ಬೆಂಗಳೂರು: ಕೋವಿಡ್ 19 ಹಿನ್ನೆಲೆ ಸುರಕ್ಷತೆ ಮತ್ತು ಸರಳ ರೀತಿಯಲ್ಲಿ ಈ ಬಾರಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ನಗರದ ಕಬ್ಬನ್ ರಸ್ತೆಯ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ಭಾನುವಾರ ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಮಾತನಾಡಿ, ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತ ವತಿಯಿಂದ ಕಾರ್ಯಕ್ರಮ ನಡೆಸಲಾಗುತ್ತಿದೆ. ಮಂಗಳವಾರ ಬೆಳಗ್ಗೆ 8.58ಕ್ಕೆ ರಾಜ್ಯಪಾಲರು ಮೈದಾನಕ್ಕೆ ಆಗಮಿಸಲಿದ್ದಾರೆ. 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಆ ಬಳಿಕ ಪರೇಡ್ ವಂದನೆ ಸ್ವೀಕರಿಸಿ ನಾಡಿನ ಜನತೆಗೆ ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಅಕ್ರಮ ಗಣಿಗಾರಿಕೆ ತಕ್ಷಣ ನಿಲ್ಲಿಸಬೇಕು: ಬಿಎಸ್ ವೈ
ಸಾರ್ವಜನಿಕ ಪ್ರವೇಶ, ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ: ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆಯಂತೆ ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ. ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೈಬಿಡಲಾಗಿದೆ. 21 ತುಕಡಿಗಳಿಂದ ಪಥಸಂಚಲನ ನಡೆಯಲಿದೆ. ಒಟ್ಟಾರೆ ಕಾರ್ಯಕ್ರಮವನ್ನು 40 ನಿಮಿಷಕ್ಕೆ ಸೀಮಿತ ಮಾಡಲಾಗಿದೆ. ದೂರದರ್ಶನದಲ್ಲಿ ಕಾರ್ಯಕ್ರಮ ನೇರ ಪ್ರಸಾರ ಇರಲಿದೆ ಎಂದು ತಿಳಿಸಿದರು.
ಸಿದ್ಧತೆ: ಭಾನುವಾರ ಪಥಸಂಚಲನ, ನಾಡಗೀತೆ ಹಾಗೂ ರೈತಗೀತೆಯ ಅಂತಿಮ ಹಂತದ ತಾಲೀಮು ನಡೆಯಿತು. ಸಾರ್ವಜನಿಕ ಪ್ರವೇಶ ನಿರ್ಬಂಧ ಹಿನ್ನೆಲೆ ಅತಿಗಣ್ಯರು, ಗಣ್ಯರು, ವಿಶೇಷ ಆಹ್ವಾನಿತರಿಗಾಗಿ 500 ಆಸನ, ವೇದಿಕೆ ಸಿದ್ಧಪಡಿಸಲಾಗಿದೆ.
ಭದ್ರತೆ: ಕಾರ್ಯಕ್ರಮದ ಭದ್ರತೆಗಾಗಿ 1100 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 70 ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ. ಭಾಗವಹಿಸುವ ಎಲ್ಲರೂ ಮಾಸ್ಕ್ ಕಡ್ಡಾಯ. ಪಾಸ್ ಇದ್ದರೆ ಮಾತ್ರ ಪ್ರವೇಶ ನೀಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಮಾಹಿತಿ ನೀಡಿದರು.