ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪದಲ್ಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ವಿಚಾರಣ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನನ್ನು ಎತ್ತಿಹಿಡಿದಿರುವ ಹೈಕೋರ್ಟ್, ಜಾಮೀನು ರದ್ದುಕೋರಿ ಎಸ್ಐಟಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಇದೇ ವೇಳೆ ಪ್ರಕರಣದ ಇತರ ಆರೋಪಿಗಳಾದ ಸತೀಶ್ ಬಾಬಣ್ಣ ಸೇರಿದಂತೆ ಆರು ಮಂದಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದ್ದ ವಿಚಾರಣ ನ್ಯಾಯಾಲಯದ ಆದೇಶ ಪ್ರಶ್ನಿಸಿ ಎಸ್ಐಟಿ ಸಲ್ಲಿಸಿದ್ದ ಅರ್ಜಿ ಹಾಗೂ ಜಾಮೀನು ಕೋರಿ ಇತರ 6 ಮಂದಿ ಆರೋಪಿಗಳು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಪೀಠ ಬುಧವಾರ ಪ್ರಕಟಿಸಿದ್ದು ರೇವಣ್ಣ ವಿರುದ್ಧ ಎಸ್ಐಟಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.