Advertisement

ಮೋದಿ ಭಾಷಣ ‘ನಿಮ್ಮ ತಲೆ ಮೇಲೆ ನಿಮ್ಮ‌ ಕೈ’ಎಂಬ ಸಂದೇಶ ನೀಡಿದೆ: ಸಿದ್ದರಾಮಯ್ಯ ಟೀಕೆ

10:28 PM Apr 20, 2021 | Team Udayavani |

ಬೆಂಗಳೂರು: ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣ ಅತ್ಯಂತ ನಿರಾಶದಾಯಕ. ಕೋವಿಡ್ ಸೋಂಕಿನಿಂದ ತತ್ತರಿಸಿ ಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

Advertisement

ದೇಶದಲ್ಲಿ ಹಬ್ಬುತ್ತಿರುವ ಕೋವಿಡ್ ಹಿನ್ನೆಲೆ ದೇಶದ ಜನರನ್ನುದ್ದೇಶಿಸಿ ಇಂದು ರಾತ್ರಿ 8.45 ಕ್ಕೆ ಮಾತನಾಡಿರುವ ಮೋದಿ, ಎಲ್ಲ ರಾಜ್ಯ ಸರ್ಕಾರಗಳಿಗೆ ಲಾಕ್ ಡೌನ್ ಹೇರದಂತೆ ಸೂಚನೆ ನೀಡಿದರು. ಹಾಗೂ ದೇಶದ ಜನರು ಸ್ವಯಂ ಪ್ರೇರಿತರಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಇದೀಗ ಪ್ರಧಾನಿ ನರೇಂದ್ರ ಮೋದಿಯವರ ಭಾಷಣ ಟೀಕಿಸಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಕೋವಿಡ್ ಸೋಂಕಿತರು ಆಮ್ಲಜನಕ ಇಲ್ಲದೆ, ಐಸಿಯು ಹಾಸಿಗೆಗಳಿಲ್ಲದೆ,‌ ರೆಮಿಡಿಸಿವೆರ್‌ನಂತಹ ಪ್ರಾಣರಕ್ಷಕ ಔಷಧಿ ಸಿಗದೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡದ ಮೋದಿ, ಜನತೆಗೆ ಜವಾಬ್ದಾರಿಯ ಪಾಠ ಹೇಳಿದ್ದಾರೆ.

ಪ್ರಧಾನಿಗಳೇ, ಮೊದಲು ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ. ಕೋವಿಡ್ ಉಲ್ಭಣವಾದ ಕಾರಣದಿಂದಾಗಿ ಲಾಕ್‌ಡೌನ್ ಅನಿವಾರ್ಯ ಎಂಬಂತೆ ರಾಜ್ಯ ಬಿಜೆಪಿ ಸರ್ಕಾರ ಮಾತನಾಡುತ್ತಿದೆ. ಲಾಕ್ ಡೌನ್ ಹೇರಿದರೆ ಕಷ್ಟನಷ್ಟಕ್ಕೀಡಾಗುವ ಜನತೆಗೆ ಕೇಂದ್ರ ಬಿಜೆಪಿ ಸರ್ಕಾರ ನೀಡುವ ನೆರವಿನ ಘೋಷಣೆಯನ್ನು ಜನ ನಿರೀಕ್ಷಿಸಿದ್ದರು. ಮೋದಿ ಭಾಷಣ ‘ನಿಮ್ಮ ತಲೆ ಮೇಲೆ ನಿಮ್ಮ‌ ಕೈ’ ಎಂಬ ಸಂದೇಶ ನೀಡಿದೆ ಎಂದು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಕೋವಿಡ್ ಪರಿಣಾಮವನ್ನು ಸಮರ್ಥವಾಗಿ ನಿರ್ವಹಿಸಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ  ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವ ಕೇಂದ್ರ ಬಿಜೆಪಿ ಸರ್ಕಾರವೂ ಕಾರಣ. ಪ್ರಧಾನಿಯವರೇ, ನೀವು ವಿಶೇಷ ಆರ್ಥಿಕ ನೆರವು ಕೊಡುವುದು ಬೇಡ , ನಮ್ಮ ನ್ಯಾಯಬದ್ಧ ಪಾಲನ್ನಷ್ಟಾದರೂ ನೀಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next