ಸಿರುಗುಪ್ಪ: ತಾಲೂಕಿನ ವಿವಿಧ ಕಡೆಗಳಲ್ಲಿ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗಿದ್ದು, ತಾಲೂಕಿನಾದ್ಯಂತ ಬಿತ್ತನೆ ಕಾರ್ಯ ಭರದಿಂದ ಸಾಗಿದೆ. ತಾಲೂಕಿನ ಕರೂರು, ಹಚ್ಚೋಳ್ಳಿ, ತೆಕ್ಕಲಕೋಟೆ, ಸಿರುಗುಪ್ಪ ಹೋಬಳಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರು ಬೋರ್‌ವೆಲ್ ಮತ್ತು ನದಿ, ಹಳ್ಳದ ನೀರನ್ನು ಬಳಸಿಕೊಂಡು ಸುಮಾರು 300 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ, 50 ಹೆಕ್ಟೇರ್‌ನಲ್ಲಿ ಸೂರ್ಯಕಾಂತಿ ಬಿತ್ತನೆ ಮಾಡಿದ್ದಾರೆ.
ಸೋಮವಾರ, ಮಂಗಳವಾರ, ಬುಧವಾರ ಮತ್ತು ಗುರುವಾರ ಸುರಿದ ಮಳೆಯಿಂದಾಗಿ ಈಗಾಗಲೇ ಬಿತ್ತನೆ ಮಾಡಿದ ಬೆಳೆಗಳಿಗೆ ಅನುಕೂಲವಾಗಿದೆ. ಮೂರು ದಿನಗಳಿಂದ ಸುರಿದ ಮಳೆಯಿಂದ ತಾಲೂಕಿನಾದ್ಯಂತ ಬಿತ್ತನೆ ಕಾರ್ಯ ಭರದಿಂದ ನಡೆಯುತ್ತಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.
ತಾಲೂಕಿನಲ್ಲಿ 53,635 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನ ಗುರಿ ಹೊಂದಿದ್ದು, 28 ಸಾವಿರ ಹೆಕ್ಟೇರ್‌ನಲ್ಲಿ ಭತ್ತ, 800 ಹೆಕ್ಟೇರ್‌ನಲ್ಲಿ ಜೋಳ, 400 ಹೆಕ್ಟೇರ್‌ನಲ್ಲಿ ಮುಸುಕಿನ ಜೋಳ, 500 ಹೆಕ್ಟೇರ್‌ನಲ್ಲಿ ಸಜ್ಜೆ, 11,050 ಹೆಕ್ಟೇರ್‌ನಲ್ಲಿ ವಿವಿಧ ಸಿರಿಧಾನ್ಯಗಳನ್ನು ಮತ್ತು ನವಣೆ ಬಿತ್ತನೆಗೆ ಗುರಿ ಹಾಕಿಕೊಳ್ಳಲಾಗಿದೆ. ಇದರಲ್ಲಿ 3,300 ಹೆಕ್ಟೇರ್ ದ್ವಿದಳ, 1,560 ಹೆಕ್ಟೇರ್‌ನಲ್ಲಿ ಎಣ್ಣೆಬೀಜಗಳು, 950 ಹೆಕ್ಟೇರ್‌ನಲ್ಲಿ ವಾಣಿಜ್ಯ ಬೆಳೆಗಳು, 19 ಸಾವಿರ ಹೆಕ್ಟೇರ್ ಹತ್ತಿ, 900 ಹೆಕ್ಟೇರ್ ಕಬ್ಬು, ಬೆಳೆಯುವ ಗುರಿ ಹೊಂದಲಾಗಿದೆ. ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, 300 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ, 50 ಹೆಕ್ಟೇರ್‌ನಲ್ಲಿ ಸೂರ್ಯಕಾಂತಿಯನ್ನು ಬಿತ್ತನೆ ಮಾಡಿದ್ದಾರೆ. ಅಲ್ಲದೆ ಬಿತ್ತನೆ ಕಾರ್ಯ ಜೋರಾಗಿ ನಡೆಯುತ್ತಿದೆ ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹಮ್ಮದ್ ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಸುರಿದ ಮಳೆಯು ಬಿತ್ತನೆ ಕಾರ್ಯಕ್ಕೆ ಅನುಕೂಲವಾಗಿದೆ. ಈ ತಿಂಗಳಲ್ಲಿ ಹತ್ತಿ, ಸೂರ್ಯಕಾಂತಿ, ಮೆಕ್ಕೆಜೋಳ ಬಿತ್ತನೆ ಮಾಡಿದರೆ ಯಾವುದೇ ರೋಗ, ಕೀಟಗಳ ಬಾಧೆ ಇರುವುದಿಲ್ಲವೆಂದು ಬಲಕುಂದಿ ಗ್ರಾಮದ ರೈತ ಪಿಡ್ಡಯ್ಯ ತಿಳಿಸಿದ್ದಾರೆ.