ಮೈಸೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಕರೆತರಲು ಪ್ರಯತ್ನಿಸಲಾಗುವುದು ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ ಆಗಿರುವುದರಿಂದ ರಾಜ್ಯದಲ್ಲಿ ಬಿಜೆಪಿಯ ಶಕ್ತಿ ಮತ್ತಷ್ಟು ಹೆಚ್ಚಾಗಿದೆ. ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಸಹಕಾರಿಯಾಗಲಿದೆ ಎಂದರು.
ಪಕ್ಷಕ್ಕೆ ಸೇರ್ಪಡೆಗೊಂಡಿರುವ ಕೃಷ್ಣ ಅವರು ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಭೇಟಿ ಮಾಡಲಿದ್ದು, ಅವರು ಬೆಂಗಳೂರಿಗೆ ಬರುವುದು ಖಚಿತವಾಗುತ್ತಿದ್ದಂತೆ ಖುದ್ದು ತಾವೇ ಬೆಂಗಳೂರಿಗೆ ತೆರಳಿ ಅವರನ್ನು ಪಕ್ಷದ ಕಚೇರಿಗೆ ಬರಮಾಡಿಕೊಳ್ಳುತ್ತೇನೆ.
ಅಲ್ಲದೆ ಮುಂಬರುವ ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರಕ್ಕೆ ಕೃಷ್ಣ ಅವರನ್ನು ಕರೆತರಲು ಪ್ರಯತ್ನಿಸುವುದಾಗಿ ತಿಳಿಸಿದ ಅವರು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಪೂರಕ ವಾತಾವರಣವಿದ್ದು, ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸರ್ಕಾರ ವಿಫಲ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಕೆಲವು ದಿನಗಳಿಂದ ನಿರಂತರ ಹೋರಾಟದಲ್ಲಿ ತೊಡಗಿರುವ ಅಂಗನವಾಡಿ ಕಾರ್ಯ ಕರ್ತೆಯರ ಸಮಸ್ಯೆ ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಯಾವುದೇ ಸಮಸ್ಯೆ ಎದುರಾದರೂ ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಲಸವಾಗಿದೆ ಎಂದು ಕಿಡಿಕಾರಿದರು. ಅಲ್ಲದೆ ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಪರಿಸ್ಥಿತಿ ನಿರ್ವಹಣೆಯಲ್ಲೂ ವಿಫಲವಾಗಿರುವ ರಾಜ್ಯ ಸರ್ಕಾರ, ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಯಾವುದೇ ಸ್ಪಷ್ಟ ನಿಲುವು ತಳೆಯುತ್ತಿಲ್ಲ ಎಂದು ವಾಗ್ಧಾಳಿ ನಡೆಸಿದರು.
ಒಳ್ಳೆ ರೀತಿ ಚಿಂತಿಸಲಿ: ವಿಧಾನಮಂಡಲದ ಅಧಿವೇಶನದಲ್ಲಿ ಮಾಧ್ಯಮಗಳಿಗೆ ಕಡಿವಾಣ ಹಾಕಬೇಕೆಂಬ ಬಗ್ಗೆ ಕೇಳಿ ಬಂದಿರುವ ಒತ್ತಾಯಗಳ ಬಗ್ಗೆ ಸ್ಪಷ್ಟ ಉತ್ತರ ನೀಡಲು ನಿರಾಕರಿಸಿದ ಬಿ.ಎಸ್.ವೈ, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮಗಳು ಪ್ರಜಾಪ್ರಭತ್ವದ ನಾಲ್ಕು ಪ್ರಮುಖ ಅಂಗಗಳಾಗಿದ್ದು, ಎಲ್ಲವೂ ಒಂದಕ್ಕೊಂದು ಪೂರಕವಾಗಿ ಸಾಗಬೇಕಿದೆ. ಹೀಗಾಗಿ ಈ ವಿಷಯದಲ್ಲಿ ಮಾಧ್ಯಮಗಳು ಒಳ್ಳೆಯ ರೀತಿ ಚಿಂತಿಸಬೇಕಿದೆ ಎಂದರು.