Advertisement

ಮಹಿಳಾ ಸಾಂತ್ವನ ಕೇಂದ್ರ ಸ್ಥಗಿತಗೊಳಿಸಲು ಕೈಗೊಂಡಿರುವ ನಿರ್ಣಯವನ್ನು ಹಿಂಪಡೆಯಿರಿ : ಸಿದ್ದು

03:19 PM Sep 06, 2021 | Team Udayavani |

ಬೆಂಗಳೂರು :  ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದರೂ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವುದು ರಾಜ್ಯ ಸರ್ಕಾರದ ಮಹಿಳಾ ವಿರೋಧಿ ಕ್ರಮವಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಲು ಕೈಗೊಂಡಿರುವ ತೀರ್ಮಾನ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ನೊಂದ ಮತ್ತು ತುರ್ತು ಅಗತ್ಯ ಇರುವ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ, ಆರ್ಥಿಕ ನೆರವು, ಶಿಕ್ಷಣ, ಉದ್ಯೋಗ, ಉಚಿತ ಕಾನೂನು ನೆರವು ಸೇರಿದಂತೆ ಹಲವು ರೀತಿಯ ಸಹಾಯ ಒಂದೇ ಸೂರಿನ ಅಡಿಯಲ್ಲಿ ಸಿಗಬೇಕು ಎನ್ನುವ ಕಾಳಜಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಾಂತ್ವನ ಕೇಂದ್ರಗಳನ್ನು ನಿರ್ವಹಿಸಲಾಗುತಿತ್ತು.

ಇದನ್ನೂ ಓದಿ :ಪಾಲಿಕೆ ಚುನಾವಣೆಯಲ್ಲಿ ನಮಗೆ ಪ್ರಥಮ ಸೂಚನೆ ಸಿಕ್ಕಿದೆ: ಸಿಎಂ ಬೊಮ್ಮಾಯಿ

ಸ್ವಯಂ ಸೇವಾ ಸಂಸ್ಥೆಗಳ ನೆರವಿನಿಂದ ಈ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದವು. ಸಾಂತ್ವನ ಕೇಂದ್ರಗಳ ಆಪ್ತ ಸಮಾಲೋಚಕರಿಂದ ಇದುವರೆಗೂ ಸಹಸ್ರಾರು ಮಹಿಳೆಯರು ಸಾಂತ್ವನ ಮತ್ತು ಭರವಸೆ ಪಡೆದುಕೊಂಡಿದ್ದಾರೆ. ಈ ಕೇಂದ್ರಗಳು ನೊಂದ ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿ ಆತ್ಮಹತ್ಯೆ, ಖಿನ್ನತೆ ಸೇರಿದಂತೆ ಹಲವು ರೀತಿಯ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುತ್ತಿದ್ದವು.

Advertisement

ಈಗ ಕೋವಿಡ್ ನೆಪದಲ್ಲಿ ಆರ್ಥಿಕ ಬಿಕ್ಕಟ್ಟಿನ ಕಾರಣ ಹೇಳಿ 71 ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಲಾಗಿದೆ. ರಾಜಧಾನಿ ಬೆಂಗಳೂರು ಮಹಿಳೆಯರ ಮೇಲೆ ಅತಿ ಹೆಚ್ಚು ದೌರ್ಜನ್ಯ ನಡೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಹೀಗಿದ್ದೂ ಬೆಂಗಳೂರು ನಗರದಲ್ಲಿದ್ದ ಎಲ್ಲಾ ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಿರುವುದು ಅಕ್ಷಮ್ಯ.

ಹೀಗಾಗಿ ತಕ್ಷಣ ಬಂದ್ ಆಗಿರುವ ಸಾಂತ್ವನ ಕೇಂದ್ರಗಳನ್ನು ತಕ್ಷಣ ಆರಂಭಿಸಬೇಕು. ಉಳಿದ ಕೇಂದ್ರಗಳನ್ನು ಬಂದ್ ಮಾಡುವ ನಿರ್ಧಾರವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next