ಚಾಮರಾಜನಗರ: ಜಿಲ್ಲೆಯಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ, ತಪ್ಪಿಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಶೀಘ್ರದಲ್ಲೇ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ನಡೆದಿರುವ ಅವ್ಯವಹಾರ, ಪ್ರಗತಿ, ಮುಂದುವರಿದ ಕಾಮಗಾರಿಗಳ ಕುರಿತು ಚರ್ಚಿಸಿ, ಹೆಚ್ಚಿನ ಕಾಮಗಾರಿ ಮಾಡಿಸಬೇಕು ಎಂದು ಆಗ್ರಹಿಸಿದರು.
ಕಾಮಗಾರಿಯ ಮಾಹಿತಿ ನೀಡಿ: ಜಿಪಂ ಸಿಇಒ ಲತಾ ಕುಮಾರಿ ಅವಧಿಯಲ್ಲಿ ಮುಂದುವರಿದ ಕಾಮಗಾರಿ ಏನಾಯಿತು ಎಂಬುವುದರ ಬಗ್ಗೆ ಮಾಹಿತಿ ನೀಡಬೇಕು. ರೈತರು ಫೋನ್ ಮಾಡಿದ ಸಂದರ್ಭದಲ್ಲಿ ಫೋನ್ ಕರೆ ಸ್ವೀಕರಿಸಿ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಕಚೇರಿಗೆ ಬರುವ ರೈತರನ್ನು ಗಂಟೆಗಟ್ಟಲೇ ಕಾಯಿಸಿ ಅವರ ಕೆಲಸಗಳಿಗೆ ತೊಂದರೆ ಮಾಡಬಾರದು. ಜಿಲ್ಲೆಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡುವ ಮೂಲಕ ಮುಂದಿನ ಬೇಸಿಗೆ ನೀರು ಸಂಗ್ರಹಿಸಿ, ಉಳಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.
ದೂರು ನೀಡಿದರೆ ಕ್ರಮ: ಸ್ಥಳದಲ್ಲಿ ಹಾಜರಿದ್ದ ಜಿಪಂ ಸಿಇಒ ನಾರಾಯಣರಾವ್ ಮಾತನಾಡಿ, ಉದ್ಯೋಗ ಖಾತರಿ ಯೋಜನೆ, ಆಶ್ರಯ ಮನೆ ನಿರ್ಮಾಣದಲ್ಲಿ ಅವ್ಯವಹಾರ ನಡೆಸಿರುವ ಪಿಡಿಒ ವಿರುದ್ಧ ದೂರು ನೀಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದಾಗಿ ಭರವಸೆ ನೀಡಿದ ಮೇಲೆ ಪ್ರತಿಭಟನಾನಿರತರು ಪ್ರತಿಭಟನೆಯನ್ನು ಅಂತ್ಯಗೊಳಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಡಾ.ಗುರುಪ್ರಸಾದ್, ತಾಲೂಕು ಅಧ್ಯಕ್ಷ ಹೆಗ್ಗವಾಡಿಪುರ ಮಹದೇವಸ್ವಾಮಿ, ಕಾರ್ಯಾಧ್ಯಕ್ಷ ಹೊನ್ನೂರು ಬಸವಣ್ಣ, ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಸಂಚಾಲಕ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಫೃಥ್ವಿ ಇತರರು ಭಾಗವಹಿಸಿದ್ದರು.