Advertisement

ಸಾಮಾಜಿಕ ಜಾಲತಾಣಗಳ ಮೊರೆ ಹೋಗಲು ಪರಂ ಪತ್ರ

07:10 AM Sep 18, 2017 | Team Udayavani |

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಬಿಜೆಪಿ ನಾಯಕರು ಮಾಡುವ ಟೀಕೆ ಮತ್ತು ಆರೋಪಗಳಿಗೆ ಸಾಮಾಜಿಕ ಜಾಣತಾಣದ ಮೂಲಕವೇ ಉತ್ತರ ನೀಡುವಂತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಪಕ್ಷದ ಶಾಸಕರು, ಸಂಸದರು, ಪದಾಧಿಕಾರಿಗಳು ಹಾಗೂ ಮುಖಂಡರಿಗೆ ಪತ್ರ ಬರೆದಿದ್ದಾರೆ.

Advertisement

ಕಾಂಗ್ರೆಸ್‌ ಪಕ್ಷದ ಸಂಘಟನೆ ಮತ್ತು ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಪಕ್ಷದ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು, ನಿಗಮ-ಮಂಡಳಿ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರಿಗೆ ಪತ್ರ ಬರೆದಿರುವ ಪರಮೇಶ್ವರ್‌, ಈವರೆಗೆ ಟ್ವೀಟರ್‌ ಖಾತೆ, ಫೇಸ್‌ಬುಕ್‌, ವಾಟ್ಸಪ್‌ ಗ್ರೂಪ್‌. ಈ-ಮೇಲ್‌ ಖಾತೆ ಇಲ್ಲದೇ ಇರುವವರು ಈ ಕೂಡಲೇ ರಚಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಬೂತ್‌ ಮಟ್ಟದಿಂದ ಹಿಡಿದು ಪ್ರದೇಶ ಕಾಂಗ್ರೆಸ್‌ ಸಮಿತಿವರೆಗೆ ಯುವ ಕಾಂಗ್ರೆಸ್‌, ವಿದ್ಯಾರ್ಥಿ ಕಾಂಗ್ರೆಸ್‌, ಮಹಿಳಾ ಕಾಂಗ್ರೆಸ್‌ ಹಾಗೂ ಪಕ್ಷದ ಎಲ್ಲ ಅಂಗ ಸಂಸ್ಥೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ರಾಜ್ಯಾದ್ಯಂತ ಕಾಂಗ್ರೆಸ್‌ ಪರವಾಗಿರುವ ಮತದಾರರ ಒಲವು ಹಾಗೂ ಅಲೆಯನ್ನು ಮತ್ತೂಮ್ಮೆ ಪಕ್ಷದ ಪರವಾಗಿ ಪರಿವರ್ತಿಸಿ ರಾಜ್ಯದಲ್ಲಿ ಪುನಃ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಪರಮೇಶ್ವರ್‌ ಪತ್ರದಲ್ಲಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next