Advertisement

ವರ್ಷಾಂತ್ಯದೊಳಗೆ ಸಿಗ್ನಲ್‌ ಮುಕ್ತ ಕಾರಿಡಾರ್‌

01:19 AM Jun 13, 2019 | Team Udayavani |

ಬೆಂಗಳೂರು: ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಬಿಬಿಎಂಪಿ ವತಿಯಿಂದ ಕೈಗೆತ್ತಿಕೊಂಡಿರುವ ಸಿಗ್ನಲ್‌ ಮುಕ್ತ ಕಾರಿಡಾರ್‌ ಯೋಜನೆಗಳನ್ನು ವರ್ಷಾಂತ್ಯದೊಳಗಾಗಿ ಮುಗಿಸುವಂತೆ ಮೇಯರ್‌ ಗಂಗಾಂಬಿಕೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

Advertisement

ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ನಿತ್ಯ ಉಂಟಾಗುತ್ತಿರುವ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ 108 ಕೋಟಿ ರೂ. ವೆಚ್ಚದಲ್ಲಿ ಮೂರು ಸಿಗ್ನಲ್‌ ಮುಕ್ತ ಕಾರಿಡಾರ್‌ಗಳನ್ನು ನಿರ್ಮಿಸಲು ಮುಂದಾಗಿದ್ದು, ಇದರಿಂದಾಗಿ 17.5 ಕಿ.ಮೀ. ಉದ್ದರಸ್ತೆ ದಟ್ಟಣೆಯಿಂದ ಮುಕ್ತವಾಗಲಿದೆ. ಜತೆಗೆ ರಸ್ತೆ ಬದಿಯ ಚರಂಡಿಗಳು, ಪಾದಚಾರಿ ಮಾರ್ಗಗಳು ಹಾಗೂ ಅಡ್ಡರಸ್ತೆಗಳ ಅಭಿವೃದ್ಧಿ ಕಾಮಗಾರಿಯೂ ಒಳಗೊಂಡಿದೆ.

ಕಾಮಗಾರಿ ಪರಿಶೀಲನೆ: ಕಾಮಗಾರಿಯಿಂದಾಗಿ ಸುತ್ತಮುತ್ತಲಿನ ರಸ್ತೆಗಳಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಪಾಲಿಕೆಯ ಅಧಿಕಾರಿಗಳು ಕಾಮಗಾರಿಯನ್ನು ವಿಳಂಬಗತಿಯಲ್ಲಿ ನಡೆಸುತ್ತಿದ್ದಾರೆಂಬ ದೂರುಗಳು ಕೇಳಿಬಂದಿದ್ದವು. ಅದಕ್ಕೆ ಸ್ಪಂದಿಸಿದ ಮೇಯರ್‌ ಗಂಗಾಂಬಿಕೆ ಅವರು ಬುಧವಾರ ಬಿಬಿಎಂಪಿ ಅಧಿಕಾರಿಗಳೊಂದಿಗೆ ಹಳೆ ವಿಮಾನ ನಿಲ್ದಾಣ ರಸ್ತೆಗೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.

ಈ ವೇಳೆ ಕಾಮಗಾರಿ ಆರಂಭವಾಗಲು ಕಾರಣವೇನು ಗುತ್ತಿಗೆದಾರರಿಗೆ ನೀಡಿರುವ ಅವಧಿ ಮುಗಿಯಲು ಇನ್ನೂ ಎಷ್ಟು ದಿನಗಳಿವೆ. ಈವರೆಗೆ ಕಾಮಗಾರಿಯ ಪ್ರಗತಿ ಎಷ್ಟಾಗಿದೆ ಎಂದು ಪ್ರಶ್ನಿಸಿದರು. ಇದರಿಂದ ಕಕ್ಕಾಬಿಕ್ಕಿಯಾದ ಅಧಿಕಾರಿಗಳು ವರ್ಷಾಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

ಅಧಿಕಾರಿಗಳಿಗೆ ಆದೇಶ: ಪರಿಶೀಲನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೇಯರ್‌, ಕುಂದಲಹಳ್ಳಿ ಜಂಕ್ಷನ್‌ ಬಳಿ 19 ಕೋಟಿ ರೂ. ವೆಚ್ಚದಲ್ಲಿ ಕೆಳಸೇತುವೆ ನಿರ್ಮಿಸಲಾಗುತ್ತಿದ್ದು, ಕಾಮಗಾರಿ ವಿಳಂಬವಾದ ಹಿನ್ನೆಲೆಯಲ್ಲಿ ಜಂಕ್ಷನ್‌ ಬಳಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಆ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದು ಹೇಳಿದರು.

Advertisement

ಕಾಮಗಾರಿಯಿಂದ ಉಂಟಾಗುತ್ತಿರುವ ಸಂಚಾರ ದಟ್ಟಣೆ ನಿವಾರಣೆಗಾಗಿ ಸಂಚಾರ ಪೊಲೀಸರೊಂದಿಗೆ ಚರ್ಚಿಸಿ ಶೀಘ್ರ ಪರ್ಯಾಯ ರಸ್ತೆಗಳನ್ನು ನಿರ್ಮಿಸುವಂತೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಂತ ಹಂತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದಾರೆ.

5 ಮೀಟರ್‌ ಜಾಗ ವಶ: ಕುಂದಲಹಳ್ಳಿ ಜಂಕ್ಷನ್‌ ಬಳಿ ಕೆಳಸೇತುವೆ ನಿರ್ಮಿಸುತ್ತಿರುವ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಸಮರ್ಪಕ ರಸ್ತೆಗಳಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಈ ಹಿಂದೆ ರಸ್ತೆ ಆಗಲೀಕರಣಕ್ಕಾಗಿ 5 ಮೀಟರ್‌ ಜಾಗವನ್ನು ವಶಪಡಿಸಿಕೊಂಡಿದ್ದು, ಸರ್ವಿಸ್‌ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿತ್ತು.

ಸಂಚಾರ ದಟ್ಟಣೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮತ್ತೆ 5ಮೀಟರ್‌ ಜಾಗ ಹೆಚ್ಚುವರಿಯಾಗಿ ಬೇಕಾಗಿದ್ದು, ಕೂಡಲೇ ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಹೇಳಿದರು. ಸುರಂಜನ್‌ ದಾಸ್‌ ಜಂಕ್ಷನ್‌ ಬಳಿ 19 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಕೆಳಸೇತುವೆ ಕಾಮಗಾರಿಯೂ ಪ್ರಗತಿಯಲ್ಲಿದ್ದು, ಎರಡೂ ರಸ್ತೆಗಳ ಬದಿಯಲ್ಲಿ ಶೀಘ್ರ ತಡೆಗೋಡೆ ನಿರ್ಮಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ.

ಜತೆಗೆ ವಿಂಡ್‌ ಟನಲ್‌ ಜಂಕ್ಷನ್‌ ಬಳಿ 19 ಕೋಟಿ ರೂ. ವೆಚ್ಚದಲ್ಲಿ ಕೇಳಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಆ ಮೂಲಕ ಸಿಗ್ನಲ್‌ ಮುಕ್ತ ಕಾರಿಡಾರ್‌ ಹಾಗೂ 17.5 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿ ವರ್ಷಾಂತ್ಯದೊಳಗೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಗಂಗಾಂಬಿಕೆ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next