Advertisement

ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಸಚಿವ ಈಶ್ವರಪ್ಪ

02:19 PM May 19, 2020 | mahesh |

ಶಿವಮೊಗ್ಗ: ಮುಂದಿನ ಶುಕ್ರವಾರದೊಳಗೆ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಂಪೂರ್ಣ ಬಗೆಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ನಗರ ಪಾಲಿಕೆ ಸಭಾಂಗಣದಲ್ಲಿ ಸೋಮವಾರ ಪರಿಶೀಲನಾ ಸಭೆ ನಡೆಸಿದ ಅವರು, ಪಾಲಿಕೆ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ ಎಂಬ ದೂರು ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಆಸ್ಪದ ನೀಡಬಾರದು. ಕುಡಿಯುವ ನೀರಿನ ಸಮಸ್ಯೆಯನ್ನು ಸಂಪೂರ್ಣ ಬಗೆಹರಿಸಬೇಕು ಎಂದು ಸೂಚನೆ ನೀಡಿದರು. ನಗರಪಾಲಿಕೆ, ಮೆಸ್ಕಾಂ ಹಾಗೂ ಜಲಮಂಡಳಿ ಒಟ್ಟಾಗಿ ಕುಳಿತು ಕುಡಿಯುವ ನೀರು ಪೂರೈಕೆ ಬಗ್ಗೆ ಕ್ರಮ ಕೈಗೊಳ್ಳಬೇಕು. ಕಳೆದ ಏಪ್ರಿಲ್‌ ತಿಂಗಳಿನಲ್ಲಿಯೇ ಕೆಲವು ಬಡಾವಣೆಗಳಲ್ಲಿ ನೀರಿನ ಸಮಸ್ಯೆ ಇದೆ ಎಂಬ ದೂರು ಕೇಳಿ ಬಂದಿತ್ತು. ಸಮಸ್ಯೆ ಬಗೆಹರಿಸಲು ಎಷ್ಟು ದಿನ ಬೇಕು? ಸಮಸ್ಯೆ ಇದೇ ರೀತಿ ಮುಂದುವರಿಸುವುದು ಸರಿಯಲ್ಲ. ಕೂಡಲೇ ಕುಡಿಯುವ ನೀರು ಸಮರ್ಪಕವಾಗಿ ಪೂರೈಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಮುಂದಿನ ತಿಂಗಳು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್‌ ಜಿಲ್ಲೆಗೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಪಾಲಿಕೆಯಿಂದ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ಪಟ್ಟಿ ಸಿದ್ಧಪಡಿಸಿಟ್ಟುಕೊಂಡು ಅವರಿಗೆ ಸಲ್ಲಿಕೆ ಮಾಡಬೇಕು ಎಂದು ಸೂಚನೆ ನೀಡಿದರು. ನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಅಡಿ ಸಾಕಷ್ಟು ಕಾಮಗಾರಿ ನಡೆಯುತ್ತಿದೆ. ಅಲ್ಲದೆ,
ಕುಡಿಯುವ ನೀರು, ಯುಜಿಡಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಆದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳ್ಳಬೇಕು ಎಂದರು.

ಕೊಳಗೇರಿ ನಿವಾಸಿಗಳಿಗೆ ಇಲ್ಲಿಯವರೆಗೂ ಹಕ್ಕುಪತ್ರ ನೀಡಿಲ್ಲ. ಹಕ್ಕುಪತ್ರ ವಿತರಿಸಲು ಮುಂದಾಗ ಬೇಕು. ಸರ್ವೇಯರ್‌ಗಳನ್ನು ನೇಮಕ ಮಾಡಬೇಕು. ಪಾಲಿಕೆ ಆಸ್ತಿ ಉಳಿಸುವ ಕೆಲಸವಾಗಬೇಕು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಎಚ್‌.ಸಿ. ಯೋಗೇಶ್‌ ಒತ್ತಾಯಿಸಿದರು. ಸಭೆಯಲ್ಲಿ ಪಾಲಿಕೆ ಮೇಯರ್‌ ಸುವರ್ಣ ಶಂಕರ್‌, ಉಪಮೇಯರ್‌ ಸುರೇಖಾ ಮುರಳೀಧರ್‌, ಆಯುಕ್ತ ಚಿದಾನಂದ ವಟಾರೆ, ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next