ಕೋಲಾರ: ಕೋವಿಡ್ ಸೋಂಕಿತರ ಸಂಖ್ಯೆ ಏರುತ್ತಿರುವುದರಿಂದ ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಇಲ್ಲಿನ ಹೊರ ರೋಗಿಗಳ ವಿಭಾಗವನ್ನು ಜು.22 ರಿಂದ ಇಟಿಸಿಎಂ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು.
ಈ ಸಂಬಂಧ ಇಟಿಸಿಎಂ ಆಸ್ಪತ್ರೆಗೆ ಭೇಟಿ ನೀಡಿ ಕಟ್ಟಡದ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ, 400ರ ಗಡಿ ದಾಟಿದ್ದು, ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಹಾಸಿಗೆಗಳ ಸಮಸ್ಯೆ ಎದುರಾಗಲಿದೆ ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯನ್ನು ಪೂರ್ಣ ಕೋವಿಡ್ ಆಸ್ಪತ್ರೆಯಾಗಿಯೇ ಬದಲಿಸಲು ನಿರ್ಧರಿಸಲಾಗಿದೆ. ಹೊರರೋಗಿಗಳಿಗೆ ಚಿಕಿತ್ಸೆ ಮುಂದುವರಿಸಬೇಕಾದ್ದರಿಂದ ಈ ವಿಭಾಗವನ್ನು ಇಟಿಸಿಎಂ ಆಸ್ಪತ್ರೆಗೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ. ಈ ಮೂಲಕ ಜಿಲ್ಲಾಸ್ಪತ್ರೆಗೆ ಬರುವ ಹೊರರೋಗಿಗಳಿಗೆ ಬುಧವಾರದಿಂದ, ಎಸ್.ಎನ್.ಆರ್. ಜಿಲ್ಲಾಸ್ಪತ್ರೆಗೆ ಹೊಂದಿ ಕೊಂಡಿರುವ ಇಟಿಸಿಎಂ ಕಟ್ಟಡದಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.
ಇದುವರೆಗೂ ಕೋವಿಡ್ ಸೋಂಕಿತರಿಗಾಗಿ 200 ಹಾಸಿಗೆ ಗಳನ್ನು ಜಿಲ್ಲಾಸ್ಪತ್ರೆಯಲ್ಲಿ ನಿಗದಿಪಡಿಸಲಾಗಿತ್ತು. ಇದೀಗ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ಹಾಸಿಗೆಗಳ ಸಾಮರ್ಥ್ಯ ಹೆಚ್ಚಳ ಮಾಡುವ ಉದ್ದೇಶದಿಂದ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆಮಾಡಲಾಗುತ್ತಿದೆ ಎಂದು ಹೇಳಿದರು. ಈ ಮೂಲಕ 450 ಹಾಸಿಗೆಗಳಿಗೆ ಹೆಚ್ಚಳ ಮಾಡಿದ್ದು, ಇದುವರೆಗೂ 138 ಕೊರೊನಾ ಸೋಂಕಿತರು ಜಿಲ್ಲಾಸ್ಪತ್ರೆಯಲ್ಲಿದ್ದಾರೆ. ಇವರಲ್ಲಿ ಶುಕ್ರವಾರ 52 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈ ವೇಳೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಜಿ.ನಾರಾಯಣಸ್ವಾಮಿ, ಡಿಎಚ್‌ಒ ವಿಜಯಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ, ತಾಲೂಕು ವೈದ್ಯಾಧಿಕಾರಿ ಡಾ.ರಮ್ಯ ದೀಪಿಕಾ ಮತ್ತಿತರರಿದ್ದರು.