ದಾವಣಗೆರೆ: ರಾಜ್ಯದಲ್ಲಿ ಭೀಕರ ಬರ ತಾಂಡವವಾಡುತ್ತಿದ್ದು, ರೈತರಿಗೆ ಬೆಳೆ ಪರಿಹಾರ ಕೊಡಲಿಕ್ಕಾಗದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಕೊಡುವುದಾಗಿ ಓಲೈಕೆ ರಾಜಕಾರಣ ಮಾಡಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ಹೊರಹಾಕಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಖಂಡಿತವಾಗಿಯೂ ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಅಲ್ಲ. ಅವರ ಅಭಿವೃದ್ಧಿಗೆ ಅನುದಾನ ಕೊಡುವುದಕ್ಕೆ ಯಾವುದೇ ರೀತಿಯ ಅಭ್ಯಂತರ ಇಲ್ಲ. ಆದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಎಲ್ಲ ವರ್ಗ, ಧರ್ಮದ ಹಿತ ಕಾಯುವುದು ಬಿಟ್ಟು, ಒಂದೇ ಸಮುದಾಯದ ಓಲೈಕೆ ಮಾಡುತ್ತಿರುವುದು ಖಂಡನೀಯ ಎಂದರು.
ಮಳೆ, ಬೆಳೆ ಇಲ್ಲದೆ ರಾಜ್ಯದಲ್ಲಿನ ಭೀಕರ ಬರಗಾಲ ಪರಿಸ್ಥಿತಿ ಎದುರಿಸಲು 35 ಸಾವಿರ ಕೋಟಿ ರೂ.ಗೂ ಹೆಚ್ಚು ಅನುದಾನ ಬೇಕು. ಬರ ಪರಿಹಾರ ಕಾಮಗಾರಿ ಕೈಗೊಂಡಿಲ್ಲ. ರೈತರ ಖಾತೆಗಳಿಗೆ ಹಣ ಜಮಾ ಮಾಡಿಲ್ಲ. ಅಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಕೊಡುತ್ತೇವೆ ಎನ್ನುವ ಓಲೈಕೆ ರಾಜಕಾರಣ ಮಾಡು ತ್ತಿದ್ದಾರೆ. ಅಲ್ಪಸಂಖ್ಯಾತರಿಗೆ ಅಷ್ಟೊಂದು ಹಣ ಹೇಗೆ ಕೊಡುತ್ತಾರೆ. ಸಿದ್ದರಾಮಯ್ಯ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ದೇಶದ ಸಂಪತ್ತನ್ನು ಅಲ್ಪಸಂಖ್ಯಾತರಿಗೆ ಹಂಚುತ್ತೇನೆ ಎನ್ನಲು ಸಿದ್ದರಾಮಯ್ಯ ಏನು ಪ್ರಧಾನಿಯೇ. ಸಿದ್ದರಾಮಯ್ಯ ಹೇಳಿಕೆಯಿಂದ ಹಿಂದೂಗಳಿಗೆ ನೋವಾಗಿದೆ. ಕೂಡಲೇ ಅವರು ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.
ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಕೊಟ್ಟ ಭರವಸೆ ಈಡೇರಿಸಲು ಆಗುತ್ತಿಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಮಿಷನ್ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಸರ್ಕಾರ ಬಹಳ ದಿನ ಇರುವುದಿಲ್ಲ. ದಿವಾಳಿಯಿಂದ ಪತನ ಆಗುತ್ತದೆ ಎಂದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಬಸವನಗೌಡ ಯತ್ನಾಳ್ ಗೆ ಇಲ್ಲ. ಯಡಿಯೂರಪ್ಪ ಅವರೇ ಯತ್ನಾರನ್ನು ಬಿಜೆಪಿಗೆ ಕರೆತಂದ್ದು, ಕೇಂದ್ರ ಸಚಿವರನ್ನಾಗಿ ಮಾಡಿದ್ದರು. ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕರು. ಪ್ರಚಾರಕ್ಕೆ ಮಾತನಾಡುವುದನ್ನು ಬಿಡದೇ ಹೋದರೇ ಯತ್ನಾಳ್ ಅವರೇ ವಿಲನ್ ಆಗುತ್ತಾರೆ ಎಂದರು.