ಬೆಂಗಳೂರು: ಬಿ.ಎಲ್ ಸಂತೋಷ್ ಅವರು ‘ಹಿಂದುತ್ವ’ದ ಜಪ ನಿಲ್ಲಿಸಿ ‘ದಲಿತ’ ಜಪ ಶುರು ಮಾಡಿದ್ದಾರೆ. ‘ಹಿಂದು-ಒಂದು’ ಎಂದು ಭಜನೆ ಮಾಡುತ್ತಿದ್ದಾರೆ. ಜಾತಿ ಮೂಲದ ತಾರತಮ್ಯ, ಶೋಷಣೆಗಳ ಜೊತೆ ಗುದ್ದಾಡಿ, ದಲಿತರೊಬ್ಬರು ಶಾಸಕರಾದರೂ ಅವರನ್ನು ದಲಿತರೆಂದು ಹಂಗಿಸುತ್ತೀರಿ. ನಿಮ್ಮನ್ನು ಕೂಡಾ ನಿಮ್ಮ ಜಾತಿಯಿಂದಲೇ ಕರೆಯೋಣವೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಲ್ಲಿ ಪ್ರಶ್ನಿಸಿದ್ದಾರೆ.
ಬೆಂಗಳೂರು ಗಲಭೆ ನಡೆದ 14 ಗಂಟೆಗಳ ನಂತರ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರವಾಗಿತ್ತು. ಅಲ್ಪಸಂಖ್ಯಾತ ಗುಂಪುಗಳ ಗಲಭೆಯನ್ನು ಖಂಡಿಸಲು ಕಾಂಗ್ರೆಸ್ ಏಕೆ ಹಿಂಜರಿಯುತ್ತಿದೆ. ದಲಿತ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ದಾಳಿ ನಡೆದರೂ ಕಾಂಗ್ರೆಸ್ ಸ್ಮಶಾನ ಮೌನವಹಿಸಿರುವುದೇಕೆ ಎಂದು ಬಿ.ಎಲ್ ಸಂತೋಷ್ ಪ್ರಶ್ನಿಸಿದ್ದರು.
ಇದಕ್ಕೆ ಟ್ವೀಟ್ ಮೂಲಕ ಪ್ರತ್ಯುತ್ತರ ನೀಡಿದ ಸಿದ್ದರಾಮಯ್ಯ, ದಿವಂಗತ ಬಂಗಾರು ಲಕ್ಷ್ಮಣ್ ಅವರನ್ನು ನಿಮ್ಮ ಪಕ್ಷದ ಏಕೈಕ ಭ್ರಷ್ಟನೆಂಬ ರೀತಿಯಲ್ಲಿ ಬಲಿಗೊಟ್ಟಿದ್ದು ಯಾರು ? ದಲಿತರು ಜಾಗೃತರಾಗಿದ್ದಾರೆ, ಹಿತೈಷಿಗಳು ಯಾರು? ಹಿತಶತ್ರುಗಳು ಯಾರು ಎನ್ನುವುದು ಅವರಿಗೆ ಗೊತ್ತಿದೆ. ಉರಿಯುವ ಮನೆಯಲ್ಲಿ ಗಳ ಇರಿಯುವ ಕೆಲಸ ಮಾಡಬೇಡಿ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಎಸ್‌ಸಿ ಪಿ-ಟಿಎಸ್‌ಪಿ ಯೋಜನೆಗೆ ನೀಡಿದ್ದ ಹಣ ರೂ.22,161 ಕೋಟಿ ಮಾತ್ರ. ಆದರೇ ನಮ್ಮ ಸರ್ಕಾರದ 5 ವರ್ಷಗಳಲ್ಲಿ ನೀಡಿದ್ದ ಹಣ ರೂ.88, 395ಕೋಟಿ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿ ಈ ಯೋಜನೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರ್ತೀರಾ ಎಂದು ಪ್ರಶ್ನಿಸಿದರು.
ನಿಮ್ಮ ಕಾಲದಲ್ಲಿ ದಲಿತರ ಹತ್ಯೆ/ದೌರ್ಜನ್ಯ ದುಪ್ಪಟ್ಟಾಗಿದೆ ಎಂದು NCRB (National Crime Records Bureau) ವರದಿ ಹೇಳುತ್ತಿದೆ. ಹೀಗಿದ್ದರೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯಿದೆಯನ್ನು ದುರ್ಬಲಗೊಳಿಸುವ ಹುನ್ನಾರ ನಡೆಸುತ್ತೀರಿ. ಇದು ನಿಮ್ಮ ದಲಿತರ ಮೇಲಿನ ಕಾಳಜಿಯಲ್ಲವೇ ?
ದಲಿತರು ನಾಯಿಗಳೆಂದು ತುಚ್ಛೀಕರಿಸಿದವರು, ಮೀಸಲಾತಿಯನ್ನು ವಿರೋಧಿಸುತ್ತಿರುವವರು, ಸಂವಿಧಾನವನ್ನು ಬದಲಾಯಿಸಬೇಕೆನ್ನುವವರು, ಡಾ.ಅಂಬೇಡ್ಕರ್ ಅವರನ್ನು ಅವಮಾನಿಸುವವರು ಯಾವ ಪಕ್ಷದವರು ?
ಇಂತಹ ಮನುಷ್ಯ ವಿರೋಧಿಗಳ ವಿರುದ್ಧ ನಿಮ್ಮ ಪಕ್ಷವೇನಾದರೂ ಕ್ರಮ ಕೈಗೊಂಡಿದೆಯೇ? ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ. ಸತ್ತ ದನದ ಚರ್ಮ ಸುಲಿದಿದ್ದಕ್ಕೆ, ಗೋಮಾಂಸ ತಿಂದಿದ್ದಕ್ಕೆ, ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ, ಕುದುರೆ ಏರಿದ್ದಕ್ಕೆ, ಮೀಸೆ ಬಿಟ್ಟಿದ್ದಕ್ಕೆ ದಲಿತರ ಬೆನ್ನತ್ತಿ ಹಿಂಸಿಸಿ, ಸಾಯಿಸಿದ್ದು ಯಾರ ಆಡಳಿತದಲ್ಲಿ ?
ರಾಜ್ಯದಲ್ಲಿ ನಿಮ್ಮದೇ ಪಕ್ಷ ಅಧಿಕಾರದಲ್ಲಿರುವಾಗ ಒಬ್ಬ ದಲಿತ ಶಾಸಕನ ಮನೆಗೆ ರಕ್ಷಣೆ ನೀಡಲು ನಿಮಗೆ ಸಾಧ್ಯವಾಗಿಲ್ಲ, ಇನ್ನು ಕೋಟ್ಯಂತರ ಸಂಖ್ಯೆಯ ಬಡ-ಅಸಹಾಯಕ ದಲಿತರ ಮನೆಗಳಿಗೆ ರಕ್ಷಣೆ ನೀಡಲು ಹೇಗೆ ಸಾಧ್ಯ? ಇದು ತಲೆತಗ್ಗಿಸುವಂತಹ ವೈಫಲ್ಯ ಎಂದ ನಿಮಗನಿಸುವುದಿಲ್ಲವೇ ಎಂದು ಸಿದ್ದರಾಮಯ್ಯ ಬಿ.ಎಲ್ ಸಂತೋಷ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.