಿದ ಮಳೆಯ ನಡುವೆಯೂ ರಾಗಿ, ಭತ್ತ ಮುಂತಾದ ಬೆಳೆಗಳನ್ನು ಕೊಯಿಲು ಮಾಡಿ ಮಾರುಕಟ್ಟೆಗೆ ತರುತ್ತಿದ್ದಾರೆ. ಸರ್ಕಾರವು ಈ ವರ್ಷ ಜನವರಿ 1 ರಿಂದ ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಜಿಲ್ಲೆಗಳ ಪ್ರಮುಖ ಬೆಳೆಯಾದ ರಾಗಿಯನ್ನು ಬೆಳೆಯುತ್ತಾರೆ. ಕೃಷಿ ಇಲಾಖೆಯ ಅಂದಾಜಿನ ಪ್ರಕಾರ ನಮ್ಮ ರೈತರು ಈ ವರ್ಷ ಸುಮಾರು 19.35 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆದಿದ್ದಾರೆ. ಕೃಷಿ ಇಲಾಖೆಯ ದಾಖಲೆಗಳ ಪ್ರಕಾರ ಎಕರೆಗೆ ಕನಿಷ್ಟ 1 ಟನ್ ಎಂದರೂ ಸುಮಾರು 19.3 ಲಕ್ಷ ಟನ್ ಟನ್ ರಾಗಿ ಇಳುವರಿ ಬರುತ್ತದೆ. ಈ ವರ್ಷ ನಿರಂತರವಾಗಿ ಸುರಿದ ಮಳೆಯಿಂದಾಗಿ 4.5 ಲಕ್ಷ ಟನ್ ರಾಗಿಯು ಮಳೆಯ ಪಾಲಾದರೂ 15 ಲಕ್ಷ ಟನ್ ರಾಗಿ ರೈತರ ಕೈಯಲ್ಲಿದೆ, ಹಾಗಾಗಿ ರೈತರು ಬೆಂಬಲ ಬೆಲೆಯಡಿ ರಾಗಿಯನ್ನು ಮಾರಾಟ ಮಾಡಲು ಉತ್ಸಾಹ ತೋರಿಸುತ್ತಿದ್ದಾರೆ.

ಸರ್ಕಾರಗಳು ಪದೇ ಪದೇ ರೈತರ ಆದಾಯ ದ್ವಿಗುಣ ಗೊಳಿಸಲಾಗುವುದು ಎಂದು ಹೇಳಲಾಗುತ್ತದೆ. ಆದರೆ ರೈತರ ಆದಾಯ ಹೆಚ್ಚಾಗುವ ಬದಲು ಕಡಿಮೆಯಾಗುತ್ತಿದೆ. ಅದರಲ್ಲೂ ಮಳೆಯಾಶ್ರಿತ ಪ್ರದೇಶಗಳಲ್ಲಿ ಬೆಳೆಯುವ ರಾಗಿಯು ಲಾಭದಾಯಕ ಬೆಳೆಯಲ್ಲ. ಖರ್ಚು ಹೆಚ್ಚು ಲಾಭ ಕಡಿಮೆ. ಹಾಗಾಗಿ ಸರ್ಕಾರಗಳು ಈ ರೀತಿಯ ಬೆಳೆಗಳಿಗೆ ಹೆಚ್ಚು ಬೆಲೆಯನ್ನು ನಿಗಧಿಪಡಿಸಿ ರೈತರು ಮಾರುಕಟ್ಟೆಗೆ ತರುವಷ್ಟು ಉತ್ಪನ್ನವನ್ನೂ ಖರೀದಿಸಬೇಕು. ರಾಗಿ, ಜೋಳದಂಥ ಮಳೆಯಾಶ್ರಿತ ಬೆಳೆಗಳನ್ನು ಬೆಂಬಲಿಸಬೇಕಾದ ಅನಿವಾರ್ಯತೆ ಇದೆ, ಏಕೆಂದರೆ ಈ ಬೆಳೆಗಳು ಹೆಚ್ಚು ನೀರನ್ನು ಬಯಸುವುದಿಲ್ಲ. ಸರ್ಕಾರಗಳು ಈ ರೈತರಿಗೆ ಸಬ್ಸಿಡಿಗಳನ್ನೇನೂ ನೀಡುತ್ತಿಲ್ಲ. ಈ ಬೆಳೆಗಳನ್ನು ಬೆಳೆಯುವುದರಿಂದ ನಿಸರ್ಗದ ರಕ್ಷಣೆಯೂ ಆಗುತ್ತದೆ. ಔಷಧ, ಕೀಟನಾಶಕ, ರಾಸಾಯನಿಕಗಳಿಲ್ಲದೆ ಬೆಳೆಯುವ ರಾಗಿ, ಜೋಳ ಮುಂತಾದ ಬೆಳೆಗಳು ನಿಸರ್ಗಸ್ನೇಹಿಯಾಗಿವೆ. ಹಾಗಾಗಿ ಇವುಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕು.

Advertisement

ಆದರೆ ರಾಗಿಗೆ ಈಗ ದೊರೆಯುತ್ತಿರುವ ಬೆಲೆಯು ಯಾವುದಕ್ಕೂ ಸಾಲುವುದಿಲ್ಲ. ರಾಗಿಗೆ ನೀಡುತ್ತಿರುವ ಬೆಂಬಲ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಒಂದು ಕ್ವಿಂಟಾಲಿಗೆ ಕೇವಲ 82 ರೂಪಾಯಿಗಳಷ್ಟು ಮಾತ್ರ ಏರಿಕೆ ಮಾಡಲಾಗಿದೆ. ಕಳೆದ ವರ್ಷ ಒಂದು ಕ್ವಿಂಟಾಲಿಗೆ 3295 ರೂ ನೀಡುತ್ತಿದ್ದರೆ ಈ ವರ್ಷ 3377 ಗಳಿಗೆ ಏರಿಕೆ ಮಾಡಲಾಗಿದೆ. ಆದರೆ ರೈತರು 2019-20 ರಲ್ಲಿ ಟ್ರಾಕ್ಟರ್‍ನಲ್ಲಿ ಒಂದು ಗಂಟೆ ಹೊಲ ಉಳಲು 750 ರೂಪಾಯಿ ನೀಡುತ್ತಿದ್ದರೆ ಈ ವರ್ಷ 1250-1300 ರೂ ನೀಡಬೇಕಾಗಿದೆ. ಬೆಳೆಯನ್ನು ಕಟಾವು ಮಾಡುವ ಯಂತ್ರಕ್ಕೆ ಕೂಡ ಗಂಟೆಗೆ ಸುಮಾರು 750 ರೂಪಾಯಿಗಳಷ್ಟು ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲ ಅವಶ್ಯ ವಸ್ತುಗಳ ಬೆಲೆ ಏರಿಕೆಯಾಗಿವೆ. ಇದೆಲ್ಲದರಿಂದಾಗಿ ರೈತರು ಬೆಳೆಗಳನ್ನು ಬೆಳೆಯಲು ಉತ್ಪಾದನಾ ವೆಚ್ಚ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಡಾ.ಸ್ವಾಮಿನಾಥನ್ ಅವರ ವರದಿಯಲ್ಲಿನ ಸೂತ್ರಗಳನ್ನು ಪೂರ್ತಿಯಾಗಿ ಅಳವಡಿಸಿದರೆ ಒಂದು ಕ್ವಿಂಟಾಲ್ ರಾಗಿಗೆ ಈಗ ನಿಗಧಿಪಡಿಸಿರುವ ಬೆಂಬಲ ಬೆಲೆಯ ಎರಡರಷ್ಟನ್ನು ರೈತರಿಗೆ ನೀಡಬೇಕಾಗುತ್ತದೆ.

ಆದರೂ ರೈತರು ನಿಗಧಿಪಡಿಸಿರುವ ಬೆಂಬಲ ಬೆಲೆಯಾದರೂ ತಮ್ಮ ಬೆಳೆಗಳಿಗೆ ಸಿಗಲಿ ಎಂದು ಆಶಿಸುತ್ತಿದ್ದಾರೆ. ಏಕೆಂದರೆ ಮುಕ್ತ ಮಾರುಕಟ್ಟೆಯಲ್ಲಿ ರಾಗಿಯ ಬೆಲೆ ಪ್ರತಿ ಕ್ವಿಂಟಾಲಿಗೆ 1800 ರೂಪಾಯಿಗಳಿಂದ 2180 ರೂಪಾಯಿಗಳಷ್ಟೆ ಇದೆ. ಪ್ರಧಾನಿ ಮೋದಿಯವರ ಸರ್ಕಾರ ಈ ಬಾರಿ ರಾಜ್ಯದ ರೈತರಿಂದ ಕೇವಲ 2.10 ಲಕ್ಷ ಟನ್ ರಾಗಿಯನ್ನು ಮಾತ್ರ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸೂಚನೆಯನ್ನು ಆಧರಿಸಿ ರಾಜ್ಯದ ಬಿಜೆಪಿ ಸರ್ಕಾರವು ರೈತರಿಂದ ರಾಗಿ ಖರೀದಿಸಲು ವಿಪರೀತ ನಿಬಂಧನೆಗಳನ್ನು ವಿಧಿಸಿದೆ. ಅದರಲ್ಲಿ ಸಣ್ಣ ರೈತರಿಂದ ಮಾತ್ರ ಕೇವಲ 20 ಕ್ವಿಂಟಾಲ್ ರಾಗಿಯನ್ನು ಮಾತ್ರ ಖರೀದಿ ಮಾಡಲಾಗುವುದೆಂದು ತಿಳಿಸಿ ಆದೇಶ ಹೊರಡಿಸಿದೆ. ಯೂಕಲಿಪ್ಟಸ್ ಬೆಳೆಯನ್ನು ಬೆಳೆಯುತ್ತಿದ್ದ ರೈತರು ಕಳೆದ ಎರಡು ವರ್ಷಗಳಿಂದ ಈಚೆಗೆ ತಮ್ಮ ಹೊಲಗಳಲ್ಲಿ ಬೆಳೆದಿದ್ದ ಯೂಕಲಿಪ್ಟಸ್ ಬೆಳೆಯನ್ನು ತೆಗೆದು ಹಾಕಿ ರಾಗಿ ಬೆಳೆಯಲಾರಂಭಿಸಿದ್ದಾರೆ. ಹಾಗಾಗಿ ಸಹಜವಾಗಿಯೆ ರಾಗಿಯ ಉತ್ಪಾದನೆ ಹೆಚ್ಚಾಗಿದೆ.

ದೊಡ್ಡಬಳ್ಳಾಪುರ ಮುಂತಾದ ಕಡೆ ರೈತರು, ರೈತ ಸಂಘದವರು ರಾಗಿ ಖರೀದಿಗೆ ವಿಧಿಸಿರುವ ನಿಬಂಧನೆಗಳನ್ನು ತೆಗೆದು ಹಾಕುವಂತೆ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಕಳೆದ ವರ್ಷ ಸುಮಾರು 4.7 ಲಕ್ಷ ಟನ್ ಗಳಷ್ಟು ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದರೆ ಈ ಬಾರಿ ರಾಜ್ಯದಿಂದ ಕೇವಲ 2.10 ಲಕ್ಷ ಟನ್ ರಾಗಿಯನ್ನು ಖರೀದಿಸಲು ಮಾತ್ರ ರಾಜ್ಯಕ್ಕೆ ಅನುಮತಿ ನೀಡಲಾಗಿದೆ. ರೈತರು 15 ಲಕ್ಷ ಟನ್ ರಾಗಿ ಬೆಳೆದರೆ ಅವರು ತಮ್ಮ ಸ್ವಂತ ಬಳಕೆಗೆ ಶೇ.50 ರಷ್ಟನ್ನು ಬಳಸುತ್ತಾರೆಂದರೆ ಉಳಿದದ್ದನ್ನು ಅವರು ಮಾರಲೇಬೇಕು. ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ರೈತರ ಉತ್ಪನ್ನಗಳನ್ನು ಖರೀದಿಸದಿದ್ದರೆ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಾರೆ. ಮಾರುಕಟ್ಟೆಯಲ್ಲಿ ಬೆಲೆಗಳು ಬಿದ್ದು ಹೋಗುತ್ತವೆ. ಹೀಗಾದರೆ ರೈತರ ಹಿತಾಸಕ್ತಿಯನ್ನು ಕಾಪಾಡುವುದು ಹೇಗೆ? ರೈತರ ಆದಾಯ ದ್ವಿಗುಣಗೊಳ್ಳುವುದು ಹೇಗೆ? ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡುವುದನ್ನು ನಿಲ್ಲಿಸಿರುವುದರಿಂದ ಮುಕ್ತ ಮಾರುಕಟ್ಟೆಯಲ್ಲಿ ಈಗಾಗಲೆ ರಾಗಿಯ ಬೆಲೆ ಕಡಿಮೆಯಾಗಿ ಈಗ ಕೇವಲ 1800 ರೂಗಳಿಂದ 2180 ರೂವರೆಗೆ ಮಾತ್ರ ಮಾರಾಟವಾಗುತ್ತಿದೆ. ಇದರಿಂದ ಪ್ರತಿ ಕ್ವಿಂಟಾಲ್‍ಗೆ ರೈತರಿಗೆ ಸರಾಸರಿ 1377 ರೂಗಳಷ್ಟು ನಷ್ಟವಾಗುತ್ತಿದೆ. ಈ ಲೆಕ್ಕದಲ್ಲಿ ನೋಡಿದರೆ ಮಾರುಕಟ್ಟೆಗೆ 8 ಲಕ್ಷ ಟನ್ ರಾಗಿ ಬಂದರೆ 2.1 ಲಕ್ಷ ಟನ್ನನ್ನು ಬೆಂಬಲ ಬೆಲೆಯಡಿ ಖರೀದಿಸಲಾಗುತ್ತಿದೆ. ಉಳಿಕೆ 6 ಟನ್ ರಾಗಿ ಬೆಳೆದ ರೈತರಿಗೆ ಕನಿಷ್ಟ 1000 ಕೋಟಿ ನಷ್ಟವಾಗುತ್ತದೆ.

ಆದ್ದರಿಂದ ಈ ಕೂಡಲೆ ರಾಗಿಯನ್ನು ಖರೀದಿಸಲು ವಿಧಿಸಿರುವ ನಿರ್ಬಂಧಗಳನ್ನು ತೆಗೆದು ಹಾಕಬೇಕು. ರೈತರು ಎಷ್ಟು ಕ್ವಿಂಟಾಲ್ ಖರೀದಿ ಕೇಂದ್ರಗಳಿಗೆ ತರುತ್ತಾರೊ ಅಷ್ಟನ್ನೂ ಖರೀದಿಸಬೇಕು. ಇಂದೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೇವಲ 2.10 ಲಕ್ಷ ಟನ್ ಖರೀದಿಸಲು ವಿಧಿಸಿರುವ ನಿರ್ಬಂಧವನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಬೇಕು. ಸ್ಥಗಿತಗೊಳಿಸಿರುವ ನೋಂದಣಿ ಕೇಂದ್ರಗಳನ್ನು ಕೂಡಲೆ ಪುನರಾರಂಭಿಸಬೇಕು. ರಾಗಿ, ಭತ್ತ ಮುಂತಾದ ಉತ್ಪನ್ನಗಳಿಗೆ ನಿಗಧಿಗೊಳಿಸಿರುವ ಬೆಲೆಯನ್ನು ಹೆಚ್ಚಿಸಬೇಕೆಂದು ಆಗ್ರಹಿಸುತ್ತೇನೆ. ಎಂದು ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next