ಮಂಗಳೂರು: ಘನತ್ಯಾಜ್ಯ ವಿಲೇವಾರಿ ನಿಯಮಗಳು -2016 ಇದರ ಪಾಲನೆ ಆಗುವವರೆಗೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿಯ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹೈಕೋರ್ಟ್ ಗೆ ತಿಳಿಸಿದ್ದಾರೆ.
ಘನತ್ಯಾಜ್ಯಕ್ಕಿಂತ ಸ್ಮಾರ್ಟ್ ಸಿಟಿ ಯೋಜನೆ ಕಾಮಾಗಾರಿಯಿಂದ ಹರಡುತ್ತಿರುವ ತ್ಯಾಜ್ಯಾ ಹೆಚ್ಚಾಗಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಈ ಹೇಳಿಕೆ ನೀಡಿದ್ದಾರೆ.
ತೃಪ್ತಿದಾಯಕ ವಿವರಣೆ ಸಲ್ಲಿಸದಿದ್ದರೇ ಯೋಜನೆಯ ಎಲ್ಲಾ ಕಾಮಾಗಾರಿಗಳನ್ನು ನಿಲ್ಲಿಸುವಂತೆ ಆದೇಶಿಸಲಾಗುವುದು ಎಂದು ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ಇತ್ತೀಚಿಗೆ ಹೈಕೋರ್ಟ್ ಎಚ್ಚರಿಕೆ ನೀಡಿತ್ತು.
ಮಂಗಳೂರಿನ ಪಚ್ಚನಾಡಿಯಲ್ಲಿ ಸಂಭವಿಸಿದ ಭೂಕುಸಿತ ದುರಂತದಿಂದ ಹಾನಿಗೊಳಗಾದ ವ್ಯಕ್ತಿಗಳಿಗೆ ಗೃಹ ಮಂಡಳಿ ಕಟ್ಟಡಲ್ಲಿ ವಸತಿ ಕಲ್ಪಿಸಲಾಗಿದೆ ಎಂದು ಸರ್ಕಾರ ಮತ್ತು ಪಾಲಿಕೆ ವರದಿ ಸಲ್ಲಿಸಿತ್ತು. ಅಪಘಾತ ಪ್ರಧೇಶದಲ್ಲಿ ಕುಡಿಯುವ ನೀರಿನ ಸೌಕರ್ಯ ಇಲ್ಲ ಆದ್ದರಿಂದ ಟ್ಯಾಂಕರ್ ಮೂಲಕ ನೀರಿನ ಸರಬರಾಜು ಮಾಡುತ್ತಿರುವುದನ್ನು ಖಚಿತಪಡಿಸಬೇಕು ಎಂದು ಹೈಕೋರ್ಟ್ ತಿಳಿಸಿತ್ತು.
ಇಂದಿನ ವಿಚಾರಣೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಈ ಕುರಿತು ಗುತ್ತಿಗೆದಾರರಿಗೆ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು.
ಈ ಕುರಿತ ಮುಂದಿನ ವಿಚಾರಣೆಯನ್ನು ಹೈಕೋರ್ಟ್ ಜನವರಿ 20ಕ್ಕೆ ಮುಂದೂಡಿದೆ.