Advertisement
ಬಂಡಾಯಗಾರರ ಗುಂಪಿನಲ್ಲಿಯೂ ಗುರುತಿಸಿಕೊಳ್ಳದೇ ತಟಸ್ಥರಾಗಿದ್ದ ಆನಂದ್‌ಸಿಂಗ್ ಏಕಾಏಕಿ ರಾಜೀನಾಮೆ ನೀಡಿದ್ದು, ಕೈ ನಾಯಕರಿಗೆ ಅಚ್ಚರಿಯುಂಟು ಮಾಡಿದ್ದು, ಅವರ ಬೆನ್ನಲ್ಲೇ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿರುವುದರಿಂದ ಕೈ ನಾಯಕರ ನಿದ್ದೆಗೆಡಿಸುವಂತೆ ಮಾಡಿದೆ.
Related Articles
Advertisement
ಈ ಮಧ್ಯೆ ಸಿದ್ದರಾಮಯ್ಯ ರಾಜ್ಯದಲ್ಲಿನ ಬೆಳವಣಿಗೆಗಳ ಕುರಿತು ದೂರವಾಣಿ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಗಮನಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ. ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿರುವುದರಿಂದ ಈ ಹಿಂದೆ ಅವರೊಂದಿಗೆ ಗುರುತಿಸಿಕೊಂಡಿದ್ದ ಹತ್ತಕ್ಕೂ ಹೆಚ್ಚು ಅತೃಪ್ತ ಶಾಸಕರನ್ನು ಸಂಪರ್ಕಿಸುವ ಪ್ರಯತ್ನ ನಡೆಸಿ, ಯಾವುದೇ ರೀತಿಯ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಮನವೊಲಿಸುವ ಪ್ರಯತ್ನ ನಡೆಸಿದರು. ಆಪರೇಷನ್ ಕಮಲಕ್ಕೆ ಒಳಗಾಗುತ್ತಾರೆ ಎಂಬ ವದಂತಿ ಇರುವ ಶಾಸಕರನ್ನು ಬೆಂಗಳೂರಿಗೆ ಆಗಮಿಸುವಂತೆ ಸೂಚನೆ ನೀಡಿದ್ದಾರೆ.
ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ, ಕುಷ್ಠಗಿ ಶಾಸಕ ಅಮರೇಗೌಡ ಬಯ್ನಾಪುರ, ಪ್ರತಾಪ್‌ಗೌಡ ಪಾಟೀಲ್ ಬೆಂಗಳೂರಿಗೆ ಆಗಮಿಸಿದ್ದಾರೆ. ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಾವು ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅಮರೇಗೌಡ ಬಯ್ನಾಪುರ, ಮಹೇಶ್ ಕುಮಠಳ್ಳಿ, ಪ್ರತಾಪ್‌ಗೌಡ ಪಾಟೀಲ್ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಅವರೊಂದಿಗೆ ಮಾತನಾಡಿ ಮನವೊಲಿಸುವ ಪ್ರಯತ್ನ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಭೆಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು ಕಂಪ್ಲಿ ಶಾಸಕ ಗಣೇಶ್ ವಿರುದ್ಧ ಪಕ್ಷ ಯಾವುದೇ ಕ್ರಮ ಕೈಗೊಳ್ಳದೇ ಅವರನ್ನು ವಾಪಸ್ ಪಕ್ಷಕ್ಕೆ ಸೇರಿಸಿಕೊಂಡಿದ್ದರಿಂದ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಸಭೆಯಲ್ಲಿ ಹೇಳಿದ್ದಾರೆ ಎನ್ನಲಾಗಿದೆ.
ಕಂಪ್ಲಿ ಗಣೇಶ್ ತಮ್ಮ ಮೇಲೆ ಹಲ್ಲೆ ಮಾಡಿದ ಮೇಲೆ ಅವರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಆನಂದ್‌ಸಿಂಗ್ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ.ಕೆ. ಶಿವಕುಮಾರ್‌ಗೆ ಪತ್ರ ಬರೆದರೂ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಆನಂದ್‌ಸಿಂಗ್ ಬೇಸರಗೊಂಡಿದ್ದರು ಎನ್ನಲಾಗಿದೆ. ಅದರ ಜೊತೆಗೆ ಜಿಂದಾಲ್‌ಗೆ ಭೂಮಿ ಪರಬಾರೆ ಮಾಡುವ ವಿಷಯವೂ ಸೇರಿಕೊಂಡಿರುವುದರಿಂದ ಆನಂದ್‌ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಸೂಕ್ತ ಸ್ಥಾನದ ಭರವಸೆ: ಇಬ್ಬರು ಶಾಸಕರು ರಾಜೀನಾಮೆ ನೀಡಿರುವುದರಿಂದ ಆತಂಕಕ್ಕೊಳಗಾಗಿರುವ ಕಾಂಗ್ರೆಸ್ ನಾಯಕರು ಅತೃಪ್ತರಿಗೆ ಮೈತ್ರಿ ಸರ್ಕಾರದಲ್ಲಿ ಸೂಕ್ತ ಸ್ಥಾನ ಮಾನ ನೀಡುವ ಭರವಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ಒಂದು ವೇಳೆ ರಾಜೀನಾಮೆ ಪರ್ವ ಮುಂದುವರೆದರೆ, ಸರ್ಕಾರದಲ್ಲಿರುವ ಕೆಲವು ಪಕ್ಷ ನಿಷ್ಠ ಸಚಿವರ ರಾಜೀನಾಮೆ ಕೊಡೆಸಿ, ಅತೃಪ್ತರಿಗೆ ಸಚಿವ ಸ್ಥಾನ ನೀಡುವ ಬಗ್ಗೆಯೂ ಕಾಂಗ್ರೆಸ್ ನಾಯಕರು ಆಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.