Advertisement

ದಿಲ್ಲಿ ಪ್ರವಾಸದಲ್ಲಿರುವ ಸಿಎಂ ಯಡಿಯೂರಪ್ಪಗೆ ಸಲಹೆ ನೀಡಿದ ಸಿದ್ದರಾಮಯ್ಯ

02:41 PM Sep 18, 2020 | keerthan |

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ದಿಲ್ಲಿ ಪ್ರವಾಸದಲ್ಲಿದ್ದು, ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಿಎಂ ಗೆ ಹಲವು ‘ಸಲಹೆ’ ನೀಡಿದ್ದಾರೆ.

Advertisement

ಮುಖ್ಯಮಂತ್ರಿ ಬಿಎಸ್ ವೈ ಅವರೇ, ಕಾಡಿಬೇಡಿ ಕೊನೆಗೂ ಪ್ರಧಾನಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಕಡಕ್ ಆಗಿ ಕೇಳಲು ಬಳಸಿಕೊಳ್ಳಿ. ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ ಎಂದಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿಗೆ ರೂ.35000 ಕೋಟಿ ಪರಿಹಾರ ಕೇಳಿದ್ದೀರಿ,‌ ಪ್ರಧಾನಿ ನೀಡಿದ್ದು ರೂ.1,869 ಕೋಟಿ‌. ಈ ಬಾರಿ ರೂ.8000 ಕೋಟಿ ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ. ಕಳೆದ ವರ್ಷದ ಬಾಕಿ ಜೊತೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಿ. 15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ. ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್ ಡಿ ಆರ್ ಎಫ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ದ ಪಾಲು ಸಿಗುವಂತೆ ಮಾಡಿ ಎಂದಿದ್ದಾರೆ.

ಕೋವಿಡ್-19 ಸೋಂಕಿನಲ್ಲಿ ವಿಶ್ವದಲ್ಲಿ ಭಾರತ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಗೆಲುವಿನ ಕಿರೀಟಗಳನ್ನೆಲ್ಲ ಮುಡಿಗೇರಿಸುವ ನರೇಂದ್ರ ಮೋದಿ, ವೈಫಲ್ಯಗಳ ಹೊಣೆಯನ್ನು ರಾಜ್ಯಗಳ ಹೆಗಲ ಕಡೆ ಜಾರಿಸುವ ಚಾಳಿ ಇದೆ. ಪ್ರಧಾನಿ ಅವರಿಗೆ ಜವಾಬ್ದಾರಿ ನೆನಪಿಸಿ ರಾಜ್ಯಕ್ಕೆ ನ್ಯಾಯ ಕೊಡಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರದ ಕೃಷಿ ಕ್ಷೇತ್ರದ ಮೂದೆಗೆ ತೀವ್ರ ವಿರೋಧ; ಸೆ.24ರಿಂದ ರೈಲು ತಡೆ ಪ್ರತಿಭಟನೆ

Advertisement

ಕೋವಿಡ್ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ ಪ್ರಧಾನಿ, ಕರ್ನಾಟಕದ ಬೇಡಿಕೆಯ ಶೇಕಡಾ ಹತ್ತರಷ್ಟೂ ಪೂರೈಸಿಲ್ಲ. ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು ನರೇಂದ್ರ ಮೋದಿ ಅವರ ಕಣ್ಣು ತೆರೆಸಿ. ಪ್ರಧಾನ ಮಂತ್ರಿ ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ. ಕೋವಿಡ್ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ ಎಂದಿದ್ದಾರೆ.

ನ್ಯಾಯಬದ್ಧವಾಗಿ ರಾಜ್ಯಕ್ಕೆ ನೀಡಬೇಕಾಗಿರುವ ಜಿಎಸ್‌ಟಿ ಪರಿಹಾರ ರೂ.25,508 ಕೋಟಿ ನೀಡದೆ ದ್ರೋಹ ಬಗೆದಿರುವ  ಪ್ರಧಾನ ಮಂತ್ರಿ ಸಚಿವಾಲಯ, ಸಾಲ ಎತ್ತಲು  ಸಿಎಂ ಕೈಗೆ ಭಿಕ್ಷಾಪಾತ್ರೆ ನೀಡಿದೆ. ಬಿಎಸ್ ವೈ ಅವರೇ, ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ಈ ಅನ್ಯಾಯ ಸರಿಪಡಿಸಲು ಹೇಳಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next