ಚೆನ್ನೈ: ಇಲ್ಲಿಗೆ ಸಮೀಪದ ಹೆದ್ದಾರಿಯಲ್ಲಿ ಟ್ರಕ್‌ಗೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ 6 ಮಂದಿ ಪ್ರಯಾಣಿಕರು ಮೃತಪಟ್ಟು 10 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಚಿದಂಬರಂಗೆ ತೆರಳುತ್ತಿದ್ದ ಬಸ್ ಚೆನ್ನೈ-ತಿರುಚಿರಾಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಥುರಾಂತಕಂ ಬಳಿ ಕಂಟೈನರ್ ಟ್ರಕ್‌ಗೆ ಢಿಕ್ಕಿ ಹೊಡೆದಿದೆ ಎಂದು ಚೆಂಗಲ್‌ಪೇಟ್ ಜಿಲ್ಲಾ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ, ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಮೃತರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಚೆಂಗಲ್ಪಟ್ಟುವಿನಲ್ಲಿ ನಡೆದ ಅಪಘಾತದಲ್ಲಿ ಸಂಭವಿಸಿದ ಪ್ರಾಣಹಾನಿಯಿಂದ ನೋವಾಗಿದೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಜೊತೆಗಿವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದಿದ್ದಾರೆ.
ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ರಾಜ್ಯಪಾಲ ಆರ್ ಎನ್ ರವಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿ, ಸಿಎಂ ಸಾರ್ವಜನಿಕ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.