Advertisement

ಕಾಲಮಿತಿಯೊಳಗೆ ಸ್ಮಾರ್ಟ್‌ಸಿಟಿ ಕಾಮಗಾರಿ ಪೂರ್ಣ: ಸಚಿವರ ಸೂಚನೆ

02:14 AM May 30, 2022 | Team Udayavani |

ಮಂಗಳೂರು: ಮಂಗಳೂರಿನ ಸ್ಮಾರ್ಟ್‌ಸಿಟಿ ಯೋಜನೆಯ ಬಹುತೇಕ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಸ್ಮಾರ್ಟ್‌ ಸಿಟಿ ವತಿಯಿಂದ ಮಂಗಳೂರಿನ ವಿವಿಧ ಕಡೆ ಕೈಗೊಂಡಿರುವ ಕಾಮಗಾರಿಗಳನ್ನು ರವಿವಾರ ಬೆಳಗ್ಗೆ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸ್ಮಾರ್ಟ್‌ ಸಿಟಿ ಯೋಜನೆಯಡಿ ಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ನಿರ್ಮಾಣವಾಗುತ್ತಿದೆ. ಇದು ರಾಜ್ಯದ ಪ್ರಮುಖ ಈಜುಕೊಳಗಳಲ್ಲಿ ಒಂದಾಗಲಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಉತ್ತಮವಾಗಿ ಬಳಕೆಯಾಗಬೇಕು. ಆಗ ದೇಶದ ವಿವಿಧ ಭಾಗದ ಕ್ರೀಡಾಪಟುಗಳನ್ನು ಸೆಳೆಯಲು ಸಾಧ್ಯವಾಗುತ್ತದೆ ಎಂದರು.

ಸ್ಮಾರ್ಟ್‌ಸಿಟಿ ಕಾಮಗಾರಿಗಳು ಕೇವಲ ಮಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿಲ್ಲ, ಅವುಗಳ ಲಾಭ ಸಂಪೂರ್ಣವಾಗಿ ಜಿಲ್ಲೆಯ ಜನತೆಗೆ ದೊರೆಯಬೇಕು. ಕೆಲವು ಕಾಮಗಾರಿಗಳನ್ನು ರಾಜ್ಯವನ್ನು ದೃಷ್ಟಿಯಲ್ಲಿ ಇರಿಸಿಕೊಂಡು ನಿರ್ವಹಿಸಲಾಗುತ್ತಿದೆ. ಸ್ಮಾರ್ಟ್‌ ಸಿಟಿ ಕಾಮಗಾರಿಗಳಲ್ಲಿ ಕದ್ರಿ ಪಾರ್ಕ್‌ ರಸ್ತೆಯ ಅಭಿವೃದ್ಧಿ ಕಾಮಗಾರಿ ಪ್ರಮುಖವಾಗಿದ್ದು, ಶೇ. 90ರಷ್ಟು ಪೂರ್ಣಗೊಂಡಿದೆ. ಪಾರ್ಕ್‌ ಸಾರ್ವಜನಿಕ ವಿಹಾರಕ್ಕೆ ಬಳಕೆಯಾಗುತ್ತಿದ್ದು, ಕುಟುಂಬದ ಸಹಿತ ಇಲ್ಲಿ ವಿಹರಿಸಲು ಸಾಧ್ಯವಾಗುವ ಉನ್ನತೀಕರಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ವಾಹನ ನಿಲುಗಡೆಗೆ ಪರ್ಯಾಯ ವ್ಯವಸ್ಥೆಯ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.

ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮಂಗಳೂರು ನಗರದ ಸರ್ವೀಸ್‌ ಬಸ್‌ ನಿಲ್ದಾಣ ಸಮಸ್ಯೆಗಳನ್ನು ಬಗೆಹರಿಸಿ, ಶಾಶ್ವತ ಕಾಯಕಲ್ಪ ನೀಡಲು ವ್ಯವಸ್ಥಿತ ಕಾಮಗಾರಿಗಳು ನಡೆಯುತ್ತಿದೆ. ಈವರೆಗೆ ಇದ್ದ ಎಲ್ಲ ಕೊರತೆಗಳನ್ನು ನೀಗಿಸಿ ಉತ್ತಮ ಸರ್ವೀಸ್‌ ಬಸ್‌ ನಿಲ್ದಾಣ ಕೆಲವೇ ತಿಂಗಳುಗಳಲ್ಲಿ ನಿರ್ಮಾಣವಾಗಲಿದೆ ಎಂದು ಸಚಿವರು ಹೇಳಿದರು. ಭೇಟಿ ನೀಡಿದ ಕೆಲವೆಡೆ ಸಮಸ್ಯೆಗಳ ಬಗ್ಗೆ ಸ್ಥಳೀಯರು ತಿಳಿಸಿದ್ದಾರೆ, ಕೆಲವು ಕಡೆ ಮಾರ್ಪಾಡುಗಳನ್ನು ಮಾಡಿಕೊಂಡು ಕಾಮಗಾರಿ ಪೂರ್ಣಗೊಳಿಸುವ ಬಗ್ಗೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರಮುಖವಾಗಿ ಮಳೆಗಾಲದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳಿಂದಾಗಿ ಜನಸಂಚಾರಕ್ಕೆ ತೊಂದರೆ ಯಾಗದಂತೆ ಎಚ್ಚರ ವಹಿಸಲು ತಿಳಿಸಲಾಗಿದೆ. ಈ ಕಾಮಗಾರಿಗಳು ಪೂರ್ಣಗೊಳ್ಳುವ ವರೆಗೆ ಸಾರ್ವಜನಿಕರ ಸಹಕಾರವೂ ಅಗತ್ಯ ಎಂದು ತಿಳಿಸಿದರು.

Advertisement

ಶಾಸಕ ವೇದವ್ಯಾಸ್‌ ಕಾಮತ್‌, ಮಂಗಳೂರು ಮೇಯರ್‌ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್‌ ಕುಮಾರ್‌ ಮಿಶ್ರ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌, ಸ್ಥಳೀಯ ಮನಪಾ ಸದಸ್ಯರು, ಸ್ಮಾರ್ಟ್‌ ಸಿಟಿ ಯೋಜನೆಯ ಅಧಿಕಾರಿಗಳಾದ ಅರುಣ್‌ ಪ್ರಭಾ, ಕೆ.ಎಸ್‌. ಲಿಂಗೇಗೌಡ, ಚಂದ್ರಕಾಂತ್‌, ರಾಘವೇಂದ್ರ, ಮಂಜು ಕೀರ್ತಿ ಹಾಗೂ ಪಾಲಿಕೆ, ಸ್ಮಾರ್ಟ್‌ಸಿಟಿ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next