ಸೊರಬ: ಭಾರತೀಯರು ಕಂಡ ಕನಸು ನನಸಾಗುವ ಸಂದರ್ಭ ಬಂದಿದ್ದು, ಅಯೋಧ್ಯೆಯಲ್ಲಿ ಶ್ರೀ ರಾಮನ ಭವ್ಯ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಪ್ರತಿಯೊಬ್ಬರೂ ಸಮರ್ಪಣಾ ಮನೋಭಾವದಿಂದ ನಿಧಿ ಸಮರ್ಪಣಾ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಕರೆ ನೀಡಿದರು.
ಪಟ್ಟಣದ ಚಿಕ್ಕಪೇಟೆಯಲ್ಲಿ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಕ್ಷೇತ್ರ ಟ್ರಸ್ಟ್ ವತಿಯಿಂದ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರದ ನಿಧಿ ಸಮರ್ಪಣಾ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಸಾವಿರಾರು ವರ್ಷಗಳ ಇತಿಹಾಸವಿರುವ ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅಡಿಗಲ್ಲು ಹಾಕಿದ್ದಾರೆ. ಮಂದಿರ ನಿರ್ಮಾಣ ಕಾರ್ಯವೂ ಸಹ ಯಶಸ್ವಿಯಾಗಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ನಿಧಿ ಸಮರ್ಪಣಾ ಅಭಿಯಾನ ಕೈಗೊಳ್ಳಲಾಗಿದ್ದು, ಜಾತಿ, ಮತಗಳ ಬೇಧವಿಲ್ಲದೇ ಎಲ್ಲರೂ ಕೈಜೋಡಿಸಬೇಕು ಎಂದರು.
ಆರ್‌ಎಸ್‌ಎಸ್ ಸ್ವಯಂಸೇವಕ ಸುಧಾಕರ ಭಾವೆ ಮಾತನಾಡಿ, ಅಯೋಧ್ಯೆಯಲ್ಲಿ ಹಲವು ವರ್ಷಗಳ ಹೋರಾಟದ ಫಲವಾಗಿ ಮಂದಿರ ನಿರ್ಮಾಣವಾಗುತ್ತಿದೆ. ಇಂತಹ ಪವಿತ್ರ ಕಾರ್ಯದಲ್ಲಿ ಪ್ರತಿಯೊಬ್ಬರೂ ತೊಡಗಿಕೊಳ್ಳಬೇಕು. 10 ರೂ.ನಿಂದ ಎಷ್ಟು ಬೇಕಾದರೂ ದೇಣಿಗೆ ನೀಡಬಹುದು ಎಂದರು.
ಶಾಸಕ ಎಸ್. ಕುಮಾರ್ ಬಂಗಾರಪ್ಪ ಅವರು ನಿಧಿ ಸಮರ್ಪಣಾ ಅಭಿಯಾನ ಅಂಗವಾಗಿ ಬಂದಗಿ ಬಸವರಾಜ ಶೇಟ್, ಗಿರೀಶ್ ಶೇಟ್ ಸೇರಿದಂತೆ ಅನೇಕ ಮನೆಗಳಿಗೆ ಭೇಟಿ ನೀಡಿ ದೇಣಿಗೆ ಸಂಗ್ರಹಿಸಿದರು.