Advertisement

ಬಿಜೆಪಿ ಬೆಂಗಳೂರು ಗಲಭೆಯ ತನಿಖೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ: ಸಿದ್ದರಾಮಯ್ಯ

05:37 PM Aug 18, 2020 | sudhir |

ಬೆಂಗಳೂರು : ಕಾವಲಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Advertisement

ಸರಕಾರದ ವಿರುದ್ಧ ಗುಡುಗಿದ ಅವರು ದಿನಕ್ಕೊಬ್ಬ ಸಚಿವರು, ಶಾಸಕರು ಗಲಭೆ ಪ್ರದೇಶಕ್ಕೆ ಭೇಟಿ ನೀಡಿ, ಗಲಭೆಗೆ ಎಸ್ ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ ಎಂದಿದ್ದಾರೆ.

ಗಲಭೆಯ ಹಿಂದಿನ ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತ ಹೆಚ್ಚು ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ? ಇದನ್ನು ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ? ಎನ್ನುವ ಬಗ್ಗೆ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಿದ್ದಾರೆ ಎಂದರು.

ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. ಮುಖ್ಯಮಂತ್ರಿ ಅವರ ಪದಚ್ಯುತಿಗೆ ಕೆಲವು ಆರ್ ಎಸ್ ಎಸ್ ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಕ್ಕೆ ಕೆಜೆಹಳ್ಳಿ-ಡಿಜೆಹಳ್ಳಿ ಪ್ರಕರಣವನ್ನು ಯಥೇಚ್ಚವಾಗಿ ಬಳಸಲಾಗುತ್ತಿದೆ.

ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೋರೇಟರ್‌ಗಳು ಇರುವಾಗ ಕಾವಲಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು? ಅಲ್ಲಿ ಚುನಾವಣೆಯಲ್ಲಿ ಎದುರಿಸಲಾಗದ ರಾಜಕೀಯ ಪಕ್ಷಗಳೇ ಪ್ರಕರಣದ ರಾಜಕೀಯ ಲಾಭ ಪಡೆಯಲು ಹೊರಟಿರುವುದು ಸ್ಪಷ್ಟ ಎಂದು ಕಿಡಿಕಾರಿದ್ದಾರೆ.

Advertisement

ಕಾವಲಭೈರಸಂದ್ರ ಗಲಭೆಯ ನಿಜವಾದ ತನಿಖೆ ಬಿಜೆಪಿ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯದಿಂದ ಶುರುವಾಗಬೇಕು. ಸರ್ಕಾರದ ಪ್ರಕಾರ ಇದು ಪೂರ್ವಯೋಜಿತ ಕೃತ್ಯವಾಗಿದ್ದರೆ ಅದು ಯಾಕೆ ಪೊಲೀಸರ ಗಮನಕ್ಕೆ ಬಂದಿಲ್ಲ? ಪ್ರಚೋದನಕಾರಿ ಪೋಸ್ಟ್ ಹಾಕಿರುವ ನವೀನ್ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬಕ್ಕೆ ಯಾರು ಕಾರಣ? ಎಸ್‌ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ, ಆ ಸಂಘಟನೆ ತಪ್ಪು ಮಾಡಿದ್ದರೆ ಅದರ ವಿರುದ್ಧ ಕ್ರಮಕೈಗೊಳ್ಳಿ. ಮುಸ್ಲಿಮ್ ಮತಗಳನ್ನು ಒಡೆಯಲು ಎಸ್‌ಡಿಪಿಐ ಅನ್ನು ಯೋಜಿತ ರೀತಿಯಲ್ಲಿ ಬಳಸಿಕೊಳ್ಳುತ್ತಾ ಬಂದಿರುವ ಬಿಜೆಪಿಗೆ ಅದನ್ನು ನಿಷೇಧಿಸುವ ಧೈರ್ಯ ಇದೆಯೇ? ಎಂದು ಸರಕಾರದ ವಿರುದ್ಧ ಗುಡುಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next