ಮೈಸೂರು: ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಅಭ್ಯರ್ಥಿಗಳಿಗೆ ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಮಾತ್ರ ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವಧಿಯಲ್ಲಿ ಅಭ್ಯರ್ಥಿ ಸೇರಿದಂತೆ 10 ಜನರು ಮಾತ್ರ ಮನೆ ಮನೆಗೆ ತೆರಳಿ ಮತಯಾಚನೆ ಮಾಡಬಹುದು. ಅಭ್ಯರ್ಥಿ ಹೊರತುಪಡಿಸಿ ಇತರರು ಮನೆ ಮನೆಗೆ ತೆರಳಿ ಮತಯಾಚನೆ ಮಾಡುವಂತಿಲ್ಲ.
ಮೇ 12ರಂದು ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆವರೆಗೆ ಮತದಾನ ನಡೆಯಲಿದ್ದು, ಅಭ್ಯರ್ಥಿಗಳು ಅಥವಾ ಕಾರ್ಯಕರ್ತರು ಮತದಾನ ಪೂರ್ಣಗೊಳ್ಳುವ 48ಗಂಟೆಗಳ ಪೂರ್ವದಲ್ಲಿ ಮತದಾರರನ್ನು ಯಾವುದೇ ಆಸೆ-ಆಮಿಷಗಳನ್ನು ಒಡ್ಡುವುದು, ತಮ್ಮ ಪರವಾಗಿ ವರ್ತಿಸಲು ಪುಸಲಾಯಿಸುವುದು, ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಪ್ರಚಾರ ಮಾಡುವುದು, ಸಾರ್ವಜನಿಕ ಸಭೆ ನಡೆಸುವುದು,
ಮತದಾರರನ್ನು ಮತಗಟ್ಟೆಗಳಿಗೆ ವಾಹನಗಳಲ್ಲಿ ಕರೆತರುವುದನ್ನು ತಡೆಗಟ್ಟಿ ಮತದಾನದ ಪಾವಿತ್ರ್ಯತೆ ಕಾಪಾಡುವ ಸಲುವಾಗಿ ಈ ಚುನಾವಣೆಯು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ಸಿಆರ್‌ಪಿಸಿ ಸೆಕ್ಷನ್ 144, 144ಎ ಪ್ರಕಾರ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಮೆರವಣಿಗೆ ಅಥವಾ ಐದು ಜನರಿಗಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ ಮಾರಕಾಸ್ತ್ರ, ಶಸ್ತ್ರಾಸ್ತ್ರ, ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಪ್ರತಿಕೃತಿ ಪ್ರದರ್ಶನ, ದಹನ ಮಾಡುವುದನ್ನು ಮತ್ತು ಬಹಿರಂಗ ಘೋಷಣೆ ಇತ್ಯಾದಿಗಳನ್ನು ನಿಷೇದಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ-ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಮತ್ತು ನೈತಿಕತೆಗೆ ಭಂಗ ತರುವ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇದಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.