ಮಂಗಳೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡೀಸ್ ಅವರ ಆರೋಗ್ಯ ವಿಚಾರಿಸಲು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಗುರುವಾರ ಸಂಜೆ ಆಸ್ಪತ್ರೆಗೆ ಭೇಟಿ ನೀಡಿದರು.
ಮಂಗಳೂರಿನ ತಮ್ಮ ನಿವಾಸದಲ್ಲಿ ಎರಡು ದಿನಗಳ ಹಿಂದೆ ಬೆಳಗ್ಗೆ ಯೋಗ ಮಾಡುವ ವೇಳೆ ಆಸ್ಕರ್ ಫೆರ್ನಾಂಡಿಸ್ ಅವರು ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದು, ತಲೆಗೆ ಏಟಾಗಿತ್ತು. ಆದರೆ ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲ ಎಂದು ಭಾವಿಸಿ ತತ್‌ಕ್ಷಣ ಚಿಕಿತ್ಸೆ ಪಡೆದುಕೊಂಡಿರಲಿಲ್ಲ. ಆ ನಂತರದಲ್ಲಿ ಮಾಮೂಲಿ ಆರೋಗ್ಯ ತಪಾಸಣೆಗೆಂದು ಅವರು ನಗರದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ತಲೆಯ ಒಳಭಾಗಕ್ಕೆ ಏಟು ಬಿದ್ದು, ಆಂತರಿಕ ರಕ್ತಸ್ರಾವ ಆಗಿರುವುದು ಕಂಡುಬಂತು.
ಆರೋಗ್ಯ ವಿಚಾರಿಸಿದ ಸೋನಿಯಾ, ರಾಹುಲ್
ಆಸ್ಕರ್ ಅವರು ಅಸ್ವಸ್ಥರಾಗಿರುವ ಮಾಹಿತಿ ತಿಳಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಆಸ್ಕರ್ ಅವರ ಪತ್ನಿ ಬ್ಲೋಸಂ ಫೆರ್ನಾಂಡಿಸ್ ಅವರಿಗೆ ಹೊಸದಿಲ್ಲಿಯಿಂದ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಶಾಸಕ ಯು.ಟಿ. ಖಾದರ್, ಮಾಜಿ ಸಚಿವ ರಮಾನಾಥ ರೈ, ಪ್ರಮೋದ್ ಮಧ್ವರಾಜ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆಶೋಕ್ ಕೊಡವೂರು, ಮಾಜಿ ಶಾಸಕ ಜೆ.ಆರ್. ಲೋಬೋ, ಮೊದಿನ್ ಬಾವಾ ಸೇರಿದಂತೆ ಕಾಂಗ್ರೆಸ್ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.