ಮೈಸೂರು: ರಾಜ್ಯದಲ್ಲಿ ಎದುರಾಗಿರುವ ಭೀಕರ ಬರದ ನಡುವೆ ರೈತರಿಗೆ ನೋಟಿಸ್ ನೀಡುತ್ತಿರುವ ಬ್ಯಾಂಕ್‌ಗಳ ನಡೆಯನ್ನು ಖಂಡಿಸಿ ಹಾಗೂ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ನಗರದ ಸರಸ್ವತಿಪುರಂನಲ್ಲಿರುವ ಎಸ್‌ಬಿಐ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಮೂರು ವರ್ಷಗಳಿಂದ ಉಂಟಾಗಿರುವ ಭೀಕರ ಬರಗಾಲದಿಂದ ಮಳೆಯ ಅಭಾವ ಎದುರಾಗಿದ್ದು, ಇದರಿಂದ ರೈತರು ಬೆಳೆದ ಬೆಳೆಗಳಿಗೆ ನೀರಿಲ್ಲದೆ ಕಂಗಾಲಾಗಿದ್ದಾರೆ. ಈ ಪರಿಸ್ಥಿತಿಯಿಂದ ರೈತರು ತಾವು ಪಡೆದ ಸಾಲ ತೀರಿಸಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದು, ಇಂತಹ ಸ್ಥಿತಿಯಲ್ಲಿ ರೈತರಿಗೆ ನೋಟಿಸ್ ನೀಡುತ್ತಿರುವ ಬ್ಯಾಂಕುಗಳ ನಿರ್ಧಾರ ಖಂಡನೀಯ ಎಂದು ಆರೋಪಿಸಿ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಹಿನ್ನೆಲೆ ಸರ್ಕಾರ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ರೈತರ ಸಾಲ ಮನ್ನಾ ಮಾಡಲು ಮುಂದಾಗಬೇಕಿದೆ. ಅಲ್ಲದೆ ಬ್ಯಾಂಕ್ ಅಧಿಕಾರಿಗಳು ರೈತರ ಮನೆಗೆ ನೋಟಿಸ್ ನೀಡಿದರೆ ಅಂತಹ ಬ್ಯಾಂಕ್‌ಗಳ ಮುಂದೆಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ ಪ್ರತಿಭಟನಾಕಾರರು, ತಲೆ ಮೇಲೆ ಕಲ್ಲು ಹೊತ್ತುಕೊಂಡು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದರು. ಈ ವೇಳೆ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಶಿವಲಿಂಗಯ್ಯ ಪ್ರತಿಭಟನಾನಿರತ ರೈತರ ಸಮಸ್ಯೆ ಆಲಿಸಿದರು.
ರಾಜ್ಯ ಕಬ್ಬುಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತ್‌ಕುಮಾರ್ ಮಾತನಾಡಿ, ರಾಜ್ಯದಲ್ಲಿ ತೀವ್ರ ಬರಗಾಲಕ್ಕೆ ರೈತರು ತುತ್ತಾಗಿದ್ದರೂ ಬ್ಯಾಂಕ್ ಅಧಿಕಾರಿಗಳು ಸಾಲ ಪಡೆದ ರೈತರಿಗೆ ನೋಟಿಸ್ ನೀಡುತ್ತಿರುವುದು ಖಂಡನೀಯ. ಇದೇ ರೀತಿ ಬ್ಯಾಂಕ್ ಮ್ಯಾನೇಜರ್‌ಗಳು ನೋಟಿಸ್ ನೀಡುತ್ತಿದ್ದರೆ, ಮುಂದಿನ ದಿನಗಳಲ್ಲಿ ಬ್ಯಾಂಕಿನ ವ್ಯವಹಾರಗಳನ್ನೇ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಬಳಿಕ ಎಸ್‌ಬಿಐ ವಿಬಾಗೀಯ ವ್ಯವಸ್ಥಾಪಕ ಕೆ.ಶ್ರೀನಿವಾಸ್ ಮಾತನಾಡಿ, ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ, ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ, ಪ್ರತಿಭಟನೆ ಹಿಂಪಡೆಯಲಾಯಿತು. ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಮುಖಂಡರಾದ ಭಾಗ್ಯರಾಜ್, ನಾಗರಾಜ್, ಸುರೇಶ್, ರೇವಣ್ಣ, ಪರಶಿವಮೂರ್ತಿ, ಸಿದ್ದೇಶ್, ಕೃಷ್ಣೇಗೌಡ, ರಾಜಣ್ಣ, ರವೀಂದ್ರ, ಮಂಜು, ಪುಟ್ಟರಾಜು, ಮಹದೇವಸ್ವಾಮಿ, ಮಂಜುನಾಥ್ ಇದ್ದರು.