ಸ್ಟೇಟ್ಬ್ಯಾಂಕ್: ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಮರ್ಥ ಕೆಲಸ ಮಾಡುತ್ತಾರೆ. ಮಕ್ಕಳೊಂದಿಗೆ ಬೆರೆಯುವ ಮೂಲಕ ಸಾಕಷ್ಟು ಧನಾತ್ಮಕ ಯೋಚನೆಗಳನ್ನು ಅಂಗನವಾಡಿ ಕಾರ್ಯಕರ್ತೆಯರು ಹೊಂದಿರುತ್ತಾರೆ ಎಂದು ದ.ಕ. ಅಪರ ಜಿಲ್ಲಾಧಿಕಾರಿ ಎಂ. ಜೆ.ರೂಪಾ ಹೇಳಿದರು.
ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬ್ಯಾಂಕ್ ಆಫ್ ಬರೋಡಾ ಮತ್ತು ಭಾರತೀಯ ರೆಡ್‌ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಶಾಖೆಯ ಆಶ್ರಯದಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸೊಳ್ಳೆ ಪರದೆ ವಿತರಣೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಡೆಂಗ್ಯೂ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಡೆಂಗ್ಯೂ ನಿಯಂತ್ರಣ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿದರೆ, ಅಲ್ಲಿಗೆ ಬರುವ ಮಕ್ಕಳ ಹೆತ್ತವರಿಗೂ ಅವರು ಜಾಗೃತಿ ಮೂಡಿಸುತ್ತಾರೆ. ಇದರಿಂದ ಮನೆಮನೆಗಳಲ್ಲಿ ಡೆಂಗ್ಯೂ ನಿರ್ಮೂಲನೆಗೆ ಅಂಗನವಾಡಿ ಕಾರ್ಯಕರ್ತೆಯರೂ ಶ್ರಮಿಸಿದಂತಾಗುತ್ತದೆ ಎಂದವರು ಅಭಿಪ್ರಾಯಪಟ್ಟರು.
ಭಾರತೀಯ ರೆಡ್‌ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಶಾಖೆಯ ಕಾರ್ಯದರ್ಶಿ ಪ್ರಭಾಕರ ಶರ್ಮ ಮಾತನಾಡಿದರು.
ಭಾರತೀಯ ರೆಡ್‌ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಶಾಖೆಯ ಅಧ್ಯಕ್ಷ ಶಾಂತಾರಾಮ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ, ಬ್ಯಾಂಕ್ ಆಫ್ ಬರೋಡದ ಜನರಲ್ ಮ್ಯಾನೇಜರ್ ಎಚ್. ಎ. ನಾಗರಾಜ್, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಶಾಖೆಯ ಉಪಾಧ್ಯಕ್ಷ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯ ಡಾ| ರಾಜೇಶ್ ಡೆಂಗ್ಯೂ ಕುರಿತು ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿದರು.