ಮಡಿಕೇರಿ: ಸ್ವಾತಂತ್ರ್ಯಹೋರಾಟದ ಶತಮಾನದ ಇತಿಹಾಸ ಇಂದಿನ ಅಭಿವೃದ್ಧಿಗೆ ಮುನ್ನೋಟವಾಗಲಿ ಎಂದು ಕರೆ ನೀಡಿರುವ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು, ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ಮಹನೀಯರ ಆದರ್ಶವನ್ನು ಗೌರವಿಸಿ ಸಾಮರಸ್ಯದಿಂದ ಬಾಳ್ವೆ ನಡೆಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಹೇಳಿದ್ದಾರೆ.
ಕೊಡಗು ಜಿಲ್ಲಾಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಗರದ ಕೋಟೆ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.
ಜಿಲ್ಲೆಯಲ್ಲಿ ಕಳೆದ ವಾರ ಸುರಿದ ಧಾರಾಕಾರ ಮಳೆಯಿಂದಾಗಿ ಜನತೆ ಸಂಕಷ್ಟಕ್ಕೆ ಒಳಗಾಗಿದ್ದು, ಅವರ ಬದುಕನ್ನು ಕಟ್ಟಿಕೊಡಲು ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದರು.
ರಾಜ್ಯದ ಬಹುತೇಕ ಜಿಲ್ಲೆಗಳು ಈ ಬಾರಿ ಪ್ರಕೃತಿ ವಿಕೋಪದಿಂದ ತತ್ತರಿಸಿದ ಕಾರಣ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲು ಸರಕಾರ ನಿರ್ಧರಿಸಿದೆ.
ದೇಶದ ಏಕತೆ, ಸಮಗ್ರತೆ, ಶಾಂತಿ, ಸಂಸ್ಕೃತಿಗಳ ರಕ್ಷಣೆಗೆ ಕೈಜೋಡಿಸುವ ಪಣತೊಡಬೇಕಿದೆ ಎಂದರು.
ಸರಕಾರಿ ಶಾಲೆಗಳಲ್ಲಿ ಓದಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಅತಿ ಹೆಚ್ಚು ಅಂಕ ಪಡೆದ ಚೆಂಬುನ ಜೀತಾ ಬಿ.ಸಿ, ಮಡಿಕೇರಿಯ ಅಭಿಷೇಕ್, ಗಾಳಿಬೀಡುನ ಕೆ.ಪಿ. ಪ್ರಮೀಳಾ, ತಾಲೂಕು ಮಟ್ಟದಲ್ಲಿ ಅತಿಹೆಚ್ಚು ಅಂಕ ಪಡೆದ ನಿಡ್ತದ ಆಶಿಕಾ, ಚೆಂಬುನ ಬಿ.ಆರ್. ಶ್ರದ್ಧಾ, ಐಗೂರಿನ ಸುಮಿತ್ರಾ ಅವರಿಗೆ ಲ್ಯಾಪ್‌ಟಾಪ್‌ಗ್ಳನ್ನು ವಿತರಿಸಲಾಯಿತು.