ಬಾಗಲಕೋಟೆ; ಕಬ್ಬಿನ ಬಾಕಿ ಹಣ ಪಾವತಿಸುವಂತೆ ಒತ್ತಾಯಿಸಿ ಜಿಲ್ಲೆಯ ಕಬ್ಬು ಬೆಳೆಗಾರ ರೈತರು ಶನಿವಾರ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ನೇತೃತ್ವದಲ್ಲಿ ಮುಧೋಳ ಹಾಗೂ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ರೈತರು, ಜಿಲ್ಲಾಡಳಿತ ಭವನದ ಮುಖ್ಯ ಧ್ವಾರಕ್ಕೆ ಬಂದ್ ಮಾಡಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ರೈತ ಮುಖಂಡ ಈರಪ್ಪ ಹಂಚಿನಾಳ ಮಾತನಾಡಿ, ಬರದಲ್ಲೂ ನಾವು ಕಷ್ಟಪಟ್ಟು ಬೆಳೆದ ಕಬ್ಬನ್ನು ಕಾರ್ಖಾನೆಗೆ ಕಳುಹಿಸಿದ್ದೇವೆ. ಕಾರ್ಖಾನೆಯವರು ಬಾಕಿ ಹಣ ಕೊಡದೇ ರೈತರನ್ನು ವಂಚಿಸುತ್ತಿವೆ. ಸರ್ಕಾರವೂ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ 11 ಸಕ್ಕರೆ ಕಾರ್ಖಾನೆಗಳಲ್ಲಿ 9 ಕಾರ್ಖಾನೆ ಎಲ್ಲ ಬಾಕಿ ಕೊಟ್ಟಿವೆ ಎಂದು ಜಿಲ್ಲಾಡಳಿತ ಹೇಳುತ್ತಿದೆ. ಎಫ್‌ಆರ್‌ಪಿ ಅನ್ವಯ ಕಾರ್ಖಾನೆಗಳು ಬಾಕಿ ಕೊಟ್ಟಿದ್ದು, ಈ ಬೆಲೆಗೆ ನಮ್ಮ ಒಪ್ಪಿಗೆ ಇಲ್ಲ. ಕಾರ್ಖಾನೆಗಳು ಕಬ್ಬು ನುರಿಸುವ ಹಂಗಾಮು ವೇಳೆ, ಕಬ್ಬಿನ ದರ ಘೋಷಣೆ ಮಾಡಿದ್ದು, ಆ ಘೋಷಣೆಯಂತೆಯೇ ಬೆಲೆ ಕೊಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಚಿವರಿಗೆ ಮನವಿ: ಬಳಿಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಸಕ್ಕರೆ ಸಚಿವ ಆರ್.ಬಿ. ತಿಮ್ಮಾಪುರ ಅವರಿಗೆ ರೈತರು ಮನವಿ ಸಲ್ಲಿಸಿದರು. ಈ ವೇಳೆ ರೈತರು ಮತ್ತು ಸಚಿವರ ಮಧ್ಯೆ ವಾಗ್ವಾದವೂ ನಡೆಯಿತು.