ಮೈಸೂರು: ಅಪ್ಪ-ಮಕ್ಕಳ ಪಕ್ಷವಾಗಿದ್ದ ಜೆಡಿಎಸ್, ಈ ಚುನಾವಣೆಯಲ್ಲಿ ತಾತ-ಮೊಮ್ಮಕ್ಕಳ ಪಕ್ಷವೂ ಆಗಿದೆ. ಆದರೆ, ತಾತ-ಮೊಮ್ಮಕ್ಕಳು ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬ್ಯಾರಿಕೇಡ್ ಎಳೆದು ಗೆಲುವಿಗೆ ಅಡ್ಡಗಾಲಾಗಿಬಿಟ್ಟಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತಾತ-ಮೊಮ್ಮಕ್ಕಳನ್ನು ಸೋಲಿಸಲು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ನ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದರು. ಜೆಡಿಎಸ್ ವರಿಷ್ಠ ದೇವೇಗೌಡರ ಮೊಮ್ಮಕ್ಕಳ ಗೆಲುವಿಗೆ ಸಿದ್ದರಾಮಯ್ಯ ಅವರೇ ಅಡ್ಡಗಾಲಾಗಿದ್ದಾರೆ.
ಈ ಮೂಲಕ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಯಲ್ಲಾದ ಸೋಲಿನ ಸೇಡನ್ನು ಸಿದ್ದರಾಮಯ್ಯ ತೀರಿಸಿಕೊಳ್ಳುತ್ತಿದ್ದಾರೆ. ಎಚ್.ಡಿ.ದೇವೇಗೌಡರು ಕ್ಷೇತ್ರವನ್ನು ಹುಡುಕಿಕೊಳ್ಳಬೇಕಾದ ಸ್ಥಿತಿ ನಿರ್ಮಿಸಿದ್ದಾರೆ ಎಂದರು.
ಬಿಜೆಪಿಯಲ್ಲಿ ಕಾಣೆಯಾಗಿದ್ದ ಸಿ.ಎಚ್. ವಿಜಯಶಂಕರ್ ಅವರನ್ನು ಕಾಂಗ್ರೆಸ್‌ನವರು ಕರೆದುಕೊಂಡು ಅಭ್ಯರ್ಥಿ ಮಾಡಿಕೊಂಡಿದ್ದಾರೆ. ನಮ್ಮಲ್ಲಿ ಕಾಣೆಯಾಗಿದ್ದವರ ಬಗ್ಗೆ ನಾವೇಕೆ ಮಾತನಾಡಬೇಕು ಎಂದು ಲೇವಡಿ ಮಾಡಿದರು.
ಬಿಜೆಪಿಯಲ್ಲಿ ಯಾವುದೇ ಗೊಂದಲಗಳಿಲ್ಲ, ರಾಜ್ಯದ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಕೂಡ ಸೋಮವಾರವೇ ಪ್ರಕಟವಾಗಲಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತಕುಮಾರ್, ಶಾಸಕರಾದ ರವಿ ಸುಬ್ರಹ್ಮಣ್ಯ, ಎಸ್.ಸುರೇಶ್‌ಕುಮಾರ್ ಅವರ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಲಾಗಿದೆ. ಈ ಮೂವರಲ್ಲಿ ಯಾರಾದರೊಬ್ಬರು ಅಭ್ಯರ್ಥಿಯಾಗಲಿದ್ದಾರೆ ಎಂದು ತಿಳಿಸಿದರು.