ರಬಕವಿ-ಬನಹಟ್ಟಿ: ತೇರದಾಳ ಸಾವರಿನ್ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರ ಬಾಕಿಯನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಮತ್ತು ಮುಂಬರುವ ದಿನಗಳಲ್ಲಿ ಸಕ್ಕರೆ ಕಾರ್ಖಾನೆಯ ಆರಂಭಗೊಳ್ಳುತ್ತಿರುವುದು ಸಂತಸದ ಸಂಗತಿ. ಆದಷ್ಟು ಬೇಗನೆ ರೈತರ ರೂ.22 ಕೋಟಿಯಷ್ಟು ಕಬ್ಬಿನ ಬಿಲ್ ಪಾವತಿಸಲಾಗುವುದು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಮಂಗಳವಾರ ರಾತ್ರಿ ಸ್ಥಳೀಯ ತಹಶೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಮಂಗಳೂರು ಡಿಸಿಸಿ ಬ್ಯಾಂಕ್ ಕಾರ್ಯಾಧ್ಯಕ್ಷ ಹಾಗೂ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿದ್ದ ರಾಜೇಂದ್ರಕುಮಾರ ಅವರ ಜೊತೆಗೆ ಮಾತನಾಡಿ, ರೈತರ ಪರಿಸ್ಥಿತಿ ವಿವರಿಸಿದರು.
ಈ ಸಂದರ್ಭದಲ್ಲಿ ರಾಜೇಂದ್ರಕುಮಾರ ಜಿಪಂ ಮಾಜಿ ಉಪಾಧ್ಯಕ್ಷ ಮತ್ತು ರೈತ ಮುಖಂಡ ಮುತ್ತಪ್ಪ ಕೋಮಾರ ಅವರ ಜೊತೆಗೆ ಮಾತನಾಡಿ, ಕೇವಲ ಹದಿನೈದು ದಿನಗಳಲ್ಲಿ ಕಬ್ಬು ಪೂರೈಸಿದ ರೈತರ ಬಿಲ್ ಪಾವತಿಸುವ ಮತ್ತು ಸಕ್ಕರೆ ಕಾರ್ಖಾನೆಯನ್ನು ಪುನಃ ಆರಂಭಿಸುವ ಎಲ್ಲ ಪ್ರಕ್ರಿಯೆಗಳು ನಡೆದಿವೆ ಎಂದು ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆ ಹಿಂಪಡೆದರು.
ರೈತ ಮುಖಂಡ ಮುತ್ತಪ್ಪ ಕೋಮಾರ ಮಾತನಾಡಿ, ನಾಲ್ಕು ವರ್ಷಗಳಿಂದ ರೈತರು ಬಹಳಷ್ಟು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ ಗೋಕಾಕ ತಾಲೂಕಿನ ಹಲವಾರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದ್ದರಿಂದ ಮುಂಬರುವ ದಿನಗಳಲ್ಲಿ ಶಾಸಕರು ಇನ್ನಷ್ಟು ಪ್ರಯತ್ನ ಮಾಡಿ ಆದಷ್ಟು ಬೇಗನೆ ರೈತರಿಗೆ ಬಿಲ್ ಪಾವತಿಸುವ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ರೈತ ಮುಖಂಡ ಗಂಗಾಧರ ಮೇಟಿ ಮಾತನಾಡಿ, ಸಸಾಲಟ್ಟಿ ಏತ ನೀರಾವರಿ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಧನವನ್ನು ಆದಷ್ಟು ಬೇಗನೆ ನೀಡಬೇಕು ಎಂದು ಆಗ್ರಹಿಸಿದರು. ರೈತ ಮುಖಂಡ ಹೊನ್ನಪ್ಪ ಬಿರಡಿ ಮಾತನಾಡಿದರು. ಈ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರು ಇದ್ದರು.